ಬೆಳೆ ನಷ್ಟ ಪರಿಹಾರ ವಿತರಣೆ ಹಾಗೂ ಸರ್ಕಾರದ ವಿವಿಧ ಯೋಜನೆಗಳ ಸೌಲಭ್ಯಗಳನ್ನು ಅರ್ಹರಿಗೆ ತಲುಪಿಸುವಲ್ಲಿ ಅಧಿಕಾರಿಗಳು ಸಂಪೂರ್ಣ ವಿಫಲರಾಗಿದ್ದಾರೆ ಎಂದು ಆರೋಪಿಸಿ,ಕರ್ನಾಟಕ ರಾಜ್ಯ ರೈತ ಸಂಘದ ಪದಾಧಿಕಾರಿಗಳು ಮತ್ತು ತಾಲೂಕಿನ ನೂರಾರು ರೈತರು ನಗರದ ಕೃಷಿ ಇಲಾಖೆ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.
ತಾಲೂಕಿನಲ್ಲಿ ಮಳೆ ಕೈಕೊಟ್ಟ ಪರಿಣಾಮ ಬೆಳೆಗಳು ಶೇ. 100ರಷ್ಟು ಒಣಗಿ ಹೋಗಿದ್ದು,ರೈತರು ಜೀವನ ನಡೆಸುವುದೇ ದುಸ್ತರವಾಗಿದೆ.ಇಂತಹ ಗಂಭೀರ ಪರಿಸ್ಥಿತಿಯಲ್ಲೂ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ.ರಾಜ್ಯ ಸರ್ಕಾರ ಘೋಷಿಸಿರುವ ಬರ ಪರಿಹಾರದ ಹಣ ಹಾಗೂ ₹2,000 ಸಹಾಯಧನವನ್ನು ಪ್ರತಿಯೊಬ್ಬ ಅರ್ಹ ರೈತರಿಗೂ ತಲುಪಿಸುವಲ್ಲಿ ತಹಶೀಲ್ದಾರ್,ಕೃಷಿ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ವಿಫಲರಾಗಿದ್ದಾರೆ ಎಂದು ಪ್ರತಿಭಟನಾಕಾರರು ದೂರಿದರು.
ಅಲ್ಲದೆ,ಕಚೇರಿಗೆ ಬರುವ ರೈತರೊಂದಿಗೆ ಅಧಿಕಾರಿಗಳು ಸೌಜನ್ಯದಿಂದ ವರ್ತಿಸದೆ,ದಾಖಲೆಗಳ ಪರಿಶೀಲನೆಯಲ್ಲಿ ಅನಗತ್ಯ ವಿಳಂಬ ಮಾಡುತ್ತಿದ್ದಾರೆ.ಹಿಂದಿನಂತೆ ರೈತರಿಗೆ ಸಿಗಬೇಕಾದ ‘ಕೃಷಿ ಭಾಗ್ಯ’ ಸೇರಿದಂತೆ ಇಲಾಖೆಯ ಇತರ ಸೌಲಭ್ಯಗಳು ಸರಿಯಾಗಿ ತಲುಪುತ್ತಿಲ್ಲ ಎಂದು ರೈತ ಸಂಘದ ರಾಜ್ಯಾಧ್ಯಕ್ಷ ಜೆ ವಿ ರಘುನಾಥ್ ರೆಡ್ಡಿ ಕಿಡಿಕಾರಿದರು.
ಬರಗಾಲದ ಹಿನ್ನೆಲೆಯಲ್ಲಿ ಅಧಿಕಾರಿಗಳು ಹಾಗೂ ಕೃಷಿ ವಿಜ್ಞಾನಿಗಳು ತಕ್ಷಣವೇ ಜಮೀನುಗಳಿಗೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಬೇಕು.ನೈಜ ರೈತರಿಗೆ ಸಿಗಬೇಕಾದ ಬರ ಪರಿಹಾರ ಹಾಗೂ ಬೆಳೆ ವಿಮೆ ಹಣವನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿ ಕೃಷಿ ಇಲಾಖೆಯ ಸಹಾಯಕ ನಿರ್ದೇಶಕರಾದ ಅಮರನಾರಾಯಣ ರೆಡ್ಡಿ ರವರಿಗೆ ಮನವಿ ಪತ್ರ ಸಲ್ಲಿಸಲಾಯಿತು.ಒಂದು ವೇಳೆ ಸಮಸ್ಯೆಗಳನ್ನು ಶೀಘ್ರವಾಗಿ ಬಗೆಹರಿಸದಿದ್ದರೆ,ಮುಂದಿನ ದಿನಗಳಲ್ಲಿ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲಾಗುವುದು ಎಂದು ರೈತರು ಎಚ್ಚರಿಕೆ ನೀಡಿದರು.
ರೈತರು ಸಲ್ಲಿಸಿದ ಮನವಿಯನ್ನು ಸ್ವೀಕರಿಸಿದ ನಂತರ ಕೃಷಿ ಇಲಾಖೆಯ ಸಹಾಯಕ ನಿರ್ದೇಶಕರಾದ ಅಮರನಾರಾಯಣ ರೆಡ್ಡಿ ಅವರು ಮಾತನಾಡಿದರು.ಈ ಸಂದರ್ಭದಲ್ಲಿ ಅವರು ರೈತರ ಬೇಡಿಕೆಗಳು ಮತ್ತು ಸಮಸ್ಯೆಗಳ ಕುರಿತು ಸಕಾರಾತ್ಮಕವಾಗಿ ಸ್ಪಂದಿಸಿದರು.
ಮನವಿಯಲ್ಲಿ ಉಲ್ಲೇಖಿಸಲಾದ ಪ್ರಮುಖ ಅಂಶಗಳನ್ನು ಪರಿಶೀಲಿಸಿ,ಮೇಲಧಿಕಾರಿಗಳ ಗಮನಕ್ಕೆ ತಂದು ಶೀಘ್ರದಲ್ಲೇ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಭರವಸೆ ನೀಡಿದರು.ಇಲಾಖೆಯಿಂದ ರೈತರಿಗೆ ಸಿಗಬೇಕಾದ ಸೌಲಭ್ಯಗಳನ್ನು ತಲುಪಿಸಲು ಬದ್ಧರಾಗಿರುವುದಾಗಿ ಅವರು ತಿಳಿಸಿದರು.
ಇದನ್ನು ಓದಿದ್ದೀರಾ..?ಕೋಲಾರ | ಕಾಂಗ್ರೆಸ್ಸಿಗರನ್ನು ತುಂಡು ಮಾಡಿ ಅರಬ್ಬಿ ಸಮುದ್ರಕ್ಕೆ ಎಸೆಯುವ ಹೇಳಿಕೆ: ನಗರ ಪೊಲೀಸ್ ಠಾಣೆಯಲ್ಲಿ 3 ದೂರು ಸಲ್ಲಿಕೆ
ಪ್ರತಿಭಟನೆಯಲ್ಲಿ ಎಂ ಎಲ್ಲಪ್ಪ,ವೆಂಕಟಸುಬ್ಬರೆಡ್ಡಿ,ಜೆ ವಿ ವೆಂಕಟರಮಣಪ್ಪ,ಆರ್ ರಾಮಚಂದ್ರಪ್ಪ,ಕೊನಪ್ಪ, ಮುನಿಯಪ್ಪ,ಬಾನು, ಶಾಲಿನಿ,ಶಿವಾರೆಡ್ಡಿ,ಶ್ರೀರಾಮರೆಡ್ಡಿ,ಶಿವಣ್ಣ,ಆನಂದ್,ಗಂಗಾಧರ,ಕೃಷ್ಣಪ್ಪ,ಪಾರ್ವತಮ್ಮ,ಲಕ್ಷ್ಮಿ,ನಾರಾಯಣಮ್ಮ,ನೇತ್ರ,ಮುನಿ ವೆಂಕಟಮ್ಮ,ಸೇರಿದಂತೆ ಮತ್ತಿತರರು ಇದ್ದರು
ಚಿಂತಾಮಣಿ |ರೈತರಿಗೆ ಸಿಗಬೇಕಾದ ಬರ ಪರಿಹಾರ ಹಾಗೂ ಬೆಳೆ ವಿಮೆ ಹಣವನ್ನು ಕೂಡಲೇ ಬಿಡುಗಡೆ ಮಾಡಬೇಕು : ಜೆ ವಿ ರಘುನಾಥ್ ರೆಡ್ಡಿ
- Advertisement -
<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>
ಪೋಸ್ಟ್ ಹಂಚಿಕೊಳ್ಳಿ:




