ಚಿಕ್ಕಮಗಳೂರು ಜಿಲ್ಲೆಯ ಪ್ರವಾಸಿ ತಾಣಗಳಲ್ಲಿ ಮೂಲಸೌಕರ್ಯ ಕಲ್ಪಿಸುವಲ್ಲಿ ಜಿಲ್ಲಾಡಳಿತ ಸಂಪೂರ್ಣ ವಿಫಲವಾಗಿದೆ ಎಂದು ಆರೋಪಿಸಿ ಕರ್ನಾಟಕ ರಕ್ಷಣಾ ವೇದಿಕೆ (ಶಿವರಾಮೇಗೌಡ ಬಣ) ವತಿಯಿಂದ ನಗರದ ಆಜಾದ್ ಪಾರ್ಕ್ ವೃತ್ತದಲ್ಲಿ ಅರೆಬೆತ್ತಲೆಯಾಗಿ ಪ್ರತಿಭಟನೆ ನಡೆಸಲಾಯಿತು.
ಜಿಲ್ಲೆಯ ಪ್ರವಾಸಿ ತಾಣಗಳಲ್ಲಿ ಅಭಿವೃದ್ಧಿ ಶೂನ್ಯವಾಗಿದ್ದರೂ, ಎನ್‌ಎಂಡಿಸಿ ಚೆಕ್‌ಪೋಸ್ಟ್‌ನಲ್ಲಿ ದಿನಂಪ್ರತಿ ಒಂದೂವರೆಯಿಂದ ಎರಡು ಲಕ್ಷ ರೂಪಾಯಿಗಳಷ್ಟು ಹಣ ಸಂಗ್ರಹಿಸಲಾಗುತ್ತಿದೆ. ಸ್ಥಳೀಯರಿಂದಲೂ ಹಣ ವಸೂಲಿ ಮಾಡುತ್ತಿದ್ದರೂ ಮೂಲಸೌಕರ್ಯಗಳನ್ನು ಕಲ್ಪಿಸದೆ ಲೂಟಿ ಮಾಡಲಾಗುತ್ತಿದೆ ಎಂದು ಕರವೇ ಶಿವರಾಮೇಗೌಡ ಬಣದ ಚಿಕ್ಕಮಗಳೂರು ಜಿಲ್ಲಾಧ್ಯಕ್ಷ ಅಗ್ನಿ ಸುಮಂತ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪ್ರವಾಸಿ ತಾಣಗಳಲ್ಲಿ ಸುರಕ್ಷತೆಗಾಗಿ ತಡೆಗೋಡೆಗಳ ನಿರ್ಮಾಣ, ಜಲಪಾತಗಳ ಬಳಿ ಬಟ್ಟೆ ಬದಲಾಯಿಸಲು ಪ್ರತ್ಯೇಕ ಕೊಠಡಿಗಳ ವ್ಯವಸ್ಥೆ, ಶುದ್ಧ ಕುಡಿಯುವ ನೀರಿನ ಸೌಲಭ್ಯ ಹಾಗೂ ಸ್ಥಳೀಯರಿಗೆ ಸಂಪೂರ್ಣ ಉಚಿತ ಪ್ರವೇಶ ಕಲ್ಪಿಸಬೇಕು. ಎಲ್ಲಾ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಳೆದ 15 ದಿನಗಳ ಹಿಂದೆಯೇ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಗಿದ್ದರೂ ಯಾವುದೇ ಸ್ಪಂದನೆ ಸಿಕ್ಕಿಲ್ಲ. ಆಡಳಿತ ಮಂಡಳಿಯ ಈ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ಸಾಂಕೇತಿಕವಾಗಿ ಅರೆಬೆತ್ತಲೆ ಪ್ರತಿಭಟನೆ ಹಮ್ಮಿಕೊಳ್ಳಲಾಗುತ್ತದೆ ಎಂದು ಜಿಲ್ಲಾಧ್ಯಕ್ಷ ಅಗ್ನಿ ಸುಮಂತ್ ಆಗ್ರಹಿಸಿದರು.
ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು | ಫೋಟೋ ತೆಗೆಯಲು ಹೋದ ಯುವಕ ಸಾವು
ಇನ್ನಾದರೂ ಬೇಡಿಕೆಗಳಿಗೆ ಜಿಲ್ಲಾಡಳಿತ ಕಕ್ರಮ ಕೈಗೊಳ್ಳದಿದ್ದರೆ ತೀವ್ರ ಹೋರಾಟ ನಡೆಸಲಾಗುತ್ತದೆ ಎಂದು ಕರವೇ ಸಂಘಟನೆ ಎಚ್ಚರಿಗೆ ನೀಡಿದೆ.






