ಶಾಲಾ-ಕಾಲೇಜುಗಳಲ್ಲಿ ವಿದ್ಯಾರ್ಥಿಗಳು ಕೇವಲ ವಿಷಯಾಧಾರಿತ ಓದಿಗೆ ಮಾತ್ರ ಸೀಮಿತವಾಗದೆ,ಪಠ್ಯೇತರ ಚಟುವಟಿಕೆಗಳಲ್ಲೂ ಆಸಕ್ತಿ ತೋರಬೇಕು.ಇಂತಹ ಚಟುವಟಿಕೆಗಳು ವಿದ್ಯಾರ್ಥಿಗಳ ಬೌದ್ಧಿಕ ಹಾಗೂ ದೈಹಿಕ ಬೆಳವಣಿಗೆಗೆ ಸಹಕಾರಿಯಾಗುತ್ತವೆ ಎಂದು ಸಂಚಾರಿ ಪೊಲೀಸ್ ಠಾಣೆಯ ಪಿಎಸ್‌ಐ ವಿದ್ಯಾ ಹೇಳಿದರು.
ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿ (ಕೆಜೆವಿಎಸ್) ಚಿಕ್ಕಬಳ್ಳಾಪುರ ಜಿಲ್ಲಾ ಘಟಕದ ವತಿಯಿಂದ ಸರ್ ಸಿ.ವಿ. ರಾಮನ್ ಜಯಂತಿ ಅಂಗವಾಗಿ ಆಯೋಜಿಸಿದ್ದ ಆನ್‌ಲೈನ್ ವಿಜ್ಞಾನ ರಸಪ್ರಶ್ನೆ ಸ್ಪರ್ಧೆಯ ವಿಜೇತರಿಗೆ ನಗರದ ನಂದಿ ರಂಗಮಂದಿರದಲ್ಲಿ ಹಮ್ಮಿಕೊಂಡಿದ್ದ ಬಹುಮಾನ ವಿತರಣಾ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಕೆಜೆವಿಎಸ್ ವಿದ್ಯಾರ್ಥಿಗಳಲ್ಲಿ ವಿಜ್ಞಾನ ಚಟುವಟಿಕೆಗಳ ಬಗ್ಗೆ ಆಸಕ್ತಿ ಮೂಡಿಸುವ ಕೆಲಸ ಮಾಡುತ್ತಿರುವುದು ಶ್ಲಾಘನೀಯ ವಿದ್ಯಾರ್ಥಿಗಳು ಇಂತಹ ಪಠ್ಯೇತರ ಚಟುವಟಿಕೆಗಳಲ್ಲಿ ಪಾಲ್ಗೊಂಡರೆ ಉನ್ನತ ಶಿಕ್ಷಣಕ್ಕೆ ತೆರಳುವ ಸಂದರ್ಭದಲ್ಲಿ ಹೆಚ್ಚಿನ ಅನುಕೂಲವಾಗುತ್ತದೆ. ವಿಷಯಾಧಾರಿತ ಓದು ಪರೀಕ್ಷೆಗೆ ಸೀಮಿತವಾಗಬಹುದು. ಆದರೆ ಪಠ್ಯೇತರ ಚಟುವಟಿಕೆಗಳು ವಿದ್ಯಾರ್ಥಿಗಳ ಮನಸ್ಸು ಮತ್ತು ದೇಹದ ಸರ್ವತೋಮುಖ ಬೆಳವಣಿಗೆಗೆ ಸಹಕಾರಿಯಾಗುತ್ತವೆ ಎಂದು ಹೇಳಿದರು.
ಇದನ್ನು ಓದಿದ್ದೀರಾ..?ಕೋಲಾರ | ಜು.22 ರಂದು ನೀಟ್ ವಿರುದ್ದ ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಛಾತ್ರೋಂಕಿ ಗುಂಜ್ ಕಾರ್ಯಕ್ರಮ
ಕೆಜೆವಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಬಸವರಾಜ್ ಮಾತನಾಡಿ,ಮಕ್ಕಳಲ್ಲಿ ಸ್ಪರ್ಧಾ ಮನೋಭಾವ ಬೆಳೆಸುವ ಉದ್ದೇಶದಿಂದ ಕೆಜೆವಿಎಸ್ ವತಿಯಿಂದ ಪ್ರತಿವರ್ಷ ಸ್ವಾತಂತ್ರ್ಯ ದಿನಾಚರಣೆ ಹಾಗೂ ಸರ್ ಸಿ.ವಿ. ರಾಮನ್ ಜನ್ಮದಿನದ ಅಂಗವಾಗಿ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗುತ್ತಿದೆ.ರಾಜ್ಯ, ಜಿಲ್ಲಾ,ತಾಲೂಕು ಹಾಗೂ ಶಾಲಾ ಮಟ್ಟದಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಸ್ಪರ್ಧೆಗಳನ್ನು ನಡೆಸಲಾಗುತ್ತಿದೆ. ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಮಾತ್ರ ಸುಮಾರು 500 ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಪಾಲ್ಗೊಂಡಿರುವುದು ಜಿಲ್ಲಾ ಸಮಿತಿಯ ಕಾರ್ಯಚಟುವಟಿಕೆಗೆ ಸಾಕ್ಷಿಯಾಗಿದೆ ಎಂದರು. ಕಾರ್ಯಕ್ರಮದಲ್ಲಿ ಡಯಟ್ ಪ್ರಾಂಶುಪಾಲ ವೆಂಕಟೇಶ್, ಕೆಜೆವಿಎಸ್ ಜಿಲ್ಲಾಧ್ಯಕ್ಷ ಕೆ.ಎಂ.ರೆಡ್ಡಪ್ಪ,ತಾಲೂಕು ಕಸಾಪ ಅಧ್ಯಕ್ಷ ಯಲುವಹಳ್ಳಿ ಸೊಣ್ಣೇಗೌಡ,ಅಣ್ಣೆಮ್ಮ,ಹೊಟೇಲ್ ರಾಮಣ್ಣ,ಆನಂದ್,ಸುಶೀಲಮ್ಮ,ಕಾವ್ಯ,ಚಿಕ್ಕರೆಡ್ಡಪ್ಪ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಚಿಕ್ಕಬಳ್ಳಾಪುರ | ಓದಿನ ಜತೆಗೆ ಪಠ್ಯೇತರ ಚಟುವಟಿಕೆಗಳಲ್ಲೂ ವಿದ್ಯಾರ್ಥಿಗಳು ಪಾಲ್ಗೊಳ್ಳಲಿ: ಪಿಎಸ್‌ಐ ವಿದ್ಯಾ
- Advertisement -
ಪೋಸ್ಟ್ ಹಂಚಿಕೊಳ್ಳಿ:





