ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭಾಗವಹಿಸಿದ್ದ ಕಾರ್ಯಕ್ರಮದ ಸ್ಥಳದಲ್ಲಿ ನಡೆದ ಶುದ್ಧೀಕರಣ ವಿಧಿ ವಿರುದ್ಧ ಹೇಳಿಕೆ ನೀಡಿದ್ದ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ಎಫ್ಐಆರ್ ದಾಖಲಿಸಿರುವುದನ್ನು ಖಂಡಿಸಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ನಗರದಲ್ಲಿ ಪ್ರತಿಭಟನೆ ನಡೆಯಿತು.
ಜಿಲ್ಲಾ ಕಾಂಗ್ರೆಸ್ ಕಚೇರಿಯಿಂದ ನೂರಾರು ಕಾಂಗ್ರೆಸ್ ಕಾರ್ಯಕರ್ತರು ಕಾಲ್ನಡಿಗೆಯಲ್ಲಿ ನಗರದ ಶಿಡ್ಲಘಟ್ಟ ವೃತ್ತಕ್ಕೆ ತೆರಳಿ ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ನಡೆಸಿದರು. ಶುದ್ಧೀಕರಣ ವಿಧಿ ನಡೆಸಿದವರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದೆ,ಅದರ ವಿರುದ್ಧ ಧ್ವನಿ ಎತ್ತಿದ ರಾಹುಲ್ ಗಾಂಧಿ ವಿರುದ್ಧ ಪ್ರಕರಣ ದಾಖಲಿಸಿರುವುದು ಖಂಡನೀಯ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೇಶವ ರೆಡ್ಡಿ ಮಾತನಾಡಿ,ಹಲವು ಆಶ್ವಾಸನೆಗಳನ್ನು ನೀಡಿ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದ ಬಿಜೆಪಿ ಸರಕಾರ ಜ್ವಲಂತ ಸಮಸ್ಯೆಗಳ ಪರಿಹಾರಕ್ಕೆ ಸೂಕ್ತ ಗಮನ ನೀಡುತ್ತಿಲ್ಲ.ನಿರುದ್ಯೋಗ, ರೈತರ ಸಮಸ್ಯೆಗಳು, ವಿದ್ಯಾರ್ಥಿಗಳ ವಿವಿಧ ಬೇಡಿಕೆಗಳು ಸೇರಿದಂತೆ ಹಲವು ಸಮಸ್ಯೆಗಳು ಮುಂದುವರಿದಿವೆ.ಇವುಗಳ ಕುರಿತು ರಾಹುಲ್ ಗಾಂಧಿ ನಿರಂತರವಾಗಿ ಧ್ವನಿ ಎತ್ತುತ್ತಿದ್ದಾರೆ. ಅವರ ಧ್ವನಿಯನ್ನು ಹತ್ತಿಕ್ಕಲು ಬಿಜೆಪಿ ವಿವಿಧ ರೀತಿಯಲ್ಲಿ ಪ್ರಯತ್ನಿಸುತ್ತಿದ್ದರೂ ಅದು ಸಾಧ್ಯವಾಗುತ್ತಿಲ್ಲ ದಲಿತರು,ರೈತರು ಹಾಗೂ ಕಾರ್ಮಿಕರ ಪರ ನಿರಂತರವಾಗಿ ಧ್ವನಿ ಎತ್ತುತ್ತಿರುವ ರಾಹುಲ್ ಗಾಂಧಿ ಅವರ ಜನಪರ ಕಾಳಜಿಯನ್ನು ವಿರೋಧ ಪಕ್ಷಗಳಿಗೆ ಸಹಿಸಲಾಗುತ್ತಿಲ್ಲ,
ಮಲ್ಲಿಕಾರ್ಜುನ ಖರ್ಗೆ ಭಾಗವಹಿಸಿದ್ದ ಕಾರ್ಯಕ್ರಮದ ಸ್ಥಳದಲ್ಲಿ ಶುದ್ಧೀಕರಣ ವಿಧಿ ನಡೆಸಿದವರ ವಿರುದ್ಧ ಕ್ರಮ ಕೈಗೊಳ್ಳದೆ,ಅದನ್ನು ಪ್ರಶ್ನಿಸಿದ ರಾಹುಲ್ ಗಾಂಧಿ ವಿರುದ್ಧ ಎಫ್ಐಆರ್ ದಾಖಲಿಸಿರುವುದು ಎಷ್ಟರ ಮಟ್ಟಿಗೆ ಸರಿ ಎಂದು ಪ್ರಶ್ನಿಸಿದ ಅವರು,ಕೂಡಲೇ ಎಫ್ಐಆರ್ ಹಿಂಪಡೆಯಬೇಕು.ಇಲ್ಲವಾದರೆ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲಾಗುವುದು ಎಂದು ಎಚ್ಚರಿಸಿದರು.
ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಯಲುವಹಳ್ಳಿ ಎನ್.ರಮೇಶ್ ಮಾತನಾಡಿ, ಕೇಂದ್ರದ ಬಿಜೆಪಿ ಸರಕಾರ ಕೇವಲ ಘೋಷಣೆಗಳಿಗೆ ಸೀಮಿತವಾಗಿದೆಯೇ ಹೊರತು,ದೇಶದ ಯುವಕರಿಗೆ ಉದ್ಯೋಗ ಕಲ್ಪಿಸುವ ಭರವಸೆಯನ್ನು ಈಡೇರಿಸಿಲ್ಲ. ಪ್ರತಿಯೊಬ್ಬರ ಖಾತೆಗೆ 15 ಲಕ್ಷ ಜಮೆ ಮಾಡುವುದಾಗಿ ಭರವಸೆ ನೀಡಲಾಗಿತ್ತು.ಆದರೆ ಅದು ಕೂಡ ಈಡೇರಿಲ್ಲ ದೇಶದ ಯುವಕರು ಪ್ರಧಾನಿ ನರೇಂದ್ರ ಮೋದಿ ಅವರ ಮೇಲೆ ಅಪಾರ ನಂಬಿಕೆ ಇಟ್ಟಿದ್ದರು.ಆದರೆ ಆ ನಂಬಿಕೆಗೆ ತಕ್ಕಂತೆ ಸರಕಾರ ನಡೆದುಕೊಂಡಿಲ್ಲ.ಬದಲಾಗಿ ಎಲ್ಲವೂ ಇದಕ್ಕೆ ತದ್ವಿರುದ್ಧವಾಗಿ ನಡೆಯುತ್ತಿದೆ ಉದ್ಯಮಿಗಳ ಸಾಲ ಮನ್ನಾ ಮಾಡಲಾಗುತ್ತಿದೆ.ಆದರೆ ರೈತರ ಸಾಲ ಮನ್ನಾ ಮಾಡಲು ಸರ್ಕಾರ ಮುಂದಾಗುತ್ತಿಲ್ಲ ಎಂದು ಆರೋಪಿಸಿದರು.
ಈ ಎಲ್ಲ ವಿಚಾರಗಳ ಕುರಿತು ರಾಹುಲ್ ಗಾಂಧಿ ಅವರು ನಿರಂತರವಾಗಿ ಪ್ರಶ್ನಿಸುತ್ತಾ ಜನಸಾಮಾನ್ಯರ ಬಳಿಗೆ ತೆರಳಿ ಧ್ವನಿ ಎತ್ತುತ್ತಿದ್ದಾರೆ.ಇದನ್ನು ಸಹಿಸದ ಬಿಜೆಪಿ ಅವರ ವಿರುದ್ಧ ಅಪಪ್ರಚಾರ ನಡೆಸಿ,ಅವರ ಧ್ವನಿಯನ್ನು ಹತ್ತಿಕ್ಕಲು ಪ್ರಯತ್ನಿಸುತ್ತಿದೆ ಮಲ್ಲಿಕಾರ್ಜುನ ಖರ್ಗೆ ಅವರು ಭಾಗವಹಿಸಿದ್ದ ಕಾರ್ಯಕ್ರಮದ ಸ್ಥಳದಲ್ಲಿ ಶುದ್ಧೀಕರಣ ವಿಧಿ ನಡೆಸಿದ ವಿಚಾರದ ವಿರುದ್ಧ ರಾಹುಲ್ ಗಾಂಧಿ ಧ್ವನಿ ಎತ್ತಿದ್ದಕ್ಕೆ ಅವರ ವಿರುದ್ಧವೇ ಎಫ್ಐಆರ್ ದಾಖಲಿಸಿರುವುದು ರಾಹುಲ್ ಗಾಂಧಿ ಅವರ ವಿರೋಧಿಗಳ ಹತಾಶೆಯನ್ನು ತೋರಿಸುತ್ತದೆ ಎಂದು ಯಲುವಹಳ್ಳಿ ಎನ್.ರಮೇಶ್ ಹೇಳಿದರು.
ಇದನ್ನು ಓದಿದ್ದೀರಾ..?ಕೋಲಾರ | ಚೋಳಘಟ್ಟ ಗಡಿ ಗ್ರಾಮದಲ್ಲಿ ಮಂಜೂರಾದ ಜಮೀನಿಗೆ ಅತಿಕ್ರಮಣ ಆರೋಪ
ಮಾಜಿ ಶಾಸಕರಾದ ಕೆ.ಪಿ.ಬಚ್ಚೇಗೌಡ, ಅನುಸೂಯಮ್ಮ,ಸಂದೀಪ್ ಚಕ್ರವರ್ತಿ,ಮಾತನಾಡಿದರು.ಕಾಂಗ್ರೇಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರೆಸ್ ಸುರೇಶ್,ಜಿ.ಪಂ ಮಾಜಿ ಅಧ್ಯಕ್ಷ ಗಂಗರೇ ಕಾಲವೇ ನಾರಾಯಣಸ್ವಾಮಿ,ನಾಯನಹಳ್ಳಿ ನಾರಾಯಣಸ್ವಾಮಿ,ಬಾಬಾ ಜಾನ್,ಮಹಿಳಾ ಕಾಂಗ್ರೆಸ್ ನ ಮಂಗಳಪ್ರಕಾಶ್,ಉಷಾ, ವೆಂಕಟಲಕ್ಷಮ್ಮ , ಮಮತಾ ಮೂರ್ತಿ,ಮುದ್ದೇನಹಳ್ಳಿ ಮೋಹನ್ ಮತ್ತು ಇತರರು ಉಪಸ್ಥಿತರಿದ್ದರು.
ಚಿಕ್ಕಬಳ್ಳಾಪುರ | ಮಲ್ಲಿಕಾರ್ಜುನ ಖರ್ಗೆ ಭಾಗವಹಿಸಿದ್ದ ಕಾರ್ಯಕ್ರಮದ ಸ್ಥಳದಲ್ಲಿ ನಡೆದ ಶುದ್ಧೀಕರಣ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ
ಪೋಸ್ಟ್ ಹಂಚಿಕೊಳ್ಳಿ:





