ತಾಲೂಕಿನ ಬಟ್ಲಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚೆನ್ನರಾಯನಹಳ್ಳಿ ಗ್ರಾಮದಲ್ಲಿ ಇತ್ತೀಚೆಗಷ್ಟೇ ಉದ್ಘಾಟನೆಗೊಂಡಿದ್ದ ನೂತನ ಶುದ್ಧ ಕುಡಿಯುವ ನೀರಿನ ಘಟಕವನ್ನು ಕಿಡಿಗೇಡಿಗಳು ಧ್ವಂಸಗೊಳಿಸಿರುವ ಘಟನೆ ಬೆಳಕಿಗೆ ಬಂದಿದೆ.ಈ ಸಂಬಂಧ ಬಟ್ಲಹಳ್ಳಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಮಹೇಂದ್ರ ಯಾದವ್ ಅವರು ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣೆಗೆ ಅಧಿಕೃತ ದೂರು ನೀಡಿದ್ದಾರೆ.
ಚಿಂತಾಮಣಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ. ಸುಧಾಕರ್ ಅವರು ಕಳೆದ ನವೆಂಬರ್ 13, 2026 ರಂದು ಶುದ್ಧ ಕುಡಿಯುವ ನೀರಿನ ಘಟಕವನ್ನು ಸಾರ್ವಜನಿಕರ ಬಳಕೆಗೆ ಉದ್ಘಾಟಿಸಿದ್ದರು.ಆದರೆ,ನವೆಂಬರ್ 20, 2026 ರ ರಾತ್ರಿ ವೇಳೆ ಅಪರಿಚಿತ ಕಿಡಿಗೇಡಿಗಳು ಈ ಘಟಕದ ಮೇಲೆ ದಾಳಿ ನಡೆಸಿದ್ದಾರೆ.ನೀರಿನ ಘಟಕದ ಕಾಯಿನ್ ಬಾಕ್ಸ್, ನಾಮಫಲಕ ಹಾಗೂ ನೀರಿನ ಪೈಪ್‌ಗಳನ್ನು ಸಂಪೂರ್ಣವಾಗಿ ಜಖಂಗೊಳಿಸಿ, ಸಾರ್ವಜನಿಕ ಆಸ್ತಿಗೆ ನಷ್ಟ ಉಂಟುಮಾಡಿದ್ದಾರೆ.
ಮರುದಿನ ವಿಷಯ ತಿಳಿದ ಗ್ರಾಮಸ್ಥರು ಮತ್ತು ಜಲಗಾರ ಗಂಗುಲಪ್ಪ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದಾಗ ಧ್ವಂಸ ಪ್ರಕರಣ ಬೆಳಕಿಗೆ ಬಂದಿದೆ.ತಕ್ಷಣವೇ ಈ ಬಗ್ಗೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.
ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ಪಿಡಿಒ ಮಹೇಂದ್ರ ಯಾದವ್ ಅವರು,ಘಟನೆ ಸತ್ಯ ಎಂದು ದೃಢಪಟ್ಟ ನಂತರ ನವೆಂಬರ್ 21ರಂದು ಸಂಜೆ ಪೊಲೀಸರಿಗೆ ದೂರು ಸಲ್ಲಿಸಿದ್ದಾರೆ.
ಇದನ್ನು ಓದಿದ್ದೀರಾ..?ಕೋಲಾರ | ಅಂಬೇಡ್ಕರ್ ಪುತ್ಥಳಿ ನಿರ್ಮಾಣದಲ್ಲಿ ಪ್ರತಿಷ್ಠೆಗಿಂತ ಗೌರವ, ರಕ್ಷಣೆಗೆ ಆದ್ಯತೆ: ಕೊತ್ತೂರು ಮಂಜುನಾಥ್
ಗ್ರಾಮಸ್ಥರಿಗೆ ಕುಡಿಯುವ ನೀರಿನ ಸೌಲಭ್ಯ ಕಲ್ಪಿಸಿದ್ದ ಘಟಕವನ್ನು ಹಾಳುಗೆಡವಿರುವ ಕಿಡಿಗೇಡಿಗಳನ್ನು ತಕ್ಷಣವೇ ಪತ್ತೆ ಹಚ್ಚಿ,ಅವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಮತ್ತು ಎಫ್‌ಐಆರ್ ದಾಖಲಿಸಬೇಕು ಎಂದು ದೂರಿನಲ್ಲಿ ಒತ್ತಾಯಿಸಲಾಗಿದೆ.ಸಾರ್ವಜನಿಕ ಆಸ್ತಿ ನಾಶಪಡಿಸಿರುವ ಈ ಕೃತ್ಯಕ್ಕೆ ಸ್ಥಳೀಯ ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು,ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಆಗ್ರಹಿಸಿದ್ದಾರೆ.ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.



