ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳನ್ನು ಮಾದರಿಯಾಗಿ ಪರಿಗಣಿಸಿ ಇತರ ರಾಜ್ಯಗಳಲ್ಲಿಯೂ ಜಾರಿ ಮಾಡಿವೆ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ಸೂರಜ್ ಎಂ ಎನ್ ಹೆಗಡೆ ಅವರು ತಿಳಿಸಿದರು.
ಚಿಕ್ಕಬಳ್ಳಾಪುರ ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಕುರಿತು ಪ್ರಗತಿ ಪರಿಶೀಲನೆ ನಡೆಸಿ ಸುದ್ದಿಗಾರರೊಂದಿಗೆ ಮಾತನಾಡಿದರು.
“ಗ್ಯಾರಂಟಿ ಯೋಜನೆಗಳಿಂದ ಬಡವರು, ಮಧ್ಯಮ ವರ್ಗದ ಜನರಿಗೆ ಅನುಕೂಲವಾಗಿದೆ. ಯಾವುದೇ ಮಧ್ಯವರ್ತಿಗಳ ಹಾವಳಿ ಇಲ್ಲದೆ ನೇರವಾಗಿ ಗ್ಯಾರಂಟಿ ಯೋಜನೆಗಳು ತಲುಪುತ್ತಿವೆ. ಗ್ಯಾರಂಟಿ ಯೋಜನೆಗಳಿಗೆ ₹52 ಸಾವಿರ ಕೋಟಿ ಮೀಸಲಿಟ್ಟಿದ್ದು, ಈವರೆಗೆ ₹36 ಸಾವಿರ ಕೋಟಿ ವೆಚ್ಚ ಮಾಡಲಾಗಿದೆ” ಎಂದರು.
“ಜನರಿಗೆ ನೇರವಾಗಿ ತಲುಪುವ ಗ್ಯಾರಂಟಿ ಯೋಜನೆಗಳನ್ನು ಈಗ ಮಧ್ಯಪ್ರದೇಶ, ಜಾರ್ಖಂಡ್, ಮಹಾರಾಷ್ಟ್ರ, ರಾಜಸ್ಥಾನ, ದೆಹಲಿ, ಒಡಿಶಾ ಸೇರಿದಂತೆ ಹಲವು ರಾಜ್ಯಗಳಲ್ಲಿ ಜಾರಿ ಮಾಡಿವೆ. ನಿರೀಕ್ಷೆಗೂ ಮೀರಿ ಗ್ಯಾರಂಟಿ ಯೋಜನೆಗಳು ಕರ್ನಾಟಕದಲ್ಲಿ ಬೆಳೆದು ಹೊರಗೂ ವಿಸ್ತರಿಸಿವೆ. ಇದು ಗ್ಯಾರಂಟಿ ಯೋಜನೆಗಳಿಗಿರುವ ಶಕ್ತಿ” ಎಂದು ಹೇಳಿದರು.
“ಯೋಜನೆಗಳ ಅನುಷ್ಠಾನದಲ್ಲಿ ಏನಾದರೂ ಸಣ್ಣಪುಟ್ಟ ತೊಂದರೆಗಳು, ತಾಂತ್ರಿಕ ಸಮಸ್ಯೆಗಳಿದ್ದಲ್ಲಿ ಸರ್ಕಾರದ ಗಮನಕ್ಕೆ ತಂದಲ್ಲಿ ಪರಿಶೀಲಿಸಿ ಸರಿಪಡಿಸಲು ಕ್ರಮಕೈಗೊಳ್ಳಲಾಗುವುದು. ಒಟ್ಟಾರೆ ಗ್ಯಾರಂಟಿ ಯೋಜನೆಗಳು ಯಶಸ್ವಿಯಾಗಿವೆ. ಗೃಹಲಕ್ಷ್ಮಿ ಹಣ ನವೆಂಬರ್ ತಿಂಗಳವರೆಗೆ ಬಿಡುಗಡೆಯಾಗಿದೆ. ಎಲ್ಲ ಗ್ಯಾರಂಟಿ ಯೋಜನೆಗಳ ಬಾಕಿ ಹಣ ಶೀಘ್ರದಲ್ಲೇ ಬಿಡುಗಡೆಯಾಗಿ ಫಲಾನುಭವಿಗಳಿಗೆ ತಲುಪಲಿದೆ. ಇದರಲ್ಲಿ ಯಾವುದೇ ಅನುಮಾನ ಬೇಡ” ಎಂದು ಹೇಳಿದರು.
ಈ ಸುದ್ದಿ ಓದಿದ್ದೀರಾ? ಮಧುಗಿರಿ | ಜೀತ ವಿಮುಕ್ತರ ಪುನರ್ವಸತಿಗೆ ₹500 ಕೋಟಿ ಮೀಸಲಿಡಲು ಆಗ್ರಹ
“ಗ್ಯಾರಂಟಿ ಯೋಜನೆಗಳ ಕುರಿತು ಅಪಪ್ರಚಾರ, ಗೊಂದಲಗಳಿಗೆ ಯಾರೊಬ್ಬರೂ ಕಿವಿಗೊಡಬಾರದು. ಜನರಿಗೆ ನೀಡಿದ ಭರವಸೆಯಂತೆ ರಾಜ್ಯ ಸರ್ಕಾರ ನುಡಿದಂತೆ ನಡೆಯುತ್ತಿದೆ. ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನಕ್ಕೆ ಸರ್ಕಾರ ಸಮರ್ಥವಾಗಿದೆ ಹಾಗೂ ಬದ್ಧವಾಗಿದೆ” ಎಂದು ತಿಳಿಸಿದರು.
ಜಿಲ್ಲಾ ಗ್ಯಾರಂಟಿ ಯೋಜನಾ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಯಲುವಳ್ಳಿ ರಮೇಶ್, ಉಪಾಧ್ಯಕ್ಷರಾದ ರಾಮಕೃಷ್ಣಪ್ಪ, ಜಿ ಸುಬ್ಬಾರೆಡ್ಡಿ, ಆದಿರೆಡ್ಡಿ, ಜಿಲ್ಲಾಧಿಕಾರಿ ಪಿ ಎನ್ ರವೀಂದ್ರ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಕಾಶ್ ಜಿ ಟಿ ನಿಟ್ಟಾಲಿ, ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಅತಿಕ್ ಪಾಷ, ತಾಲೂಕು ಮಟ್ಟದ ಗ್ಯಾರಂಟಿ ಯೋಜನಾ ಅನುಷ್ಠಾನ ಪ್ರಾಧಿಕಾರಿದ ಅಧ್ಯಕ್ಷರು, ಸದಸ್ಯರು, ವಾರ್ತಾ ಇಲಾಖೆಯ ವಾರ್ತಾ ಸಹಾಯಕ ಎಂ ಆರ್ ಮಂಜುನಾಥ, ವಿವಿಧ ಇಲಾಖೆಗಳ ಅಧಿಕಾರಿಗಳು, ಗೌತಮ ಬುದ್ಧ ಸಾಮಾಜಿಕ ಮತ್ತು ಸಾಂಸ್ಕೃತಿಕ ಕಲಾತಂಡದ ಕಲಾವಿದರು ಪಾಲ್ಗೊಂಡಿದ್ದರು.