ತರೀಕೆರೆ ತಾಲೂಕಿನ ಅಮೃತಾಪುರ ಗ್ರಾಮದಲ್ಲಿ ಅಡಿಕೆ ತೋಟದ ಮನೆಯ ನೀರಿನ ತೊಟ್ಟಿಯಲ್ಲಿ ಇಬ್ಬರು ಕಾರ್ಮಿಕರ ಶವ ಪತ್ತೆಯಾಗಿರುವ ಘಟನೆ ನಡೆದಿದೆ.
ಮೃತ ವ್ಯಕ್ತಿಗಳು ಆನಂದ್ (48), ಹಾಗೂ ಜುಂಜಾನಾಯ್ಕ (65) ಎಂದು ಗುರುತಿಸಲಾಗಿದೆ. ಈ ಅಮೃತಾಪುರ ಗ್ರಾಮದ ಮುರುಗೇಶ್ ಎಂಬುವವರಿಗೆ ಸೇರಿದ ಅಡಿಕೆ ತೋಟಕ್ಕೆ ಇಂದು ಬೆಳಗ್ಗೆ ಈ ಇಬ್ಬರು ಕಾರ್ಮಿಕರು ಅಡಿಕೆ ಸುಲಿಯುವ ಕೆಲಸಕ್ಕಾಗಿ ತೆರಳಿದ್ದರು. ಆದರೆ, ಸ್ವಲ್ಪ ಸಮಯದ ನಂತರ ತೋಟದ ಮನೆಯ ನೀರಿನ ತೊಟ್ಟಿಯಲ್ಲಿ ಇಬ್ಬರ ಮೃತದೇಹಗಳು ಪತ್ತೆಯಾಗಿದೆ.
ಈ ಇಬ್ಬರು ಆಕಸ್ಮಿಕವಾಗಿ ಕಾಲು ಜಾರಿ ನೀರಿನ ತೊಟ್ಟಿಗೆ ಬಿದ್ದಿದ್ದಾರೆಯೇ, ಆತ್ಮಹತ್ಯೆ ಮಾಡಿಕೊಂಡಿದ್ದಾರೆಯೇ ಅಥವಾ ಇದರ ಹಿಂದೆ ಕೊಲೆಯಂತಹ ಕೃತ್ಯ ಅಡಗಿದೆಯೇ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಘಟನಾ ಸ್ಥಳಕ್ಕೆ ಭೇಟಿ ನೀಡಿದ ತರೀಕೆರೆ ಠಾಣೆಯ ಪೊಲೀಸರು ಪರಿಶೀಲನೆ ನಡೆಸಿ, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ತರೀಕೆರೆ ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ.
ಇದನ್ನೂ ಓದಿದ್ದೀರಾ?ಹಾಸನ | ಜಿಲ್ಲಾಡಳಿತದಲ್ಲಿ ಅವ್ಯವಹಾರ ಆರೋಪ; ಲೋಕಾಯುಕ್ತಕ್ಕೆ ದೂರು
ತರೀಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಕಾರ್ಮಿಕರ ಸಾವಿನ ಹಿಂದಿನ ನಿಖರವಾದ ಕಾರಣವನ್ನು ಪತ್ತೆ ಹಚ್ಚಲು ಪೊಲೀಸರು ತನಿಖೆಯನ್ನು ಮುಂದುವರಿಸಿದ್ದಾರೆ.




