ಸಮಾಜದಲ್ಲಿ ಮಾದಕ ವಸ್ತುಗಳ ಬಳಕೆ ಮತ್ತು ಅಕ್ರಮ ಸಾಗಾಟ ತಡೆಗಟ್ಟುವಲ್ಲಿ ಪೊಲೀಸ್ ಇಲಾಖೆ ಜತೆಗೆ ಸಾರ್ವಜನಿಕರು, ಪೋಷಕರು ಸೇರಿದಂತೆ ಇಂದಿನ ಯುವಜನತೆಯ ಸಹಕಾರವು ಅತ್ಯವಶ್ಯಕವಾಗಿದೆ ಎಂದು ಬಾಗೇಪಲ್ಲಿ ತಾಲ್ಲೂಕು ಕಾನೂನು ಸೇವಾ ಸಮಿತಿ ಕಾರ್ಯದರ್ಶಿ ಹಾಗೂ ಜೆ.ಎಂ.ಎಫ್.ಸಿ.ನ್ಯಾಯಾಲಯದ ನ್ಯಾಯಾಧೀಶರಾದ ಎಸ್. ರಂಜಿತಾ ರವರು ಅಭಿಪ್ರಾಯಪಟ್ಟರು.
ಬಾಗೇಪಲ್ಲಿ ಪಟ್ಟಣದ ಬಾಲಕಿಯರ ಪ್ರೌಢಶಾಲೆಯ ಆವರಣದಲ್ಲಿ ಶನಿವಾರ ನಡೆದ ಮಾದಕ ವಸ್ತುಗಳಿಂದ ಆಗುವ ದುಷ್ಪರಿಣಾಮ ಕುರಿತು ಜಾಗೃತಿ ಜಾಥಾ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.
ಭವಿಷ್ಯತ್ತಿನ ಉತ್ತಮ ಪ್ರಜೆಗಳಾಗಲು ಹಾಗೂ ಉತ್ತಮ ಸಮಾಜ ನಿರ್ಮಿಸಲು ವಿದ್ಯಾಭ್ಯಾಸದ ಕಡೆಗೆ ಹೆಚ್ಚು ಗಮನವಹಿಸಬೇಕು. ಯಾವುದೇ ಕಾರಣಕ್ಕೂ ಮಾದಕ ವಸ್ತುಗಳ ವ್ಯಸನಿಗಳಾಗಬಾರದು. ಕುಟುಂಬದ ಮೇಲೆ ಗಂಭೀರ ಪರಿಣಾಮ ಬೀರುವುದರಿಂದ ಮಾದಕ ವಸ್ತುಗಳಿಂದ ಅತ್ಯಂತ ಜಾಗೃತರಾಗಿರಬೇಕು. ಸ್ವಸ್ಥ ಸಮಾಜದಲ್ಲಿ ಆರೋಗ್ಯವಂತ ಜೀವನವನ್ನು ನಡೆಸಬೇಕು ಎಂದರು.
ಮಾದಕ ವಸ್ತುಗಳ ಸೇವನೆಗೆ ಹೆಚ್ಚಾಗಿ ವಿದ್ಯಾರ್ಥಿಗಳೇ ದಾಸರಾಗುತ್ತಿದ್ದಾರೆ. ಇದಕ್ಕೆ ಮುಖ್ಯ ಕಾರಣ ಅವರು ಮಾಡಿಕೊಳ್ಳುವ ಸ್ನೇಹಿತ ವರ್ಗ ಅಥವಾ ಜೀವನದಲ್ಲಿ ಗುರಿ ಸಾಧಿಸಲು ಶ್ರಮಿಸದೇ ಇರವುದು. ದೇಶದ ಮುಂದಿನ ಶಕ್ತಿಯಾಗಬೇಕಿರುವ ಯುವ ಜನತೆ ಇಂತಹ ದುಶ್ಚಟಗಳಿಗೆ ದಾಸರಾಗುತ್ತಿದ್ದಾರೆ. ಇದನ್ನು ತಡೆಗಟ್ಟಲು ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂದು ಮನವಿ ಮಾಡಿದರು.
ಮಾದಕ ವಸ್ತುಗಳಿಂದ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ತಿಳಿದುಕೊಂಡು ಅದರಿಂದ ಸದಾ ದೂರವಿರಬೇಕು. ವಿದ್ಯಾರ್ಥಿಗಳು ಜ್ಞಾನಾರ್ಜನಗೆ ಮೊದಲ ಆದ್ಯತೆ ನೀಡಿ ಉತ್ತಮ ಜೀವನ ರೂಪಿಸಿಕೊಳ್ಳಬೇಕು ಎಂದರು.
ಬಿಇಓ ಎನ್.ವೆಂಕಟೇಶಪ್ಪ ಮಾತನಾಡಿ, ವಿಶ್ವದಾದ್ಯಂತ ಮಾದಕ ವಸ್ತುಗಳ ದುಶ್ಚಟಗಳಿಗೆ ಇತ್ತೀಚಿನ ವರ್ಷಗಳಲ್ಲಿ ಮಕ್ಕಳು ಮತ್ತು ಯುವಕರು ಹೆಚ್ಚು ಬಲಿಯಾಗುತ್ತಿದ್ದಾರೆ. ಮಾದಕ ವಸ್ತುಗಳ ಮಾರಾಟ ಹಾಗೂ ಸಾಗಾಣೆ ಕಾನೂನ ಬಾಹಿರ ಎಂದು ಗೊತ್ತಿದ್ದರೂ ಇದರ ದಂಧೆ ಎಗ್ಗಿಲ್ಲದೆ ನಡೆಯುತ್ತಿದೆ. ಡ್ರಗ್ ಮಾಫಿಯಾ ಹತೋಟಿಗೆ ತರಲು ವಿಶ್ವದೆಲ್ಲೆಡೆ ಕಾನೂನು ಪ್ರಯತ್ನಗಳು ನಡೆಯುತ್ತಿವೆ. ಆದರೆ ಇದನ್ನು ಬುಡ ಸಮೇತ ಕಿತ್ತು ಹಾಕಲು ಸಾರ್ವಜನಿಕರ ಸಹಕಾರ ಅಷ್ಟೇ ಪ್ರಮುಖವಾಗಿದೆ ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ಮಾದಕ ವಸ್ತುಗಳನ್ನು ಬಳಸುವುದಿಲ್ಲವೆಂದು ಶಾಲಾ ಮಕ್ಕಳಿಂದ ಪ್ರತಿಜ್ಞಾ ವಿಧಿ ಸ್ವೀಕರಿಸಲಾಯಿತು.
ಇದನ್ನು ಓದಿದ್ದೀರಾ..?ಕೋಲಾರ | ಕಾಂಗ್ರೆಸ್ಸಿಗರನ್ನು ತುಂಡು ಮಾಡಿ ಅರಬ್ಬಿ ಸಮುದ್ರಕ್ಕೆ ಎಸೆಯುವ ಹೇಳಿಕೆ: ನಗರ ಪೊಲೀಸ್ ಠಾಣೆಯಲ್ಲಿ 3 ದೂರು ಸಲ್ಲಿಕೆ
ಈ ಸಂದರ್ಭದಲ್ಲಿ ಶಿಕ್ಷಣ ಸಮನ್ವಯಾಧಿಕಾರಿಗಳಾದ ಎನ್.ವೆಂಕಟರಾಮ್,ಆರ್.ಹನುಮಂತ ರೆಡ್ಡಿ, ಸರ್ಕಾರಿ ಬಾಲಕಿಯರ ಪ್ರೌಢಶಾಲಾ ಮುಖ್ಯ ಶಿಕ್ಷಕ ಆದಿನಾರಾಯಣ,ಶ್ರೀನಿವಾಸ್, ಈಶ್ವರಪ್ಪ,ಮನೋಹರ, ಪಕೃಧೀನ್,ವಕೀಲರ ಸಂಘದ ಅದ್ಯಕ್ಷ ಮಂಜುನಾಥ, ಉಪಾಧ್ಯಕ್ಷ ಸಿ.ರವಿ,ಬಲು ನಾಯಕ್, ಮಲ್ಲಿಕಾರ್ಜುನ, ಜಿ.ಬಾಬು,ಸುಧಾಕರ್ ಹಾಗೂ ಶಾಲಾ ಮಕ್ಕಳು ಶಿಕ್ಷಕರು ಹಾಜರಿದ್ದರು.



