ಆಶಾ ಕಾರ್ಯಕರ್ತೆಯರಿಗೆ ನೀಡಲಾಗುವ ಗೌರವಧನವನ್ನು 10,000 ರೂ.ಗಳಿಗೆ ಏರಿಕೆ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ. ನಾಲ್ಕು ದಿನಗಳಿಂದ ಹೋರಾಟ ನಡೆಸುತ್ತಿದ್ದ ಆಶಾ ಕಾರ್ಯಕರ್ತೆಯರು ಮುಖ್ಯಮಂತ್ರಿಗಳ ಭರವಸೆ ಮೇರೆಗೆ ತಮ್ಮ ಮುಷ್ಕರವನ್ನು ಹಿಂಪಡೆದಿದ್ದಾರೆ.
ಕನಿಷ್ಠ ಮಾಸಿಕ ಗೌರವಧನ 15 ಸಾವಿರ ರೂ.ಗಳಿಗೆ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಆಶಾ ಕಾರ್ಯಕರ್ತೆಯರು ಕಳೆದ ನಾಲ್ಕು ದಿನಗಳಿಂದ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಅನಿರ್ಧಿಷ್ಟಾವಧಿ ಮುಷ್ಕರ ಮಾಡುತ್ತಿದ್ದರು.
ಶುಕ್ರವಾರ ಮಧ್ಯಾಹ್ನ ಮುಖ್ಯಮಂತ್ರಿಗಳ ಜತೆಗೆ ಸಂಘದ ಅಧ್ಯಕ್ಷೆ ನಾಗಲಕ್ಷ್ಮಿ ಸೇರಿದಂತೆ ಆಶಾ ಕಾರ್ಯಕರ್ತೆಯರು ಮಾತುಕತೆ ನಡೆಸಿದ್ದಾರೆ. ಈ ವೇಳೆ, ಸಿಎಂ ಸಿದ್ದರಾಮಯ್ಯ ಅವರು ಗೌರವಧನವನ್ನು 10 ಸಾವಿರ ರೂ.ಗಳಿಗೆ ನಿಗದಿ ಮಾಡುವುದಾಗಿ ಗ್ಯಾರಂಟಿ ಕೊಟ್ಟಿದ್ದಾರೆ. ಜತೆಗೆ, ಇನ್ಸೆಂಟಿವ್ ಅನ್ನು ಹೆಚ್ಚಾಗಿ ಪಡೆಯಬಹುದು ಎಂದು ಹೇಳಿದ್ದಾರೆ. ಅಲ್ಲದೆ, ಮೊಬೈಲ್ ಬಳಕೆ ಮಾಡುವುದಕ್ಕೆ ಬರದೇ ಇರುವವರ ಸಲುವಾಗಿ ಪರ್ಯಾಯ ವ್ಯವಸ್ಥೆಯನ್ನು ಹುಡುಕೋಣ, ರಜಾ ದಿನಗಳ ಬಗ್ಗೆ ಚರ್ಚಿಸುವುದಾಗಿ ಮುಖ್ಯಮಂತ್ರಿಗಳ ತಿಳಿಸಿದ್ದಾರೆ ಎಂದು ಸಂಘದ ಅಧ್ಯಕ್ಷೆ ನಾಗಲಕ್ಷ್ಮಿ ಹೇಳಿದ್ದಾರೆ.
ಈ ಸುದ್ದಿ ಓದಿದ್ದೀರಾ? ಉದ್ಯೋಗ ಮಾಹಿತಿ | ಎಸ್‌ಎಸ್‌ಎಲ್‌ಸಿ ಪಾಸಾದವರಿಗೆ ಅಂಚೆ ಇಲಾಖೆಯಿಂದ ನೇಮಕಾತಿ; ಅರ್ಜಿ ಸಲ್ಲಿಕೆಗೆ ಜ.28 ಕೊನೆಯ ದಿನ
ಇನ್ನು, ಆಶಾ ಕಾರ್ಯಕರ್ತೆಯರು ಕಳೆದ ಎಂಟು ವರ್ಷಗಳಿಂದ ಗೌರವಧನ ಹೆಚ್ಚಳಕ್ಕೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಬಿಜೆಪಿ, ಜೆಡಿಎಸ್ ಹಾಗೂ ಕಾಂಗ್ರೆಸ್ ಈ ಮೂರು ಪಕ್ಷಗಳು ಅಧಿಕಾರದಲ್ಲಿದ್ದ ಅವಧಿಯಲ್ಲಿ ಪ್ರತಿಭಟನೆ ನಡೆಸಿದ್ದರೂ ಅವರಿಗೆ ನ್ಯಾಯ ಸಿಕ್ಕಿರಲಿಲ್ಲ. ಈಗ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಮತ್ತೆ ಪ್ರತಿಭಟನೆ ನಡೆಸಿದ್ದ ಆಶಾ ಕಾರ್ಯಕರ್ತರಿಗೆ ಸಿಎಂ ಸಿದ್ಧರಾಮಯ್ಯ ಗ್ಯಾರಂಟಿ ನೀಡಿದ್ದು, ಪ್ರತಿಭಟನೆಯನ್ನು ಹಿಂತೆಗೆದುಕೊಳ್ಳುವಂತೆ ಮನವಿ ಮಾಡಿದ್ದಾರೆ. ಆ ಮೇರೆಗೆ ಆಶಾ ಕಾರ್ಯಕರ್ತೆಯರು ಊರುಗಳಿಗೆ ತೆರಳುವ ಸಿದ್ಧತೆಯಲ್ಲಿದ್ದಾರೆ.