ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ಎಲ್ಲಾ ಇಲಾಖೆಗಳು, ಬ್ಯಾಂಕ್‌ಗಳು ಹಾಗೂ ಸ್ಥಳೀಯ ಸಂಸ್ಥೆಗಳು ಆಡಳಿತದಲ್ಲಿ ಕನ್ನಡ ಭಾಷೆಯ ಸಮರ್ಪಕ ಅನುಷ್ಠಾನಕ್ಕೆ ಆದ್ಯತೆ ನೀಡಬೇಕು. ಕನ್ನಡ ನಾಮಫಲಕಗಳನ್ನು ಕಡ್ಡಾಯವಾಗಿ ಅಳವಡಿಸಬೇಕು ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ ಸೂಚಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಮಟ್ಟದ ಅಧಿಕಾರಿಗಳೊಂದಿಗೆ ನಡೆದ ಕನ್ನಡ ಅನುಷ್ಠಾನ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕನ್ನಡ ನಮ್ಮ ಮಾತೃಭಾಷೆಯಾಗಿರುವುದರ ಜೊತೆಗೆ ರಾಜ್ಯದ ಆಡಳಿತ ಭಾಷೆಯೂ ಆಗಿದೆ. ಆಡಳಿತದ ವ್ಯವಹಾರಗಳಿಗೆ ಮಾತ್ರ ಸೀಮಿತವಾಗದೆ ಕನ್ನಡ ನಮ್ಮ ಹೃದಯಭಾಷೆಯಾಗಬೇಕು. ಆಗ ಮಾತ್ರ ಕನ್ನಡವನ್ನು ಉಳಿಸಿ ಬೆಳೆಸಲು ಸಾಧ್ಯವಾಗುತ್ತದೆ ಎಂದು ಅವರು ಹೇಳಿದರು.
ಆಡಳಿತದಲ್ಲಿ ಕನ್ನಡ ಅನುಷ್ಠಾನಕ್ಕೆ ಇರುವ ಕೊರತೆಗಳನ್ನು ನಿವಾರಿಸಿ, ಜಿಲ್ಲಾ ಹಾಗೂ ತಾಲೂಕು ಮಟ್ಟದ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ 60×40 ಅಳತೆಯ ಕನ್ನಡ ನಾಮಫಲಕಗಳನ್ನು ಕಡ್ಡಾಯವಾಗಿ ಅಳವಡಿಸಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
1994ರಲ್ಲಿ ಸ್ಥಾಪನೆಯಾದ ಕನ್ನಡ ಅಭಿವೃದ್ಧಿ ಪ್ರಾಧಿಕಾರವು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕನ್ನಡ ಅನುಷ್ಠಾನದ ಸ್ಥಿತಿಗತಿಗಳನ್ನು ಪರಿಶೀಲಿಸಿ ಸರ್ಕಾರಕ್ಕೆ ವರದಿ ಸಲ್ಲಿಸುತ್ತಿದೆ. 2015ರ ಸಮಗ್ರ ಕನ್ನಡ ಅನುಷ್ಠಾನ ನೀತಿಯಂತೆ ಕನ್ನಡವನ್ನು ಮೊದಲ ಭಾಷೆಯಾಗಿ ಕಲಿಸುವುದು, ಜಿಲ್ಲಾಮಟ್ಟದಲ್ಲಿ ಕನ್ನಡ ಜಾಗೃತಿ ಸಮಿತಿ ಸಭೆಗಳನ್ನು ನಡೆಸುವುದು ಹಾಗೂ ಇತರ ಭಾಷಿಕರಿಗೆ ಕನ್ನಡ ಕಲಿಸಲು ಅಗತ್ಯ ತರಬೇತಿ ವ್ಯವಸ್ಥೆ ರೂಪಿಸಬೇಕಾಗಿದೆ ಎಂದು ತಿಳಿಸಿದರು.

ಆಸ್ಪತ್ರೆಗಳಲ್ಲಿ ವೈದ್ಯರು ರೋಗಿಗಳಿಗೆ ನೀಡುವ ಔಷಧ ಚೀಟಿಗಳಲ್ಲಿ ಕನಿಷ್ಠ ರೋಗಿಯ ಹೆಸರು ಸೇರಿದಂತೆ ಅಗತ್ಯ ಮಾಹಿತಿಯನ್ನು ಕನ್ನಡದಲ್ಲೇ ದಾಖಲಿಸಬೇಕು. ಬ್ಯಾಂಕ್‌ಗಳಲ್ಲಿ ಚಲನ್‌ಗಳು ಕನ್ನಡದಲ್ಲಿರಬೇಕು. ಕನ್ನಡ ಬಾರದ ಬ್ಯಾಂಕ್ ಅಧಿಕಾರಿಗಳಿಗೆ ಕನ್ನಡ ಕಲಿಸುವ ಕಾರ್ಯಾಗಾರಗಳನ್ನು ಹಮ್ಮಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು ಕನ್ನಡ ವಿಷಯದಲ್ಲೇ ಅನುತ್ತೀರ್ಣರಾಗುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ. ಇದನ್ನು ತಡೆಯಲು ಪಠ್ಯಪುಸ್ತಕಗಳ ಪರಿಷ್ಕರಣೆ ಅಗತ್ಯವಾಗಿದೆ. ಶತಮಾನ ಪೂರೈಸಿದ ಕನ್ನಡ ಶಾಲೆಗಳನ್ನು ರಾಷ್ಟ್ರನಾಯಕರು, ಸ್ವಾತಂತ್ರ್ಯ ಹೋರಾಟಗಾರರು ಹಾಗೂ ಖ್ಯಾತ ಕವಿಗಳ ಹೆಸರಿನಲ್ಲಿ ಪಾರಂಪರಿಕ ಶಾಲೆಗಳಾಗಿ ಅಭಿವೃದ್ಧಿಪಡಿಸಬೇಕು. ಸರ್ಕಾರಿ ಶಾಲೆಗಳ ಆಸ್ತಿ ಹಕ್ಕುಪತ್ರ ನೋಂದಣಿಗೂ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.
ಜಾಗತೀಕರಣದ ಪ್ರಭಾವದಿಂದ ಕನ್ನಡಿಗರೇ ಕನ್ನಡವನ್ನು ಕಡೆಗಣಿಸುತ್ತಿರುವುದು ವಿಷಾದನೀಯ. ರಾಜ್ಯದಾದ್ಯಂತ ಆಂದೋಲನದ ಮಾದರಿಯಲ್ಲಿ ಕನ್ನಡ ಅಭಿಯಾನ ಆರಂಭಿಸುವ ಅಗತ್ಯವಿದೆ. ಗಡಿಭಾಗಗಳಲ್ಲಿ ಕನ್ನಡದ ಬಳಕೆಗೆ ಯಾವುದೇ ತೊಡಕಾಗದಂತೆ ಎಚ್ಚರ ವಹಿಸಬೇಕು. ರಸ್ತೆಗಳು, ಅಂಗಡಿ-ಮುಂಗಟ್ಟುಗಳಲ್ಲಿ ಕನ್ನಡ ನಾಮಫಲಕ ಕಡ್ಡಾಯವಾಗಬೇಕು. ಕೈಗಾರಿಕೆಗಳಲ್ಲಿ ಕನಿಷ್ಠ ಶೇ.40ರಷ್ಟು ಉದ್ಯೋಗಗಳನ್ನು ಸ್ಥಳೀಯ ಕನ್ನಡಿಗರಿಗೆ ನೀಡುವಂತೆ ಕ್ರಮ ಕೈಗೊಳ್ಳಬೇಕು ಎಂದು ಪುರುಷೋತ್ತಮ ಬಿಳಿಮಲೆ ಒತ್ತಾಯಿಸಿದರು.
ಸಭೆಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಶ್ರೀರೂಪ ಅವರು, ಜಿಲ್ಲೆಯ ಕೈಗಾರಿಕೆಗಳಿಗೆ ಭೇಟಿ ನೀಡಿ ಸ್ಥಳೀಯ ಕನ್ನಡಿಗರಿಗೆ ಉದ್ಯೋಗದಲ್ಲಿ ಆದ್ಯತೆ ನೀಡಲಾಗುತ್ತಿದೆಯೇ ಎಂಬುದನ್ನು ಪರಿಶೀಲಿಸಲಾಗುವುದು. ಸರ್ಕಾರದ ಮಾರ್ಗಸೂಚಿಯಂತೆ ಸ್ಥಳೀಯರಿಗೆ ನಿಗದಿತ ಪ್ರಮಾಣದಲ್ಲಿ ಉದ್ಯೋಗ ದೊರೆಯುವಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.
ಈ ಸುದ್ಧಿ ಓದಿದ್ದೀರಾ? ಟ್ರಂಪ್ ಹತ್ಯೆಗೆ ಇರಾನ್ ಸಂಚು: ಅಮೆರಿಕದೊಂದಿಗೆ ಗುಪ್ತಚರ ಮಾಹಿತಿ ಹಂಚಿಕೊಂಡ ಇಸ್ರೇಲ್
ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ. ಮುತ್ತುರಾಜು, ಬಿ.ಆರ್.ಟಿ. ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಶ್ರೀಪತಿ, ಹೆಚ್ಚುವರಿ ಜಿಲ್ಲಾಧಿಕಾರಿ ಟಿ. ಜವರೇಗೌಡ, ಉಪವಿಭಾಗಾಧಿಕಾರಿ ದಿನೇಶ್ ಕುಮಾರ್ ಮೀನಾ, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಡಿ.ಸಿ. ಶೃತಿ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಡಾ. ಸಂತೋಷ್ ಹಾನಗಲ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ರಾಜು, ಹಿರಿಯ ಸದಸ್ಯರಾದ ಡಾ. ಗುರುರಾಜ್, ರೂಬಿನ್ ಸಂಜಯ್, ಕನ್ನಡ ಜಿಲ್ಲಾ ಜಾಗೃತಿ ಸಮಿತಿ ಸದಸ್ಯರಾದ ಅರುಣ್ ಕುಮಾರ್, ಪಿ. ಮಹೇಶ್ ಸೇರಿದಂತೆ ಜಿಲ್ಲಾಮಟ್ಟದ ಅಧಿಕಾರಿಗಳು ಇದ್ದರು.




