ಬಾಲಕಾರ್ಮಿಕ ಪದ್ಧತಿ ಸಂಪೂರ್ಣ ನಿರ್ಮೂಲನೆಗಾಗಿ ಮಕ್ಕಳ ಪೋಷಕರು ಹಾಗೂ ಮಕ್ಕಳನ್ನು ದುಡಿಸಿಕೊಳ್ಳುವ ಮಾಲೀಕರಲ್ಲಿ ವ್ಯಾಪಕ ಜಾಗೃತಿ ಮೂಡಿಸಬೇಕಾದ ಅಗತ್ಯವಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ ಅಧ್ಯಕ್ಷೆ ಶ್ರೀರೂಪ ಹೇಳಿದರು.
ನಗರದ ವರನಟ ಡಾ. ರಾಜ್‌ಕುಮಾರ್ ಜಿಲ್ಲಾ ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕಾರ್ಮಿಕ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಾಲಾ ಶಿಕ್ಷಣ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಸಹಯೋಗದಲ್ಲಿ ಆಯೋಜಿಸಿದ್ದ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಪ್ರತಿವರ್ಷದಂತೆ ಈ ವರ್ಷವೂ ವಿಶ್ವಾದ್ಯಂತ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆಯನ್ನು ಆಚರಿಸುವ ಮೂಲಕ ಸಾಮಾಜಿಕ ಪಿಡುಗಾಗಿ ಪರಿಣಮಿಸಿರುವ ಬಾಲಕಾರ್ಮಿಕ ಪದ್ಧತಿ ವಿರುದ್ಧ ಮಕ್ಕಳಲ್ಲಿ ಹಾಗೂ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ. ಮಕ್ಕಳನ್ನು ಬಲವಂತವಾಗಿ ದುಡಿಸಿಕೊಳ್ಳುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಬಾಲಕಾರ್ಮಿಕ ಪದ್ಧತಿಯಿಂದ ಮುಕ್ತಗೊಳಿಸಲಾದ ಮಕ್ಕಳಿಗೆ ಪುನರ್ವಸತಿ ಒದಗಿಸಿ, ಅವರ ಶಿಕ್ಷಣ ಮುಂದುವರಿಯಲು ಅಗತ್ಯ ಸೌಲಭ್ಯಗಳನ್ನು ಕಲ್ಪಿಸಬೇಕು ಎಂದು ಹೇಳಿದರು.
ಮಕ್ಕಳಿಗೂ ಇತರರಂತೆ ಸಮಾನ ಹಕ್ಕುಗಳಿದ್ದು, ಉತ್ತಮ ಶಿಕ್ಷಣ ಪಡೆಯುವ ಅವಕಾಶ ಕಲ್ಪಿಸುವ ಜವಾಬ್ದಾರಿ ಪೋಷಕರ ಮೇಲಿದೆ. ಸರ್ಕಾರ ಪ್ರತಿ ಮಗುವಿನ ಶಿಕ್ಷಣಕ್ಕಾಗಿ ಗಣನೀಯ ವೆಚ್ಚ ಮಾಡುತ್ತಿದ್ದು, ಅದರ ಸದುಪಯೋಗವಾಗಬೇಕು. ಶಿಕ್ಷಣದ ಜೊತೆಗೆ ಕಲೆ, ಕ್ರೀಡೆ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಮಕ್ಕಳನ್ನು ಪ್ರೋತ್ಸಾಹಿಸುವ ಮೂಲಕ ಉತ್ತಮ ನಾಗರಿಕರನ್ನಾಗಿ ರೂಪಿಸಬೇಕು ಎಂದು ತಿಳಿಸಿದರು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಂ. ಈಶ್ವರ್, ಬಾಲಕಾರ್ಮಿಕ ಪದ್ಧತಿ ವಿರುದ್ಧ ಅರಿವು ಮೂಡಿಸುವುದೇ ಈ ದಿನಾಚರಣೆಯ ಪ್ರಮುಖ ಉದ್ದೇಶವಾಗಿದೆ ಎಂದರು.

ಸರ್ಕಾರವು 1986ರಲ್ಲಿ ಬಾಲಕಾರ್ಮಿಕ ಪದ್ಧತಿ ತಡೆಗೆ ಕಾನೂನು ಜಾರಿಗೊಳಿಸಿದ್ದು, 14 ವರ್ಷದೊಳಗಿನ ದುಡಿಯುವ ಮಕ್ಕಳನ್ನು ಬಾಲಕಾರ್ಮಿಕರು ಹಾಗೂ 14ರಿಂದ 18 ವರ್ಷದೊಳಗಿನವರನ್ನು ಕಿಶೋರ ಕಾರ್ಮಿಕರೆಂದು ಗುರುತಿಸಲಾಗಿದೆ. ಮಕ್ಕಳನ್ನು ದುಡಿಮೆಗೆ ತಳ್ಳದೆ ಶಿಕ್ಷಣ ನೀಡುವ ಮೂಲಕ ಅವರ ಉಜ್ವಲ ಭವಿಷ್ಯ ನಿರ್ಮಾಣಕ್ಕೆ ಎಲ್ಲರೂ ಕೈಜೋಡಿಸಬೇಕು ಎಂದು ಹೇಳಿದರು.
ಮಕ್ಕಳಿಗೆ ಬದುಕುವ ಹಕ್ಕು, ಶಿಕ್ಷಣದ ಹಕ್ಕು, ಭಾಗವಹಿಸುವ ಹಕ್ಕು ಹಾಗೂ ರಕ್ಷಣೆಯ ಹಕ್ಕುಗಳಿದ್ದು, ಇವುಗಳನ್ನು ಕಾಪಾಡುವುದು ಸಮಾಜದ ಕರ್ತವ್ಯವಾಗಿದೆ. ಬಾಲಕಾರ್ಮಿಕ ಪದ್ಧತಿ ಮುಕ್ತ ಜಿಲ್ಲೆ ನಿರ್ಮಾಣಕ್ಕಾಗಿ ಅಂಗನವಾಡಿ ಕಾರ್ಯಕರ್ತೆಯರು ಸೇರಿದಂತೆ ತಳಮಟ್ಟದ ಅಧಿಕಾರಿಗಳು ಹೆಚ್ಚು ಸಕ್ರಿಯವಾಗಿ ಕಾರ್ಯನಿರ್ವಹಿಸಬೇಕು ಎಂದು ಅವರು ಕರೆ ನೀಡಿದರು.
ಜಿಲ್ಲಾ ಕಾರ್ಮಿಕ ಅಧಿಕಾರಿ ಟಿ.ಸಿ. ರಾಮಚಂದ್ರಯ್ಯ ಪ್ರಾಸ್ತಾವಿಕವಾಗಿ ಮಾತನಾಡಿದರು. ಜಿಲ್ಲಾ ಬಾಲ ನ್ಯಾಯ ಮಂಡಳಿ ಸದಸ್ಯ ಎಂ. ಗಂಗಾಧರಸ್ವಾಮಿ ಅವರು ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆ ಕುರಿತು ಮುಖ್ಯ ಭಾಷಣ ಮಾಡಿದರು.
ಕಾರ್ಯಕ್ರಮದಲ್ಲಿ ಬಾಲಕಾರ್ಮಿಕ ಪದ್ಧತಿಯಿಂದ ಮುಕ್ತಗೊಳಿಸಲಾದ ಬಾಲಕನಿಗೆ ₹35 ಸಾವಿರ ಪರಿಹಾರದ ಚೆಕ್ ವಿತರಿಸಲಾಯಿತು. ಇದೇ ಸಂದರ್ಭದಲ್ಲಿ ಶಾಲಾ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ್ದ ಚಿತ್ರಕಲೆ ಹಾಗೂ ಪ್ರಬಂಧ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ಮತ್ತು ಪ್ರಮಾಣಪತ್ರಗಳನ್ನು ವಿತರಿಸಲಾಯಿತು. ಇಲಾಖೆಯಲ್ಲಿ ಉತ್ತಮ ಸೇವೆ ಸಲ್ಲಿಸಿದ ಹಿರಿಯ ಕಾರ್ಮಿಕ ನಿರೀಕ್ಷಕರನ್ನು ಸನ್ಮಾನಿಸಲಾಯಿತು.
ಈ ವಿಶೇಷ ಸುದ್ದಿ ಓದಿದ್ದೀರಾ?ಎಸ್‌ಐಆರ್ ಪ್ರಕ್ರಿಯೆ ಪ್ರಜಾಪ್ರಭುತ್ವಕ್ಕೆ ಸವಾಲು: ಲಕ್ಷಾಂತರ ಮತದಾರರ ಹಕ್ಕು ಕಸಿಯುವ ಹುನ್ನಾರ
ಕಾರ್ಯಕ್ರಮದಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಎಂ.ಎನ್. ಶಶಿಧರ್, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಡಿ.ಸಿ. ಶೃತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಎಚ್.ಆರ್. ಸುರೇಶ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಸ್. ಚಿದಂಬರಂ, ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಉಪನಿರ್ದೇಶಕಿ ಹೆಚ್.ಎನ್. ಪುಟ್ಟಗೌರಮ್ಮ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಬಿ. ಮಂಜುಳ, ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷೆ ಎಂ. ಲತಾ, ಬಾಲಕಾರ್ಮಿಕ ಸೊಸೈಟಿ ಯೋಜನಾ ನಿರ್ದೇಶಕ ಎಂ. ಮಹೇಶ್, ಕಾರ್ಮಿಕ ನಿರೀಕ್ಷಕ ವಿ.ಎಲ್. ಪ್ರಸಾದ್, ನಾರಾಯಣಮೂರ್ತಿ, ಎನ್‌ಜಿಒ ನಾರಾಯಣಸ್ವಾಮಿ ಸೇರಿದಂತೆ ಹಲವರು ಇದ್ದರು.





