ವರ್ಷದ ಹಿಂದೆ ಕಲುಷಿತ ನೀರು ಸೇವಿಸಿ ಅಮಾಯಕರು ಬಲಿಯಾಗಿದ್ದ ಚಿತ್ರದುರ್ಗದ ಹೊರ ವಲಯದ ಕಾವಾಡಿಗರಹಟ್ಟಿಗೆ ಉಪಲೋಕಾಯುಕ್ತ ನ್ಯಾಯಮೂರ್ತಿ ಕೆ ಎನ್ ಫಣೀಂದ್ರ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಅಲ್ಲಿನ ಸಮಸ್ಯೆಗಳನ್ನು ನಿವಾರಿಸಲು ಕೈಗೊಂಡ ಕ್ರಮಗಳ ಬಗ್ಗೆ ಹಾಗೂ ಒಳಚರಂಡಿ ವ್ಯವಸ್ಥೆ, ಓವರ್ ಹೆಡ್ ಟ್ಯಾಂಕ್, ಶುದ್ಧ ಕುಡಿಯುವ ನೀರಿನ ಘಟಕ ಸೇರಿದಂತೆ ಮೂಲ ಸೌಕರ್ಯಗಳ ವ್ಯವಸ್ಥೆ ಹೇಗಿದೆ ಎಂಬುದನ್ನು ಜನರಿಂದಲೇ ಕೇಳಿ ತಿಳಿದುಕೊಂಡರು. ಪ್ರತಿ ಮನೆಗೂ ಹೊಸದಾಗಿ ನಳ ಸಂಪರ್ಕ ಕಲ್ಪಿಸಿ ಸಮರ್ಪಕವಾಗಿ ನೀರಿನ ಸೌಲಭ್ಯ ಕಲ್ಪಿಸಲಾಗಿದ್ದು, ಕುಡಿಯುವ ನೀರಿಗೆ ಯಾವುದೇ ಸಮಸ್ಯೆಗಳಿಲ್ಲ ಎಂದು ಕವಾಡಿಗರಹಟ್ಟಿ ನಿವಾಸಿಗಳು ಮಾಹಿತಿ ನೀಡಿದರು.
ಬಳಿಕ ಮಾತನಾಡಿದ ನ್ಯಾ. ಕೆ ಎನ್ ಫಣೀಂದ್ರ, ಓವರ್ ಹೆಡ್ ಟ್ಯಾಂಕ್‍ಗಳನ್ನು ಕನಿಷ್ಟ 6 ತಿಂಗಳಿಗೊಮ್ಮೆಯಾದರೂ ಸ್ವಚ್ಛಗೊಳಿಸಿ ಶುದ್ಧ ಕುಡಿಯುವ ನೀರು ಪೂರೈಸಬೇಕು. ಚರಂಡಿಗಳನ್ನು ನಿಯಮಿತವಾಗಿ ಸ್ವಚ್ಛಗೊಳಿಸಬೇಕು ಎಂದು ನಗರಸಭೆ ಆಯುಕ್ತೆ ಎಂ ರೇಣುಕಾ ಅವರಿಗೆ ಸೂಚನೆ ನೀಡಿದರು.
ಕಾವಾಡಿಗರಹಟ್ಟಿ ಜನರಿಗೆ ನಿವೇಶನ ಹಂಚಿಕೆಗಾಗಿ ಈಗಾಗಲೇ ಮೂರು ಎಕರೆ ಜಮೀನು ಮಂಜೂರಾಗಿದ್ದು, ಆ ಪೈಕಿ 62 ಮಂದಿ ಫಲಾನುಭವಿಗಳಿಗೆ ನಿವೇಶನ ಹಂಚಿಕೆ ಮಾಡಲಾಗಿದೆ. ರಸ್ತೆ ಅಗಲೀಕರಣಕ್ಕಾಗಿ ಮನೆ ಕಳೆದುಕೊಂಡಿರುವ ಸಂತ್ರಸ್ತರಿಗೆ ಮೊದಲು ನಿವೇಶನ ಹಂಚಿಕೆಯಲ್ಲಿ ಪ್ರಾಶಸ್ತ್ಯ ನೀಡಬೇಕು. ಉಳಿದ ಕುಟುಂಬಗಳಿಗೆ ಸುತ್ತಮುತ್ತ ಇರುವ ಸರ್ಕಾರಿ ಜಮೀನು ಗುರುತಿಸಿ ಆದ್ಯತೆ ಮೇರೆಗೆ ನಿವೇಶನ ಹಂಚಿಕೆ ಮಾಡುವಂತೆ ತಾಕೀತು ಮಾಡಿದರು.
ಕಾವಾಡಿಗರಹಟ್ಟಿ ಘಟನೆ ಕುರಿತು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿ ನಗರಸಭೆ ಪೌರಾಯುಕ್ತರು, ಜಿಲ್ಲಾಧಿಕಾರಿಗಳನ್ನು ಪಾರ್ಟಿಗಳನ್ನಾಗಿ(ಸಾಕ್ಷಿದಾರರು) ಮಾಡಿಕೊಳ್ಳಲಾಗುವುದು. ಬಡಾವಣೆಯಲ್ಲಿ ಕೈಗೊಂಡ ಅಭಿವೃದ್ಧಿ ಕಾರ್ಯಗಳ ಕುರಿತು ಕಾಲಕಾಲಕ್ಕೆ ವರದಿ ನೀಡಬೇಕು. ಇಲ್ಲಿನ ನಿವಾಸಿಗಳಿಗೆ ಅನುಕೂಲ ಕಲ್ಪಿಸಿಕೊಡುವವರೆಗೂ ಪ್ರಕರಣ ಚಾಲ್ತಿಯಿದ್ದು, ಆಗಾಗ್ಗೆ ಪರೀಶೀಲನೆಯಲ್ಲಿರಲಿದೆ ಎಂದು ಎಚ್ಚರಿಸಿದರು.
ಈ ಸುದ್ದಿ ಓದಿದ್ದೀರಾ?: ಚಿತ್ರದುರ್ಗ | ಕಾನೂನು, ಸಂವಿಧಾನ ನಮ್ಮ ಧರ್ಮ ಗ್ರಂಥವಾಗಬೇಕು: ಹಿರಿಯ ವಕೀಲೆ ವಿಜಯಲಕ್ಷ್ಮಿ
ಭೇಟಿ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಟಿ ವೆಂಕಟೇಶ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್ ಜೆ ಸೋಮಶೇಖರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು, ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಎನ್ ವಾಸುದೇವರಾಮ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕುಮಾರಸ್ವಾಮಿ, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಜಗದೀಶ್ ಹೆಬ್ಬಳ್ಳಿ, ತಹಶೀಲ್ದಾರ್ ಡಾ ನಾಗವೇಣಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.
