ಐಟಿಐ ಉತ್ತೀರ್ಣರಾಗುವ ವಿದ್ಯಾರ್ಥಿಗಳಿಗೆ ಸ್ಥಳೀಯವಾಗಿಯೇ ಅಪ್ರೆಂಟಿಸ್‌ಶಿಪ್ ಮತ್ತು ಉದ್ಯೋಗಾವಕಾಶ ಕಲ್ಪಿಸಲು ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಎಸ್. ರಮ್ಯ ಅಧಿಕಾರಿಗಳಿಗೆ ಸೂಚಿಸಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಜಿಲ್ಲಾ ಕೌಶಲ್ಯ ಮಿಷನ್ ಸಮಿತಿಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ 30ಕ್ಕೂ ಹೆಚ್ಚು ಕೆಲಸಗಾರರಿರುವ ನೋಂದಾಯಿತ ಕೈಗಾರಿಕೆಗಳು ಕೇವಲ 8 ಇವೆ. ಇವುಗಳಲ್ಲಿ ಸಕ್ರಿಯವಾಗಿರುವ ಸಂಸ್ಥೆಗಳಲ್ಲಿ ಯುವಕರಿಗೆ ಹೆಚ್ಚಿನ ಅಪ್ರೆಂಟಿಸ್‌ಶಿಪ್ ಅವಕಾಶ ಕಲ್ಪಿಸಬೇಕು ಎಂದ ಜಿಲ್ಲಾಧಿಕಾರಿ, ಅಗತ್ಯವಿರುವ ಕಡೆ ಹೊಸ ಟ್ರೇಡ್‌ಗಳನ್ನು (ತರಬೇತಿ ವಿಭಾಗಗಳು) ಪರಿಚಯಿಸಿ ಕೈಗಾರಿಕೆಗಳೊಂದಿಗೆ ಸಮನ್ವಯ ಸಾಧಿಸಬೇಕು ಎಂದರು.
ಸ್ಥಳೀಯವಾಗಿ ಕೈಗಾರಿಕೆಗಳು ಕಡಿಮೆ ಇರುವುದರಿಂದ, ಬೆಂಗಳೂರು ಮತ್ತು ತುಮಕೂರು ಭಾಗದ ಪ್ರಮುಖ ಕೈಗಾರಿಕೆಗಳನ್ನು ಸಂಪರ್ಕಿಸಿ ಅಪ್ರೆಂಟಿಸ್ ಡ್ರೈವ್ ಹಾಗೂ ಉದ್ಯೋಗ ಮೇಳಗಳನ್ನು ಆಯೋಜಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
This video cannot be played in your browser. Open the video directly
ಪಿಎಂಇಜಿಪಿ ಸೇರಿದಂತೆ ವಿವಿಧ ಯೋಜನೆಗಳಡಿ ಸ್ವಯಂ ಉದ್ಯೋಗ ಕೈಗೊಳ್ಳಲು ಇಚ್ಛಿಸುವ ಯುವಕ-ಯುವತಿಯರು ಹಾಗೂ ಸ್ವಸಹಾಯ ಸಂಘಗಳ ಸದಸ್ಯರಿಗೆ ಬ್ಯಾಂಕ್‌ಗಳಿಂದ ಸಾಲ ಸೌಲಭ್ಯ ದೊರೆಯುತ್ತಿರುವ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು. ಬ್ಯಾಂಕ್ ಶಾಖೆಗಳ ಮಟ್ಟದಲ್ಲಿ ಬಾಕಿ ಇರುವ ಅರ್ಜಿಗಳನ್ನು ಶೀಘ್ರ ಪರಿಶೀಲಿಸಿ, ಅರ್ಹ ಫಲಾನುಭವಿಗಳಿಗೆ ವಿಳಂಬವಿಲ್ಲದೆ ಸಾಲ ಮಂಜೂರು ಮಾಡಿ ವಿತರಿಸುವಂತೆ ಲೀಡ್ ಬ್ಯಾಂಕ್ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾ ಕೌಶಲ್ಯ ಮಿಷನ್ ಹಾಗೂ ತಾಲ್ಲೂಕು ಮಟ್ಟದ ಕೌಶಲ್ಯ ಸಮಿತಿಗಳ ಕಾರ್ಯಚಟುವಟಿಕೆ ಚುರುಕುಗೊಳಿಸಲು ಉಪಸಮಿತಿಗಳು ಮತ್ತು ತಾಲ್ಲೂಕು ಮಟ್ಟದ ಸಮಿತಿಗಳನ್ನು ಪುನರ್ ರಚಿಸಬೇಕು ಎಂದು ಜಿಲ್ಲಾಧಿಕಾರಿ ಹೇಳಿದರು. ಯುವಜನರಿಗೆ ಅಗತ್ಯ ಕೌಶಲ್ಯ ತರಬೇತಿ ನೀಡಿ ಸ್ವಾವಲಂಬಿಗಳನ್ನಾಗಿ ಮಾಡಲು ಎಲ್ಲಾ ಸಂಬಂಧಪಟ್ಟ ಇಲಾಖೆಗಳು ಶ್ರಮಿಸಬೇಕು ಎಂದರು.
ಜಪಾನ್‌ನಲ್ಲಿ ನಡೆಯಲಿರುವ ವಿಶ್ವ ಕೌಶಲ್ಯ ಸ್ಪರ್ಧೆಗೆ ಜಿಲ್ಲೆಯಿಂದ 135 ಅಭ್ಯರ್ಥಿಗಳು ನೋಂದಾಯಿಸಿಕೊಂಡಿದ್ದಾರೆ. ಇವರಿಗೆ ಸೂಕ್ತ ಸ್ಕ್ರೀನಿಂಗ್ ಮತ್ತು ತರಬೇತಿ ನೀಡಿ ಮುಂದಿನ ಹಂತಗಳಿಗೆ ಸಜ್ಜುಗೊಳಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಸಭೆಯಲ್ಲಿ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಸಣ್ಣಕ್ಕಿ ಮಾರುತಿ, ಜಿ.ಪಂ. ಯೋಜನಾ ನಿರ್ದೇಶಕಿ ಜಯಲಕ್ಷ್ಮಿ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ರೇಷ್ಮಾ ಹಾನಗಲ್, ಕೈಗಾರಿಕೆ ಇಲಾಖೆ ಜಂಟಿ ನಿರ್ದೇಶಕ ಮಂಜುನಾಥ, ಲೀಡ್ ಬ್ಯಾಂಕ್ ಜಿಲ್ಲಾ ವ್ಯವಸ್ಥಾಪಕ ಎಂ.ಪಿ. ಪ್ರವೀಣ್, ಹಿಂದುಳಿದ ವರ್ಗಗಳ ಜಿಲ್ಲಾ ಅಧಿಕಾರಿ ಪುಷ್ಪಲತಾ ಭಾವಿಮಠ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.





