ಕೆಎಸ್‌ಆರ್‌ಟಿಸಿ ಬಸ್‌ವೊಂದು ಚಾಲಕನ ನಿಯಂತ್ರಣ ತಪ್ಪಿ, ರಸ್ತೆ ಬದಿಯಲ್ಲಿದ್ದ ಮನೆ ಮೇಲೆ ಉರುಳಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಜಯಪುರ ಬಳಿ ನಡೆದಿದೆ. ಘಟನೆಯಲ್ಲಿ ಬಸ್‌ನಲ್ಲಿದ್ದ 30 ಮಂದಿಗೆ ಗಾಯಗಳಾಗಿವೆ ಎಂದು ವರದಿಯಾಗಿದೆ.
ಬೆಂಗಳೂರಿನಿಂದ ಶೃಂಗೇರಿಗೆ ತೆರಳುತ್ತಿದ್ದ ಬಸ್, ಜಯಪುರ ಬಳಿ ಅಪಘಾತಕ್ಕೀಡಾಗಿದೆ. ಚಾಲಕನ ನಿಯಂತ್ರಣ ತಪ್ಪಿದ ಬಸ್, ಜಯಪುರದ ಪುಟ್ಟಪ್ಪ ಪೂಜಾರಿ ಎಂಬವರ ಮನೆಯ ಮೇಲೆ ಬಸ್ ಉರುಳಿದೆ.
ಘಟನೆಯಲ್ಲಿ ಗಾಯಗೊಂಡಿದ್ದವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಬಸ್ ಚಾಲಕ ವೆಂಕಪ್ಪ ಮತ್ತು ಓರ್ವ ಪ್ರಯಾಣಿಕನಿಗೆ ಗಂಭೀರ ಗಾಯವಾಗಿದ್ದು, ಅವರನ್ನು ಕೊಪ್ಪ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಮನೆಯಲ್ಲಿದ್ದ ಶಾಂತಾ ಅವರಿಗೂ ಗಾಯಗಳಾಗಿವೆ.
ಬಸ್ ಬೆಂಗಳೂರು ಡಿಪೋಗೆ ಸೇರಿದ್ದು, ಬಸ್‌ನಲ್ಲಿ 45 ಪ್ರಯಾಣಿಕರಿದ್ದರು ಎಂದು ತಿಳಿದುಬಂದಿದೆ. ಬಸ್‌ಅನ್ನು ವೇಗವಾಗಿ ಚಲಾಯಿಸುತ್ತಿದ್ದದ್ದೇ ಘಟನೆಗೆ ಕಾರಣವೆಂದು ಸ್ಥಳೀಯರು ಆರೋಪಿಸಿದ್ದಾರೆ.
ಸ್ಥಳಕ್ಕೆ ಜಯಪುರ ಪೊಲೀಸ್ ಠಾಣೆಯ ಪೊಲೀಸರು ತೆರಳಿ, ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡು, ತನಿಖೆ ನಡೆಸುತ್ತಿದ್ದಾರೆ.