ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಮೇರೆಗೆ ಪ್ರಾಧಿಕಾರದ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ಮತ್ತು ವ್ಯಾಜ್ಯ ಪೂರ್ವ ಪ್ರಕರಣಗಳನ್ನು ಇತ್ಯರ್ಥಪಡಿಸುವ ಸಲುವಾಗಿ ಜಿಲ್ಲೆಯಾದ್ಯಂತ ಮಾರ್ಚ್ 9ರಂದು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿನ ಎಲ್ಲ ನ್ಯಾಯಾಲಯಗಳಲ್ಲಿ ರಾಷ್ಟ್ರೀಯ ಲೋಕ್ ಅದಾಲತ್ ಹಮ್ಮಿಕೊಳ್ಳಲಾಗಿದೆ. ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಪ್ರಧಾನ ಮತ್ತು ಜಿಲ್ಲಾ ಸತ್ರ ನ್ಯಾಯಾಧೀಶೆ ನೇರಳೆ ವೀರಭದ್ರಯ್ಯ ಭವಾನಿ ಮನವಿ ಮಾಡಿದರು.
ಚಿಕ್ಕಬಳ್ಳಾಪುರ ನಗರದ ಜಿಲ್ಲಾ ನ್ಯಾಯಾಲಯದ ಸಭಾಂಗಣದಲ್ಲಿ ನಡೆದ ಪತ್ರಿಕಾಗೋಷ್ಟಿಯಲ್ಲಿ ಮಾತನಾದಿದರು.
“ರಾಷ್ಟ್ರ, ರಾಜ್ಯ, ಜಿಲ್ಲೆ ಹಾಗೂ ತಾಲೂಕು ಮಟ್ಟದಲ್ಲಿ ಏಕ ಕಾಲದಲ್ಲಿ ಮಾರ್ಚ್ 9ರಂದು ರಾಷ್ಟ್ರೀಯ ಲೋಕ್ ಅದಾಲತ್ ನಡೆಯಲಿದೆ. ಅದರಂತೆ ಚಿಕ್ಕಬಳ್ಳಾಪುರ ಜಿಲ್ಲೆಯ ಎಲ್ಲ ನ್ಯಾಯಾಲಯಗಳಲ್ಲಿ ಘೋರ ಅಪರಾಧಿಕ ಕೃತ್ಯದ ಪ್ರಕರಣಗಳನ್ನು ಹೊರತುಪಡಿಸಿ ಉಳಿದಂತಹ ಚಿಕ್ಕ ಪುಟ್ಟ ಅಪರಾಧಿಕ ಪ್ರಕರಣಗಳನ್ನು ಇತ್ಯರ್ಥಪಡಿಸಲು ಲೋಕ್ ಅದಾಲತ್ ಆಯೋಜಿಸಲಾಗಿದೆ. ಈ ಅದಾಲತ್‌ನಲ್ಲಿ ಭಾಗವಹಿಸುವುದರಿಂದ ನ್ಯಾಯಾಲಯದ ಸಮಯ ಉಳಿಯುವುದರ ಜೊತೆಗೆ ವ್ಯಾಜ್ಯದಾರರ ಹಣ, ಸಮಯ ಉಳಿಯಲಿದೆ. ಜೊತೆಗೆ ನೆಮ್ಮದಿಯುತ ಜೀವನ ಎರಡೂ ವ್ಯಾಜ್ಯದಾರರಿಗೆ ದೊರಕುವುದರಿಂದ ಎಲ್ಲರೂ ತಮ್ಮ ವ್ಯಾಜ್ಯಗಳನ್ನು ಪರಿಹರಿಸಿಕೊಳ್ಳಲು ಇದೊಂದು ಸುವರ್ಣ ಅವಕಾಶವಾಗಲಿದೆ” ಎಂದು ತಿಳಿಸಿದರು.
“ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆಯ ಸಹಕಾರದೊಂದಿಗೆ ಈ ಬಾರಿ ಲೋಕ್ ಅದಾಲತ್‌ನಲ್ಲಿ 40 ಸಾವಿರಕ್ಕೂ ಹೆಚ್ಚು ಪ್ರಕರಣಗಳನ್ನು ಇತ್ಯರ್ಥಪಡಿಸುವ ಗುರಿಯನ್ನು ಹೊಂದಿದ್ದೇವೆ” ಎಂದು ಮಾಹಿತಿ ನೀಡಿದರು.
“ಪ್ರಸ್ತುತ ನ್ಯಾಯಲಯಗಳಲ್ಲಿ ಬಾಕಿ ಇರುವ 2,468 ಹಾಗೂ 39,617 ವ್ಯಾಜ್ಯ ಪೂರ್ವ ಪ್ರಕರಣಗಳು ಸೇರಿದಂತೆ ಒಟ್ಟು 40 ಸಾವಿರಕ್ಕೂ ಹೆಚ್ಚು ಪ್ರಕರಣಗಳನ್ನು ಇತ್ಯರ್ಥಪಡಿಸಲು ಪ್ರಯತ್ನ ಮಾಡಲಾಗುವುದು. ನ್ಯಾಯಾಲಯದಲ್ಲಿ ರಾಜಿ ಮಾಡಿಕೊಂಡರೆ ಮನಃಶಾಂತಿ ಮತ್ತು ನೆಮ್ಮದಿ ವಾತಾವರಣ ಮೂಡಲಿದೆ. ಕಕ್ಷಿದಾರರು ಅಮೂಲ್ಯವಾದ ಸಮಯದ ವ್ಯರ್ಥವಿಲ್ಲದೆ ಉಚಿತವಾಗಿ ಕಾನೂನು ನೆರವು ಪಡೆಯಬಹುದು” ಎಂದು ತಿಳಿಸಿದರು.
“ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗಪಡಿಸಿಕೊಂಡು ಲೋಕ್ ಅದಾಲತ್‌ನಲ್ಲಿ ನ್ಯಾಯಾಲಯಗಳಲ್ಲಿ ಇರುವ ಪ್ರಕರಣಗಳು, ಮೋಟಾರ್ ವಾಹನ, ಅಪಘಾತ ಪರಿಹಾರದ ಸ್ವಾಧೀನ ಪ್ರಕರಣಗಳು, ವಿದ್ಯುತ್ ಮಂಡಳಿ ಪ್ರಕರಣಗಳು, ಬ್ಯಾಂಕ್ ಸಂಬಂಧಿಸಿದ ಪ್ರಕರಣಗಳು, ಚೆಕ್ ಅಮಾನ್ಯ ಪ್ರಕರಣಗಳು, ವೈವಾಹಿಕ ಅಥವಾ ಜೀವನಾಂಶ ಪ್ರಕರಣಗಳು ಸೇರಿದಂತೆ ಕಾನೂನಿನನ್ವಯ ರಾಜಿ ಆಗಬಹುದಾದ ಕ್ರಿಮಿನಲ್ ಪ್ರಕರಣಗಳು ಮತ್ತು ಪ್ರಕರಣಗಳನ್ನು ಲೋಕ್ ಅದಾಲತ್‌ನಲ್ಲಿ ಬಗೆಹರಿಸಿಕೊಳ್ಳಲು ಅವಕಾಶವಿದ್ದು, ಸದುಪಯೋಗಪಡಿಸಿಕೊಳ್ಳಬೇಕು” ಎಂದು ಸಾರ್ವಜನಿಕರಲ್ಲಿ ಮನವಿ ಮಾಡಿದರು.
ಈ ಸುದ್ದಿ ಓದಿದ್ದೀರಾ? ಕೊಪ್ಪಳ | ʼನಮ್ಮ ನಡಿಗೆ ಮಾದಕ ಮುಕ್ತ ಸಮಾಜದ ಕಡೆಗೆʼ ಜಾಗೃತಿ ಕಾರ್ಯಕ್ರಮ
“ಸಾರ್ವಜನಿಕರು ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಅಥವಾ ತಾಲೂಕು ಕಾನೂನು ಸೇವಾ ಸಮಿತಿಯ ಸದಸ್ಯ ಕಾರ್ಯದರ್ಶಿಯವರನ್ನು ಸಂಪರ್ಕಿಸಬಹುದು” ಎಂದು ತಿಳಿಸಿದರು.