ಬೀದರ್ ಜಿಲ್ಲೆಗೆ ಏ.16ರಂದು ಸಿಎಂ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಆಗಮಿಸಲಿದ್ದು, ₹1 ಸಾವಿರ ಕೋಟಿಗೂ ಅಧಿಕ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆಯನ್ನು ನೆರವೇರಿಸಲಿದ್ದಾರೆ ಎಂದು ಅರಣ್ಯ, ಪರಿಸರ ಮತ್ತು ಜೀವಶಾಸ್ತ್ರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ.ಖಂಡ್ರೆ ಅವರು ತಿಳಿಸಿದರು.
ಗುರುವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ನಡೆದ ಪೂರ್ವಭಾವಿ ಸಿದ್ಧತಾ ಸಭೆ ಉದ್ದೇಶಿಸಿ ಅವರು ಮಾತನಾಡಿದರು.
ʼನೀರಾವರಿ, ಕುಡಿಯುವ ನೀರು, ಜಿಲ್ಲಾಡಳಿತ ಭವನ, ರಸ್ತೆ ಮತ್ತು ಒಳಚರಂಡಿ, ಶಾಲೆ ಹಾಗೂ ವಸತಿ ಶಾಲೆ, ಹೊನ್ನಿಕೇರಿ ಪರಿಸರ ಪ್ರವಾಸೋದ್ಯಮ ಯೋಜನೆ, ಬ್ರೀಮ್ಸ್ ಕ್ಯಾಥ್‌ಲ್ಯಾಬ್, ಭಾಲ್ಕಿ ತಾಲೂಕು ಆಸ್ಪತ್ರೆ, ಭಾಲ್ಕಿ ಕ್ರೀಡಾಂಗಣ, ನೀರಾವರಿ ಯೋಜನೆಗಳು ಹಾಗೂ ವಿವಿಧ ಇಲಾಖೆಯ ನಾನಾ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಲಿದ್ದಾರೆʼ ಎಂದು ಮಾಹಿತಿ ನೀಡಿದರು.
ಏ.15ರಿಂದ ವಿಮಾನಯಾನ ಪುನಾರಂಭ :
ʼಕಳೆದ ಒಂದೂವರೆ ವರ್ಷದಿಂದ ಸ್ಥಗಿತಗೊಂಡಿದ್ದ ಬೀದರ್-ಬೆಂಗಳೂರು ನಾಗರಿಕ ವಿಮಾನಯಾನ ಸೇವೆಯನ್ನು ಏಪ್ರಿಲ್ 15ರಿಂದ ಪುನಾರಂಭಗೊಳಿಸಲಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯನವರು ಏ.16 ರಂದು ಬೀದರ್ ನಗರಕ್ಕೆ ಆಗಮಿಸಿ, ವಿಮಾನಯಾನ ಸೇವೆಗೆ ವಿಧ್ಯುಕ್ತವಾಗಿ ಚಾಲನೆ ನೀಡಲಿದ್ದಾರೆʼ ಎಂದು ತಿಳಿಸಿದರು.
ಅಂದಿನ ಕಾರ್ಯಕ್ರಮದಲ್ಲಿ ಆರೋಗ್ಯ ಸಚಿವ ದಿನೇಶ ಗುಂಡುರಾವ್, ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆಸೇರಿದಂತೆ ಹಲವು ಸಚಿವರು, ಗಣ್ಯರು ಭಾಗಿಯಾಗಲಿದ್ದಾರೆ. ಜಿಲ್ಲೆಯ ವಿವಿಧ ಭಾಗಗಳಿಂದ 40 ರಿಂದ 50 ಸಾವಿರ ಜನರು ಕಾರ್ಯಕ್ರಮದಲ್ಲಿ ಸೇರಲಿದ್ದಾರೆ. ಎಂದು ತಿಳಿಸಿದರು.

ಬಸವಕಲ್ಯಾಣದ ಆಧುನಿಕ ಅನುಭವ ಮಂಟಪದ ಕಾಮಗಾರಿ ಮುಂದುವರೆದಿದ್ದು, ಪೂರ್ಣಗೊಳ್ಳುವ ಹಂತದಲ್ಲಿದೆ. ಬೀದರ್ ಜಿಲ್ಲೆಯನ್ನು ಧಾರ್ಮಿಕ, ಐತಿಹಾಸಿಕ ಹಾಗೂ ಆಧ್ಯಾತ್ಮಿಕ ತಾಣವಾಗಿ ರೂಪಿಸುವಲ್ಲಿ ಈ ಯೋಜನೆಗಳು ಮಹತ್ವಪೂರ್ಣ ಪಾತ್ರ ವಹಿಸಲಿವೆʼ ಎಂದರು.
ʼಜಿಲ್ಲೆಯ ಸಮಸ್ಯೆಗಳನ್ನು ಮುಖ್ಯಮಂತ್ರಿಗಳ ಗಮನಕ್ಕೆ ತರುತ್ತೇವೆ, ಜಿಲ್ಲೆಯನ್ನು ಅಭಿವೃದ್ಧಿ ಪಥದತ್ತ ಕೊಂಡೊಯ್ಯುವ ಕಾರ್ಯ ಎಲ್ಲರೂ ಒಗ್ಗಟ್ಟಿನಿಂದ ಮಾಡುತ್ತೇವೆʼ ಎಂದು ಹೇಳಿದರು.
ಈ ಸುದ್ದಿ ಓದಿದ್ದೀರಾ? ಬೀದರ್‌ನಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ
ಪೌರಾಡಳಿತ ಮತ್ತು ಹಜ್ ಸಚಿವ ರಹೀಂ ಖಾನ್, ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಗಿರೀಶ ಬದೋಲೆ, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ, ಜಿಲ್ಲಾ ಉಪ ಅರಣ್ಯ ಸಂರಕ್ಷಣಾಧಿಕಾರಿ ವಾನತಿ ಎಂ.ಎಂ, ಅಪರ ಜಿಲ್ಲಾಧಿಕಾರಿ ಶಿವಕುಮಾರ ಶೀಲವಂತ, ಬೀದರ್ ಹಾಗೂ ಬಸವಕಲ್ಯಾಣ ಸಹಾಯಕ ಆಯುಕ್ತರು ಸೇರಿದಂತೆ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.