ನನ್ನ ಮೇಲೆ ಮಾಡಲಾಗಿರುವ ಆರೋಪಗಳಲ್ಲಿ ಒಂದೇವೊಂದು ಆರೋಪವನ್ನು ಸಾಬೀತು ಮಾಡಿದರೆ, ನಾನು ಸರ್ಕಾರಿ ಸೇವೆಗೆ ರಾಜೀನಾಮೆ ಕೊಡುತ್ತೇನೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯ ಅಧ್ಯಕ್ಷ ಷಡಕ್ಷರಿ ತಿಳಿಸಿದ್ದಾರೆ.
ಚಿಕ್ಕಬಳ್ಳಾಪುರದಲ್ಲಿ ಶುಕ್ರವಾರ ಸರ್ಕಾರಿ ನೌಕರ ಸಂಘ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. “ನಾನು ಯಾವ ತಪ್ಪನ್ನೂ ಮಾಡಿಲ್ಲ. ನನ್ನ ಮೇಲಿನ ಆರೋಪಗಳ ವಿರುದ್ಧ ಸರ್ಕಾರ ತನಿಖೆ ನಡೆಸಲಿ. ನಾನು ತಪ್ಪು ಮಾಡಿದ್ದರೆ ಜೈಲಿಗೆ ಹಾಕಲಿ. ನಾನು ಯಾವುದಕ್ಕೂ ಹೆದರುವುದಿಲ್ಲ” ಎಂದು ಹೇಳಿದ್ದಾರೆ.
“ಸರ್ಕಾರ ಕೂಡಲೇ 7ನೇ ವೇತನ ಆಯೋಗದ ವರದಿಯನ್ನು ಸ್ವೀಕರಿಸಿ, ಅನುಷ್ಟಾನಕ್ಕೆ ತರಬೇಕು. ಹೊಸ ಪಿಂಚಣಿ ಯೋಜನೆಯನ್ನು ರದ್ದುಗೊಳಿಸಿ ಹಳೆ ಪಿಂಚಣಿ ಯೋಜನೆಯನ್ನೇ ಮುಂದುವರೆಸಬೇಕು” ಎಂದು ಒತ್ತಾಯಿಸಿದ್ದಾರೆ.
ಕಾರ್ಯಕ್ರಮದಲ್ಲಿ ಜಿಲ್ಲಾ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಜಿ.ಹರೀಶ್, ರಾಜ್ಯ ಪದಾಧಿಕಾರಿಗಳು ಇದ್ದರು.