ಚಿಕ್ಕಮಗಳೂರು ಕನ್ನಡ ಸಾಹಿತ್ಯ ಪರಿಷತ್ತು , ಜಿಲ್ಲಾ ಪಂಚಾಯಿತಿ ಜಿಲ್ಲಾ ಆರೋಗ್ಯ ಇಲಾಖೆ, ಆಶಾ ಕಿರಣ ಚಾರಿಟಬಲ್ ಟ್ರಸ್ಟ್ , ಆಶ್ರಯ ಫೌಂಡೇಶನ್ ಹಾಗೂ ವೈದೇಹಿ ಆಸ್ಪತ್ರೆಯ ಸಹಯೋಗದಲ್ಲಿ ಹೃದಯ ಸಂಬಂಧಿ ಸಮಸ್ಯೆಗಳಿಂದ ಬಳಲುತ್ತಿದ್ದ 25 ಮಕ್ಕಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ರವಾನಿಸಲಾಯಿತು.
ನಗರದಲ್ಲಿ ಮೇ -15ರಂದು ಆಯೋಜಿಸಿದ್ದ ಉಚಿತ ಹೃದಯ ತಪಾಸಣಾ ಶಿಬಿರದಲ್ಲಿ ನೂರಾರು ಮಕ್ಕಳ ಆರೋಗ್ಯ ತಪಾಸಣೆ ನಡೆಸಲಾಗಿದ್ದು, ಹೃದಯ ಸಮಸ್ಯೆ ಪತ್ತೆಯಾದ ಮಕ್ಕಳಿಗೆ ಬೆಂಗಳೂರಿನ ವೈದೇಹಿ ಆಸ್ಪತ್ರೆಯಲ್ಲಿ ಉಚಿತ ಚಿಕಿತ್ಸೆ ನೀಡಲು ವ್ಯವಸ್ಥೆ ಮಾಡಲಾಗಿದೆ. 3 ತಿಂಗಳ ಹಸುಗೂಸಿನಿಂದ 14 ವರ್ಷದೊಳಗಿನ ಮಕ್ಕಳು ಈ ಯೋಜನೆಯ ಪ್ರಯೋಜನ ಪಡೆಯುತ್ತಿದ್ದಾರೆ.
ಮಕ್ಕಳೊಂದಿಗೆ ಅವರ ಪೋಷಕರಿಗೂ ಪ್ರಯಾಣ, ಊಟ ಹಾಗೂ ಇತರೆ ಅಗತ್ಯ ಸೌಲಭ್ಯಗಳನ್ನು ಉಚಿತವಾಗಿ ಒದಗಿಸಲಾಗಿದೆ. ನಗರದ ಸರ್ಕಾರಿ ಆಸ್ಪತ್ರೆ ಆವರಣದಿಂದ ವಿಶೇಷ ಬಸ್ ಮೂಲಕ ಮಕ್ಕಳನ್ನು ಬೆಂಗಳೂರಿಗೆ ಕಳುಹಿಸಲಾಯಿತು. ಆರ್ಥಿಕವಾಗಿ ಹಿಂದುಳಿದ ಕುಟುಂಬಗಳ ಮಕ್ಕಳಿಗೆ ಗುಣಮಟ್ಟದ ವೈದ್ಯಕೀಯ ಸೇವೆ ದೊರಕುವಂತೆ ಮಾಡುವ ಉದ್ದೇಶದಿಂದ ಈ ಮಾನವೀಯ ಸೇವಾ ಕಾರ್ಯವನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಸೂರಿ ಶ್ರೀನಿವಾಸ್ ತಿಳಿಸಿದರು. ಸಾರ್ವಜನಿಕರು ಕಾರ್ಯಕ್ರಮವನ್ನು ಶ್ಲಾಘಿಸಿದ್ದು, ಮಕ್ಕಳ ಆರೋಗ್ಯ ರಕ್ಷಣೆಗೆ ಇದು ಮಹತ್ವದ ಹೆಜ್ಜೆಯಾಗಿದೆ ಎಂದು ಅಭಿಪ್ರಾಯಪಟ್ಟರು.
ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು | ಚಾರ್ಮಾಡಿ ಘಾಟ್ : ಬಂಡೆ ಕುಸಿತ; ತಪ್ಪಿದ ಅನಾಹುತ
ಈ ಸಂದರ್ಭದಲ್ಲಿ ಕಸಾಪ ತಾಲ್ಲೂಕು ಮಹಿಳಾ ಘಟಕದ ಅಧ್ಯಕ್ಷೆ ವಿಜಯಲಕ್ಷ್ಮಿ ವಿಶ್ವನಾಥ್, ಕಸಾಪ ತಾಲ್ಲೂಕು ಅಧ್ಯಕ್ಷರಾದ ಲೋಕೇಶಪ್ಪ , ನಗರ ಘಟಕದ ಅಧ್ಯಕ್ಷರಾದ ರೂಪ ನಾಯಕ್ ಹೋಬಳಿ ಅಧ್ಯಕ್ಷರಾದ ವೀಣಾ ಮಲ್ಲಿಕಾರ್ಜುನ್, ನಿಕಟ ಪೂರ್ವ ಅಧ್ಯಕ್ಷರಾದ ಬಿಸ್ಲೆಹಳ್ಳಿ ಸೋಮಶೇಖರ್, ಆಶ್ರಯ ಫೌಂಡೇಶನ್ ಪ್ರತಿನಿಧಿಗಳು, ವೈದ್ಯರು, ಆರೋಗ್ಯ ಇಲಾಖೆ ಅಧಿಕಾರಿಗಳು ಹಾಗೂ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.




