ಚಿಕ್ಕಮಗಳೂರು ನಗರದ ಕುವೆಂಪು ಕಲಾಮಂದಿರದಲ್ಲಿ ಕಾನೂನು ಅರಿವು ಕಾರ್ಯಕ್ರಮದಲ್ಲಿ ಜಿಲ್ಲಾ ನ್ಯಾಯಾಧೀಶ ರವೀಂದ್ರ ಹೆಗಡೆ ಮಾತನಾಡಿ, “ಬಾಲಕಾರ್ಮಿಕ ಪದ್ಧತಿಯನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡಲು ಮತ್ತು ಮಕ್ಕಳಿಗೆ ಉತ್ತಮ ಶಿಕ್ಷಣ ದೊರೆಯುವಂತೆ ಮಾಡಲು ಸಮಾಜದ ಪ್ರತಿಯೊಬ್ಬರಲ್ಲೂ ಸಾಮಾಜಿಕ ಕಳಕಳಿ ಹಾಗೂ ಹೊಣೆಗಾರಿಕೆ ಅಗತ್ಯ ಎಂದರು.
ಕನಿಷ್ಠ ವೇತನ ಕಾಯ್ದೆಯಡಿ ನೌಕರರಿಗೆ ಹಾಗೂ ಕಾರ್ಮಿಕರಿಗೆ ಸರಿಯಾದ ವೇತನ ಸಿಗುವಂತೆ ನೋಡಿಕೊಳ್ಳುವುದು ಅಧಿಕಾರಿಗಳ ಮತ್ತು ಮಾಲೀಕರ ಜವಾಬ್ದಾರಿಯಾಗಿದೆ. ಕಾರ್ಮಿಕರಿಗೆ ಸೂಕ್ತ ಆದಾಯ ಸಿಕ್ಕಾಗ, ಅವರು ತಮ್ಮ ಮಕ್ಕಳನ್ನು ಕೆಲಸಕ್ಕೆ ಕಳುಹಿಸದೆ ಶಾಲೆಗೆ ಕಳುಹಿಸುವ ಆತ್ಮವಿಶ್ವಾಸ ಬೆಳೆಸಿಕೊಳ್ಳುತ್ತಾರೆ. ಬಾಲಕಾರ್ಮಿಕ ನಿಷೇಧ ಕಾಯ್ದೆ ಸೇರಿದಂತೆ ಎಲ್ಲಾ ಕಾನೂನುಗಳು ಸರಿಯಾಗಿ ಅನುಷ್ಠಾನಗೊಂಡಾಗ ಮಾತ್ರ ಉತ್ತಮ ಸಮಾಜ ನಿರ್ಮಾಣ ಸಾಧ್ಯ ಎಂದು ತಿಳಿಸಿದರು.
ಇತ್ತೀಚೆಗೆ ಪತ್ರಿಕೆಯಲ್ಲಿ ಪ್ರಕಟವಾದ ’ಕಾರ್ಮಿಕರ ಮಕ್ಕಳಿಗೆ ಬಯಲೇ ಗತಿ’ ಎಂಬ ವರದಿಯನ್ನು ಉಲ್ಲೇಖಿಸಿದ ನ್ಯಾಯಾಧೀಶರು, ವಲಸೆ ಕಾರ್ಮಿಕರ ಮಕ್ಕಳ ದುಸ್ಥಿತಿಯ ಬಗ್ಗೆ ಕಾನೂನು ಸೇವಾ ಪ್ರಾಧಿಕಾರದಿಂದ ತಕ್ಷಣವೇ ಪರಿಶೀಲಿಸಿ ಕ್ರಮಕೈಗೊಳ್ಳಲು ಸೂಚಿಸಲಾಗಿತ್ತು. ಇದಕ್ಕೆ ಸ್ಪಂದಿಸಿದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಪಂಚಾಯತ್ ಅಧಿಕಾರಿಗಳು, ಆ ಮಕ್ಕಳನ್ನು ಶಾಲೆ, ಅಂಗನವಾಡಿ ಹಾಗೂ ವಸತಿ ನಿಲಯಗಳಿಗೆ ದಾಖಲಿಸಲು ಕ್ರಮ ಕೈಗೊಂಡಿರುವುದನ್ನು ಅವರು ಶ್ಲಾಘಿಸಿದರು.
ಇದನ್ನೂ ಓದಿದ್ದೀರಾ?ಹಾಸನ | ಅ. 29ರಿಂದ ನ. 11ರವರೆಗೆ ಹಾಸನಾಂಬೆ ಜಾತ್ರಾ ಮಹೋತ್ಸವ
ಕಾರ್ಯಾಗಾರದಲ್ಲಿ ಅಂತಾರಾಷ್ಟ್ರೀಯ ಕಾರ್ಮಿಕ ಸಂಸ್ಥೆಯ ರಾಷ್ಟ್ರೀಯ ಯೋಜನೆ ಸಂಯೋಜಕ ರಂಜಿತ್ ಪ್ರಕಾಶ್, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ವಿ.ಹನುಮಂತಪ್ಪ, ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸಾರ್ವಜನಿಕ ಮಾಹಿತಿ ಅಧಿಕಾರಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ಬಾಲಸುಬ್ರಹ್ಮಣ್ಯಂ, ಚಿಕ್ಕಮಗಳೂರು ಅಭಿಯೋಜನಾ ಇಲಾಖೆಯ ಕಾನೂನು ಅಧಿಕಾರಿ ಬಿ.ಬಿನು, ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷೆ ಜಯಶೀಲಾ ಕೆ.ಆರ್., ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ಮಾಲತಿ ಬಿ. ಮುಂತಾದವರಿದ್ದರು. ಕಾರ್ಮಿಕ ಇಲಾಖೆ ಸಹಾಯಕ ಕಾರ್ಮಿಕ ಆಯುಕ್ತ ಸುಭಾಷ್ ಎಂ.ಆಲದ ಕಟ್ಟಿ ಎಲ್ಲರನ್ನು ಸ್ವಾಗತಿಸಿದರು. ಕಾರ್ಮಿಕ ಅಧಿಕಾರಿ ಸುರೇಶ್ ವಂದಿಸಿದರು.




