ಶೃಂಗೇರಿ ಪಟ್ಟಣ ಪಂಚಾಯಿತಿಯ ಖಾಯಂ ನೇಮಕಾತಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ, ಪೌರ ಕಾರ್ಮಿಕರು ನಾಳೆಯಿಂದ ಸ್ವಚ್ಛತ ಕಾರ್ಯ ಸ್ಥಗಿತಗೊಳಿಸಿ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲು ನಿರ್ಧರಿಸಿದ್ದಾರೆ.
ಸುಮಾರು ಒಂದೂವರೆ ವರ್ಷದ ಹಿಂದೆ 12 ಮಂದಿ ಪೌರ ಕಾರ್ಮಿಕರನ್ನು ಖಾಯಂಗೊಳಿಸುವಂತೆ ಆಗ್ರಹಿಸಿ ಸತತ 18 ದಿನಗಳ ಕಾಲ ಅಹೋರಾತ್ರಿ ಮುಷ್ಕರ ನಡೆಸಿದ್ದರು. ಆ ಸಂದರ್ಭದಲ್ಲಿ ಮುಷ್ಕರ ನಡೆಯುತ್ತಿದ್ದ ಸ್ಥಳಕ್ಕೆ ಶಾಸಕ ಟಿ.ಡಿ.ರಾಜೇಗೌಡ ಹಾಗೂ ಜಿಲ್ಲಾಧಿಕಾರಿಗಳು ಭೇಟಿ ನೀಡಿ, 12 ಮಂದಿ ಪೌರ ಕಾರ್ಮಿಕರನ್ನು ಖಾಯಂಗೊಳಿಸುವ ಭರವಸೆ ನೀಡಿದ್ದರು.
ಈ ಭರವಸೆಯ ಹಿನ್ನೆಲೆಯಲ್ಲಿ ಮುಷ್ಕರವನ್ನು ಹಿಂಪಡೆಯಲಾಗಿತ್ತು. ಆದರೆ, ಇದುವರೆಗೆ ಕೇವಲ ಮೂರು ಖಾಲಿ ಹುದ್ದೆಗಳನ್ನು ಮಾತ್ರ ಭರ್ತಿ ಮಾಡಲಾಗಿದ್ದು, ಉಳಿದ ಪೌರ ಕಾರ್ಮಿಕರ ಖಾಯಂ ನೇಮಕಾತಿ ವಿಚಾರದಲ್ಲಿ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು | ಜಿಂಕೆ ಬೇಟೆ: ಆರೋಪ ಬಂಧನ
ಭರವಸೆ ನೀಡಿ ಸುಮಾರು ಎರಡು ವರ್ಷ ಕಳೆದರೂ ಶಾಸಕರು, ಸರ್ಕಾರ ಹಾಗೂ ಸಂಬಂಧಪಟ್ಟ ಅಧಿಕಾರಿಗಳು ತಮ್ಮ ಬೇಡಿಕೆಗೆ ಸ್ಪಂದಿಸಿಲ್ಲ. ಹೀಗಾಗಿ ನಾಳೆಯಿಂದ (ನವೆಂಬರ್ 16) ಸ್ವಚ್ಛತಾ ಕಾರ್ಯವನ್ನು ಸಂಪೂರ್ಣ ಸ್ಥಗಿತಗೊಳಿಸಿ ಎಲ್ಲಾ ಸಂಘಟನೆಗಳ ಬೆಂಬಲದೊಂದಿಗೆ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲು ನಿರ್ಧರಿಸಿದ್ದಾರೆ.



