ಮಠದ ವಸತಿ ಶಾಲೆ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಮುರುಘಾ ಅವರನ್ನು ಪೊಲೀಸರು ಮತ್ತೆ ಬಂಧಿಸಿದ್ದಾರೆ.
ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮುರುಘಾ ಅವರ ವಿರುದ್ಧ ಎರಡು ಪೋಕ್ಸೋ ಪ್ರಕರಣಗಳು ದಾಖಲಾಗಿದ್ದವು. ಅವುಗಳಲ್ಲಿ ಒಂದು ಪ್ರಕರಣದಲ್ಲಿ ಜಾಮೀನು ಪಡೆದು ಹೊರಬಂದಿದ್ದ ಮುರುಘಾ ಅವರನ್ನು ಎರಡನೇ ಪ್ರಕರಣದಲ್ಲಿ ಬಂಧಿಸಲಾಗಿದೆ.
2ನೇ ಪೋಕ್ಸೋ ಪ್ರಕರಣದಲ್ಲಿ ಆರೋಪಿ ಮುರುಘಾ ಅವರನ್ನು ಬಂಧಿಸಲು ಚಿತ್ರದುರ್ಗ 2ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಅರೆಸ್ಟ್ ವಾರಂಟ್ ಜಾರಿ ಮಾಡಿತ್ತು. ವಾರಂಟ್ ಪಡೆದ ಚಿತ್ರದುರ್ಗ ಗ್ರಾಮಾಂತರ ಠಾಣೆ ಪಿಐ ಮುದ್ದುರಾಜ ನೇತೃತ್ವದ ಪೊಲೀಸರ ತಂಡ ಮುರುಘಾ ಅವರನ್ನು ದಾವಣಗೆರೆ ವಿರಕ್ತ ಮಠದಲ್ಲಿ ಬಂಧಿಸಿ, ಚಿತ್ರದುರ್ಗಕ್ಕೆ ಕರೆತರುತ್ತಿದ್ದಾರೆ.
ವಿದ್ಯಾರ್ಥಿನಿಯರ ಮೇಲೆ ದೌರ್ಜನ್ಯ ಎಸಗಿದ ಆರೋಪದಲ್ಲಿ 2022ರ ಸೆಪ್ಟೆಂಬರ್ 1ರಂದು ಮುರುಘಾ ಅವರನ್ನು ಬಂಧಿಸಲಾಗಿತ್ತು. ಅಂದಿನಿಂದ ಅವರನ್ನು ಚಿತ್ರದುರ್ಗದ ಕಾರಾಗೃಹದಲ್ಲಿ ಇರಿಸಲಾಗಿತ್ತು. ಅವರು ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದರು. ಆರೋಪಿ ಮುರುಘಾ ಅವರ ಜಾಮೀನು ಅರ್ಜಿಯನ್ನು ಚಿತ್ರದುರ್ಗ 2ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ತಿರಸ್ಕರಿಸಿತ್ತು. ಬಳಿಕ, ಮುರುಘಾ ಅವರ ವಕೀಲು ಹೈಕೋರ್ಟ್ ಮೆಟ್ಟಿಲೇರಿದ್ದರು. ಅರ್ಜಿಯ ವಿಚಾರಣೆ ನಡೆಸಿರುವ ಹೈಕೋರ್ಟ್, ಒಂದು ಪ್ರಕರಣದಲ್ಲಿ ಜಾಮೀನು ನೀಡಿತ್ತು. ನವೆಂಬರ್ 16ರಂದು ಅವರು ಜೈಲಿನಿಂದ ಬಿಡುಗಡೆಯಾಗಿದ್ದರು. ಆದರೆ, ಎರಡನೇ ಪ್ರಕರಣದಲ್ಲಿ ಈಗ ಮತ್ತೆ ಜೈಲು ಸೇರಿದ್ದಾರೆ.