ರಾಜ್ಯಪಾಲರ ವಿರುದ್ಧ ಚಿಂತಾಮಣಿಯಲ್ಲಿ ಬೃಹತ್ ಪ್ರತಿಭಟನೆ ನಡೆಯಿತು. ಸಚಿವ ಡಾ.ಎಂ.ಸಿ.ಸುಧಾಕರ್ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ, ರಾಜ್ಯಪಾಲರು ಹಾಗೂ ಬಿಜೆಪಿ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಕೆಂಡಕಾರಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ದ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದನ್ನು ವಿರೋಧಿಸಿ ರಾಜ್ಯಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗಿರುವ ಬೆನ್ನಲ್ಲೇ, ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿಯಲ್ಲಿ ಭಾನುವಾರ ಸಚಿವ ಡಾ.ಎಂ.ಸಿ.ಸುಧಾಕರ್ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಿದರು.
ಚಿಂತಾಮಣಿ ನಗರದಲ್ಲಿರುವ ಸಚಿವ ಡಾ.ಎಂ.ಸಿ.ಸುಧಾಕರ್ ನಿವಾಸದಿಂದ ಮೆರವಣಿಗೆ ಹೊರಟ ಕಾಂಗ್ರೆಸ್ ಕಾರ್ಯಕರ್ತರು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹಾಗೂ ಬಿಜೆಪಿ ವಿರುದ್ಧ ಘೋಷಣೆಗಳನ್ನು ಮೊಳಗಿಸಿದರು. ನಗರದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ಮೂಲಕ ಪ್ರತಿಭಟನೆ ನಡೆಸಿದ ಕಾರ್ಯಕರ್ತರು ಬೆಂಗಳೂರು ವೃತ್ತಕ್ಕೆ ಬಂದು ಗೋ ಬ್ಯಾಕ್ ರಾಜ್ಯಪಾಲ ಎಂದು ಧಿಕ್ಕಾರ ಕೂಗಿದರು.
ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಜಿಲ್ಲಾ ಉಸ್ತುವಾರಿ ಹಾಗೂ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್, ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪೋಲೀಸರು ತನಿಖೆಗೆ ಅನುಮತಿ ಕೇಳದಿದ್ದರೂ ಮುಡಾ ಪ್ರಕರಣದಲ್ಲಿ ಪ್ರಾಸಿಕ್ಯೂಶನ್ ಗೆ ಅನುಮತಿ ನೀಡಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರ ನಡೆ ಸಂವಿಧಾನ ವಿರೋಧಿಯಾಗಿದೆ. ಇದು ಪ್ರಜಾಪ್ರಭುತ್ವದ ಕಗ್ಗೊಲೆಯಾಗಿದ್ದು, ತಕ್ಷಣವೇ ಪ್ರಾಸಿಕ್ಯೂಶನ್ ಅನುಮತಿಯನ್ನು ವಾಪಾಸ್ ಪಡೆಯಬೇಕು ಎಂದು ಆಗ್ರಹಿಸಿದರು.
ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆಯಂತೆ ಕೆಲಸ ಮಾಡುತ್ತಿದ್ದಾರೆ. ಚುನಾವಣೆಯಲ್ಲಿ ಬಹುಮತ ಪಡೆದ ಕಾಂಗ್ರೆಸ್ ಸರ್ಕಾರವನ್ನು ಅಭದ್ರಗೊಳಿಸುವ ಹುನ್ನಾರ ನಡೆದಿದೆ. ಯಾವುದೇ ಕಪ್ಪು ಚುಕ್ಕೆ ಇಲ್ಲದ ಸಿದ್ದರಾಮಯ್ಯ ವಿರುದ್ಧ ವಿನಾಕಾರಣ ಸುಳ್ಳು ಆರೋಪ ಮಾಡುತ್ತಿದ್ದಾರೆ. ಅವರ ಪರವಾಗಿ ಹೈಕಮಾಂಡ್ ಮತ್ತು ಕರ್ನಾಟಕದ ಜನತೆ ಇದೆ ಎಂದು ಅಭಯ ನೀಡಿದರು.
ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ 136 ಸ್ಥಾನ ನೀಡುವ ಮೂಲಕ ರಾಜ್ಯದ ಜನತೆ ಸ್ಪಷ್ಟ ಬಹುಮತ ನೀಡಿದ್ದಾರೆ. ಕಾಂಗ್ರೆಸ್‌ನ ಶಾಸಕರನ್ನು ಖರೀದಿಸಿ ಸರ್ಕಾರ ಉರುಳಿಸಲು ಸಾಧ್ಯವಿಲ್ಲ ಎಂಬುದನ್ನು ಮನಗಂಡಿರುವ ಬಿಜೆಪಿ ಮುಖಂಡರು ರಾಜ್ಯಪಾಲರ ಮೂಲಕ ರಾಜ್ಯ ಸರ್ಕಾರವನ್ನು ಬೀಳಿಸಲು ಮುಂದಾಗಿದ್ದಾರೆ ಎಂದು ಕಿಡಿಕಾರಿದರು.
ಐದು ಗ್ಯಾರಂಟಿ ಯೋಜನೆಗಳನ್ನು ಸಿದ್ದರಾಮಯ್ಯ ಅವರು ಯಶಸ್ವಿಯಾಗಿ ಜಾರಿಗೊಳಿಸಿರುವುದನ್ನು ಸಹಿಸಿಕೊಳ್ಳಲು ಬಿಜೆಪಿಯವರಿಗೆ ಸಾಧ್ಯವಾಗುತ್ತಿಲ್ಲ. ಅವರ ಜನಪ್ರಿಯತೆಗೆ ಕುಂದು ತರುವ ದುರುದ್ದೇಶದಿಂದಲೆ ಬಿಜೆಪಿಯವರು ರಾಜಭವನದ ಮೂಲಕ ಷಡ್ಯಂತ್ರ ನಡೆಸಿದ್ದಾರೆ ಎಂದು ಆರೋಪಿಸಿದರು.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ರಾಜ್ಯಪಾಲರ ಕಚೇರಿಯು ಕರ್ನಾಟಕಕ್ಕೆ ಮಾಡುತ್ತಿರುವ ಅವಮಾನವನ್ನು ಈ ರಾಜ್ಯ ಸಹಿಸಲ್ಲ
ಪ್ರತಿಭಟನೆಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೇಶವರೆಡ್ಡಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಮುರುಗಮಲ್ಲ ಲಕ್ಷ್ಮೀನಾರಾಯಣ ರೆಡ್ಡಿ, ಡಾಬಾ ನಾಗರಾಜ್, ಡಾ.ಬಾಲಾಜಿ ರೆಡ್ಡಿ, ಅಶ್ವಥ್ ನಾರಾಯಣಬಾಬು, ಡಾ.ವಿ.ಅಮರ್, ಮುಖಂಡರಾದ ಉಮೇಶ್, ಶೇಕ್ ಸಾದಿಕ್, ವಕೀಲರಾದ ಬರೀದ್, ನಗರಸಭಾ ಸದಸ್ಯರಾದ ಹರೀಶ್, ರೆಡ್ಡಪ್ಪ, ಇಮ್ತಿಯಾಜ್ ಪಾಷಾ, ಕೆ.ಪಿ.ಸಿ.ಸಿ ಸದಸ್ಯರಾದ ಸೈಯದ್ ಎಜಾಜ್, ಕೃಷ್ಣಮೂರ್ತಿ ಸೇರಿದಂತೆ ನೂರಾರು ಕಾರ್ಯಕರ್ತರು ಭಾಗವಹಿಸಿದ್ದರು.