ಸಹಕಾರ ಕ್ಷೇತ್ರದ ಬಲವರ್ಧನೆಗೆ ಸಂಘಗಳ ಸಕ್ರಿಯ ಪಾಲ್ಗೊಳ್ಳುವಿಕೆ ಅಗತ್ಯವಾಗಿದೆ ಎಂದು ಜಿಲ್ಲಾ ಸಹಕಾರ ಒಕ್ಕೂಟದ ಜಿಲ್ಲಾಧ್ಯಕ್ಷ ಹಾಗೂ ಸಹಕಾರ ರತ್ನ ಪುರಸ್ಕೃತ ಹೆಚ್.ವಿ.ನಾಗರಾಜ್ ಹೇಳಿದರು.
ನಗರ ಹೊರವಲಯದಲ್ಲಿರುವ ಶಿರಡಿ ಸಾಯಿಬಾಬಾ ದೇವಸ್ಥಾನದ ಆವರಣದಲ್ಲಿ ಶುಕ್ರವಾರ ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರ ಒಕ್ಕೂಟದ ವತಿಯಿಂದ 73ನೇ ಅಖಿಲ ಭಾರತ ಸಹಕಾರ ಸಪ್ತಾಹದ ಸಮಾರೋಪ ಸಮಾರಂಭವನ್ನು ಆಯೋಜಿಸಲಾಗಿತ್ತು. ಸಹಕಾರ ಸಂಸ್ಥೆಗಳ ಬೆಳವಣಿಗೆಯಲ್ಲಿ ಉತ್ತಮ ಪರಿಸರ, ತಂತ್ರಜ್ಞಾನ, ಕೌಶಲ್ಯಾಧಾರಿತ ವೃತ್ತಿಪರ ಸೇವೆ, ಪರಿಸರ ಸಂರಕ್ಷಣೆ, ಲಿಂಗ ಸಮಾನತೆ ಮತ್ತು ವಿಶ್ವಶಾಂತಿಗಾಗಿ ಸಹಕಾರ ಸಂಸ್ಥೆಗಳು ಎಂಬ ಧ್ಯೇಯವಾಕ್ಯದಡಿ ನಡೆದ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ನವೆಂಬರ್ 14 ರಿಂದ 20ರ ವರೆಗೆ ಸಹಕಾರ ಸಪ್ತಾಹ ಆಚರಿಸುವ ಮೂಲಕ ಪಂಡಿತ್ ಜವಾಹರಲಾಲ್ ನೆಹರು ಅವರ ಸಹಕಾರ ಚಳವಳಿಯ ಆಶಯಗಳನ್ನು ಸ್ಮರಿಸಲಾಗುತ್ತದೆ.ಹಾಲು ಉತ್ಪಾದಕರ ಸಹಕಾರ ಸಂಘಗಳ ಬಲವರ್ಧನೆಗೆ ಎಂ.ವಿ.ಕೃಷ್ಣಪ್ಪ ಅವರ ಕೊಡುಗೆ ಮಹತ್ವದ್ದಾಗಿದೆ ಎಂದರು.
ರಾಜ್ಯ ಸರ್ಕಾರ ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್ಗೆ 8 ರೂ. ಹೆಚ್ಚಿಸಿರುವುದು ಐತಿಹಾಸಿಕ ನಿರ್ಧಾರವಾಗಿದೆ. ರೈತರಿಗೆ ಅನುಕೂಲವಾಗುವ ಈ ನಿರ್ಧಾರವನ್ನು ಪ್ರಶ್ನಿಸುವವರು ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯಾದಾಗ ಏಕೆ ಮೌನವಾಗಿರುತ್ತಾರೆ ಎಂದು ಪ್ರಶ್ನಿಸಿದ ಅವರು, ಹಾಲಿನ ಖರೀದಿ ದರ ಹೆಚ್ಚಿಸಿರುವ ರಾಜ್ಯ ಸರ್ಕಾರಕ್ಕೆ ಧನ್ಯವಾದ ಸಲ್ಲಿಸಿದರು.
ಜಿಲ್ಲೆಯ ರೈತರಿಗೆ ಸಾಲ ಸೌಲಭ್ಯ ಒದಗಿಸುವ ಡಿಸಿಸಿ ಬ್ಯಾಂಕ್ ಸದೃಢವಾಗಿರಬೇಕು. ರೇಷ್ಮೆ ಉದ್ಯಮ ಪ್ರಸ್ತುತ ನಷ್ಟದ ಹಾದಿಯಲ್ಲಿದ್ದು, ಹಾಲು ಉತ್ಪಾದನಾ ಕ್ಷೇತ್ರವೂ ನಷ್ಟಕ್ಕೆ ಸಿಲುಕದಂತೆ ಎಚ್ಚರಿಕೆ ವಹಿಸಬೇಕು. ಸಹಕಾರ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುವವರು ರೈತರಿಗೆ ಯಾವುದೇ ರೀತಿಯ ಅನ್ಯಾಯ ಮಾಡಬಾರದು. ಸಹಕಾರ ಕ್ಷೇತ್ರದ ಬಗ್ಗೆ ಜನರಲ್ಲಿ ಒಲವಿದ್ದರೂ ನಂಬಿಕೆ ಕಡಿಮೆಯಾಗುತ್ತಿದೆ. ಆ ನಂಬಿಕೆಯನ್ನು ಮರುಸ್ಥಾಪಿಸುವ ಕೆಲಸವಾಗಬೇಕು ಎಂದು ಹೇಳಿದರು.
ಸಹಕಾರ ಒಕ್ಕೂಟದ ನಿರ್ದೇಶಕ ಕೆ.ಪಿ.ಚನ್ನಬೈರೇಗೌಡ ಮಾತನಾಡಿ, ಸಹಕಾರ ಕ್ಷೇತ್ರವು ಲಕ್ಷಾಂತರ ಕುಟುಂಬಗಳ ಬದುಕಿಗೆ ಆಸರೆಯಾಗಿದೆ. ಸಹಕಾರ ಸಂಘಗಳು ಉತ್ತಮ ರೀತಿಯಲ್ಲಿ ಕಾರ್ಯನಿರ್ವಹಿಸಿದರೆ ರೈತರು ಮತ್ತು ಹಾಲು ಉತ್ಪಾದಕರಿಗೆ ಹೆಚ್ಚಿನ ಅನುಕೂಲವಾಗಲಿದೆ. ಸಹಕಾರ ಸಂಘಗಳು ಸ್ಥಾಪನೆಯಾದ ದಿನದಿಂದ ಇಂದಿನವರೆಗೆ ಈ ಕ್ಷೇತ್ರವು ವ್ಯಾಪಕವಾಗಿ ವಿಸ್ತಾರಗೊಂಡು ಲಕ್ಷಾಂತರ ಕುಟುಂಬಗಳಿಗೆ ಆರ್ಥಿಕ ಭದ್ರತೆ ಒದಗಿಸಿದೆ ಎಂದರು.
ಸಹಕಾರ ಮಹಾಮಂಡಳದ ಪ್ರಮುಖ ಉದ್ದೇಶ ಶಿಕ್ಷಣ, ತರಬೇತಿ ಮತ್ತು ಸಹಕಾರ ಚಳವಳಿಯ ಪ್ರಚಾರವಾಗಿದೆ. ಈ ನಿಟ್ಟಿನಲ್ಲಿ ಆಯೋಜಿಸುವ ತರಬೇತಿ ಕಾರ್ಯಕ್ರಮಗಳಲ್ಲಿ ಸಹಕಾರ ಸಂಘಗಳ ಪ್ರತಿನಿಧಿಗಳು ಸಕ್ರಿಯವಾಗಿ ಪಾಲ್ಗೊಂಡು ತಮ್ಮ ಜ್ಞಾನ ಮತ್ತು ಕೌಶಲ್ಯವನ್ನು ಹೆಚ್ಚಿಸಿಕೊಳ್ಳಬೇಕು ಎಂದು ಕರೆ ನೀಡಿದರು.
ಚಿಮುಲ್ ನಿರ್ದೇಶಕ ಭರಣಿ ವೆಂಕಟೇಶ್ ಮಾತನಾಡಿ, ಪ್ರತಿವರ್ಷ ನವೆಂಬರ್ 14 ರಿಂದ 20ರವರೆಗೆ ಸಹಕಾರ ಸಪ್ತಾಹ ಆಚರಿಸಲಾಗುತ್ತದೆ. ನಮ್ಮ ತಾಲೂಕಿನಲ್ಲಿ ಯಾವುದೇ ಸಹಕಾರ ಸಂಘ ನಷ್ಟದಲ್ಲಿ ಕಾರ್ಯನಿರ್ವಹಿಸುತ್ತಿಲ್ಲ ಎಂಬುದು ಹೆಮ್ಮೆಯ ಸಂಗತಿ. ಸಂಘಗಳ ಆಡಳಿತದಲ್ಲಿ ಸದಸ್ಯರ ಪಾಲ್ಗೊಳ್ಳುವಿಕೆಗೆ ಹೆಚ್ಚಿನ ಅವಕಾಶ ನೀಡಬೇಕು. ಹಾಲು ಸರಬರಾಜು ಮಾಡುವ ಸದಸ್ಯರಿಗೆ ನಿರ್ದೇಶಕರಾಗುವ ಅವಕಾಶ ಸೇರಿದಂತೆ ನಿಯಮಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು. ಬಡವರಿಗೂ ಸಹಕಾರ ಕ್ಷೇತ್ರದಲ್ಲಿ ಅವಕಾಶ ಕಲ್ಪಿಸಬೇಕು ಎಂದರು.
ಡಿಸಿಸಿ ಬ್ಯಾಂಕ್ ನಿರ್ದೇಶಕ ಮೋಹನ್ ರೆಡ್ಡಿ ಮಾತನಾಡಿ, ಸಹಕಾರಿ ತತ್ವಗಳ ಉದ್ದೇಶವನ್ನು ಅರಿತು ಎಲ್ಲರೂ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಬೇಕು. ಸಹಕಾರ ಕ್ಷೇತ್ರದ ಬೆಳವಣಿಗೆಯಲ್ಲಿ ಡಿಸಿಸಿ ಬ್ಯಾಂಕ್ ನೀಡುತ್ತಿರುವ ನೆರವು ಮಹತ್ವದ್ದಾಗಿದೆ ಬ್ಯಾಂಕಿನಲ್ಲಿ ಖಾತೆ ತೆರೆದು ಠೇವಣಿ ಇರಿಸುವುದರ ಜತೆಗೆ ಹೆಚ್ಚಿನ ಆರ್ಥಿಕ ವ್ಯವಹಾರ ನಡೆಸುವ ಮೂಲಕ ಬ್ಯಾಂಕಿನ ಬಲವರ್ಧನೆಗೆ ಸಹಕರಿಸಬೇಕು ಎಂದು ಮನವಿ ಮಾಡಿದರು.
ಜಿಲ್ಲಾ ಸೌಹಾರ್ದ ಸಹಕಾರಿ ಸಂಘಗಳ ಒಕ್ಕೂಟದ ಅಧ್ಯಕ್ಷ ಆರ್.ಅಮರ್ ಮಾತನಾಡಿ, ಸಹಕಾರ ಕ್ಷೇತ್ರಕ್ಕೆ ನೂರಕ್ಕೂ ಹೆಚ್ಚು ವರ್ಷಗಳ ಇತಿಹಾಸವಿದೆ. ಪ್ರತ್ಯೇಕ ಸಹಕಾರ ಸಚಿವಾಲಯ ಸ್ಥಾಪನೆಯಾಗಿರುವುದು ಮಹತ್ವದ ಬೆಳವಣಿಗೆಯಾಗಿದೆ. ಯುವಕ-ಯುವತಿಯರಿಗೆ ಸಹಕಾರ ಕ್ಷೇತ್ರದಲ್ಲಿ ಹೆಚ್ಚಿನ ಅವಕಾಶಗಳಿದ್ದು, ಅವುಗಳನ್ನು ಬಳಸಿಕೊಳ್ಳಬೇಕು ಎಂದರು.
ಎಪಿಎಂಸಿ ಮಾಜಿ ಅಧ್ಯಕ್ಷ ಮರಳುಕುಂಟೆ ಕೃಷ್ಣಮೂರ್ತಿ ಮಾತನಾಡಿ, ಉತ್ತರ ಕರ್ನಾಟಕ ಸೇರಿದಂತೆ ರಾಜ್ಯದ ವಿವಿಧ ಭಾಗಗಳಲ್ಲಿ ಸಹಕಾರ ಕ್ಷೇತ್ರದ ಅಭಿವೃದ್ಧಿಗೆ ಇನ್ನಷ್ಟು ಅವಕಾಶಗಳಿವೆ. ಪರಿಸರ ಸಂರಕ್ಷಣೆಗೆ ಆದ್ಯತೆ ನೀಡುವುದರಿಂದ ಹೈನುಗಾರಿಕೆಗೂ ಅನುಕೂಲವಾಗಲಿದೆ. 2009ರಲ್ಲಿ ಎಪಿಎಂಸಿ ಆವರಣದಲ್ಲಿ ನೆಟ್ಟ ಸಸಿಗಳು ಇಂದು ಹೊಂಗೆ ವನವಾಗಿ ಬೆಳೆದಿವೆ. ಪ್ರತಿಯೊಬ್ಬರೂ ವರ್ಷಕ್ಕೆ ಕನಿಷ್ಠ 50 ಸಸಿಗಳನ್ನು ನೆಟ್ಟು ಪೋಷಿಸಬೇಕು ಎಂದು ಕರೆ ನೀಡಿದರು.
ಸಹಕಾರ ರತ್ನ ಪುರಸ್ಕೃತ ಹಾಗೂ ಜಿಲ್ಲಾ ಸಹಕಾರ ಒಕ್ಕೂಟದ ಮಾಜಿ ನಿರ್ದೇಶಕಿ ಪ್ರೇಮಕುಮಾರಿ ಮಾತನಾಡಿ, ಸಹಕಾರ ಕ್ಷೇತ್ರದಲ್ಲಿ ಮಹಿಳೆಯರ ಪಾಲುದಾರಿಕೆ ಹೆಚ್ಚಾಗಬೇಕು.ಸ್ವಸಹಾಯ ಸಂಘಗಳಿಗೆ ಡಿಸಿಸಿ ಬ್ಯಾಂಕ್ ಸಾಲ ನೀಡಲು ಮುಂದಾಗಿರುವುದು ಸ್ವಾಗತಾರ್ಹ. ಆದರೆ, ದಿಬ್ಬೂರು ಮಹಿಳಾ ಸಂಘಗಳ ಹಣ ದುರುಪಯೋಗದ ಆರೋಪದ ಬಗ್ಗೆಯೂ ಸೂಕ್ತ ಗಮನಹರಿಸಬೇಕು ಎಂದು ಮನವಿ ಮಾಡಿದರು.
ಇದನ್ನು ಓದಿದ್ದೀರಾ..?ಕೋಲಾರ | ಅಂಬೇಡ್ಕರ್ ಪುತ್ಥಳಿ ನಿರ್ಮಾಣದಲ್ಲಿ ಪ್ರತಿಷ್ಠೆಗಿಂತ ಗೌರವ, ರಕ್ಷಣೆಗೆ ಆದ್ಯತೆ: ಕೊತ್ತೂರು ಮಂಜುನಾಥ್
ಈ ಸಂದರ್ಭದಲ್ಲಿ ಒಕ್ಕೂಟದ ಉಪಾಧ್ಯಕ್ಷ ಮುರಳಿ, ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ಗಂಗರೇ ಕಾಲವೇ ಪ್ರಸಾದ್, ಎಂ.ಮುರಳಿ, ಕೆಂಪಣ್ಣ, ಲಕ್ಷ್ಮೀಪತಿ, ಶಿವಪ್ಪ, ಶಿವಕುಮಾರ್, ವೆಂಕಟರೋಣಪ್ಪ, ಬಿ.ವಿ.ಪ್ರದೀಪ್, ಎಂ.ಎನ್.ನಾಗೇಶ್, ವೇಣು ಸೇರಿದಂತೆ ಸಹಕಾರ ಕ್ಷೇತ್ರದ ಮುಖಂಡರು ಹಾಗೂ ವಿವಿಧ ಸಹಕಾರ ಸಂಘಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.
ಚಿಕ್ಕಬಳ್ಳಾಪುರ| 73ನೇ ಅಖಿಲ ಭಾರತ ಸಹಕಾರ ಸಪ್ತಾಹ ಸಮಾರೋಪ: ರೈತರು, ಮಹಿಳೆಯರು ಮತ್ತು ಯುವಕರಿಗೆ ಸಹಕಾರ ಕ್ಷೇತ್ರದಲ್ಲಿ ಹೆಚ್ಚಿನ ಅವಕಾಶ ಕಲ್ಪಿಸಲು ಕರೆ
<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>
ಪೋಸ್ಟ್ ಹಂಚಿಕೊಳ್ಳಿ:



