ಕುಲುಷಿತ ನೀರು ಕುಡಿದು ಹಲವರು ವಾಂತಿ-ಭೇದಿಯಿಂದ ಅಸ್ವಸ್ಥರಾಗಿದ್ದು, ಮಹಿಳೆಯೊಬ್ಬರು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗದ ಕವಾಡಿಗರಹಳ್ಳಿಯಲ್ಲಿ ನಡೆದಿದೆ. ಗ್ರಾಮಕ್ಕೆ ಆರೋಗ್ಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ನಗರಸಭೆ ಪೂರೈಕೆ ಮಾಡುತ್ತಿದ್ದ ನೀರಿನ ಮಾದರಿಯನ್ನು ಪ್ರಯೋಗಾಲಕ್ಕೆ ಕಳುಹಿಸಿದ್ದಾರೆ.
ಗ್ರಾಮದ ಸರ್ಕಾರಿ ಶಾಲೆಯಲ್ಲಿ ತಾತ್ಕಾಲಿಕ ಆರೋಗ್ಯ ತಪಾಸಣಾ ಕೇಂದ್ರ ತೆರೆಯಲಾಗಿದ್ದು, ಜಿಲ್ಲಾ ಆರೋಗ್ಯಾಧಿಕಾರಿ ನೇತೃತ್ವದ ವೈದ್ಯರ ತಂಡ ಗ್ರಾಮಸ್ಥರ ಆರೋಗ್ಯ ತಪಾಸನೆ ಮಾಡುತ್ತಿದೆ. ಅಸ್ವಸ್ಥರಾಗಿದ್ದವರನ್ನು ಚಿತ್ರದುರ್ಗದ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
“ಜಿಲ್ಲಾಸ್ಪತ್ರೆಯಲ್ಲಿ 20 ಮಂದಿ ಹಾಗೂ ಗ್ರಾಮದ ಶಾಲೆಯಲ್ಲಿ 15 ಜನರನ್ನು ದಾಖಲಿಸಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಕೆಲವರ ಆರೋಗ್ಯ ಪರಿಸ್ಥಿತಿ ಗಂಭೀರವಾಗಿದ್ದು, ಅವರನ್ನು ಬಸವೇಶ್ವರ ಆಸ್ಪತ್ರೆಗೆ ರವಾನಿಸಲಾಗಿದೆ” ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಜಿ.ಆರ್.ಜೆ ತಿಳಿಸಿದ್ದಾರೆ.
“ಕುಡಿಯುವ ನೀರಿಗೆ ಕೊಳಚೆ ನೀರು ಬೆರೆತಿರುವ ಅನುಮಾನವಿದೆ. ಕುಡಿಯುವ ನೀರು ಸೋರಿಕೆಯಾಗುತ್ತಿರುವ ಬಗ್ಗೆ ಪರಿಶೀಲನೆ ನಡೆಯುತ್ತಿದೆ. ನಗರಸಭೆಯಿಂದ ಪೂರೈಕೆಯಾಗುತ್ತಿದ್ದ ನೀರನ್ನು ಸ್ಥಗಿತಗೊಳಿಸಿದ್ದು, ಪರ್ಯಾಯ ವ್ಯವಸ್ಥೆ ಮಾಡಲಾಗಿದೆ” ಎಂದು ಅವರು ತಿಳಿಸಿದ್ದಾರೆ.