ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ನಾಲತವಾಡ ಪಟ್ಟಣ ಪಂಚಾಯಿತಿ ಆಡಳಿತ ನಿರೀಕ್ಷೆಯಂತೆ ಕಾಂಗ್ರೆಸ್ ಸದಸ್ಯರ ಪಾಲಾಗಿದೆ.
14 ಸದಸ್ಯರ ಬಲದ ಪಟ್ಟಣ ಪಂಚಾಯಿತಿನಲ್ಲಿ ನಡೆದ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಗಳಿಗೆ ತಲಾ ಒಬ್ಬೊಬ್ಬರೇ ನಾಮಪತ್ರ ಸಲ್ಲಿಸಿದ್ದರಿಂದ ಅವಿರೋಧವಾಗಿ ಆಯ್ಕೆ ಘೋಷಿಸಲಾಯಿತು.
ಸಾಮಾನ್ಯ ಮಹಿಳೆಗೆ ಮೀಸಲಿದ್ದ ಅಧ್ಯಕ್ಷ ಸ್ಥಾನಕ್ಕೆ ವಿಜಯಲಕ್ಷ್ಮಿ ಇಳಕಲ್, ಉಪಾಧ್ಯಕ್ಷ ಸ್ಥಾನಕ್ಕೆ ಬಸವರಾಜ ಗಂಗನಗೌಡರ ಇವರಿಬ್ಬರು ನಾಮಪತ್ರ ಸಲ್ಲಿಸಿದ್ದರು. ಇಬ್ಬರ ನಾಮಪತ್ರಗಳು ಕ್ರಮಬದ್ಧವಾಗಿದ್ದು, ವಿಜಯಲಕ್ಷ್ಮಿ ಇಳಕಲ್ ಅಧ್ಯಕ್ಷರಾಗಿ, ಬಸವರಾಜ ಗಂಗನಗೌಡರ ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ತಹಶೀಲ್ದಾರ್ ಬಲರಾಮ ಕಟ್ಟಿಮನಿ ಘೋಷಿಸಿದರು.
ಪಟ್ಟಣ ಪಂಚಾಯತ್ ಚುನಾವಣಾ ಪ್ರಕ್ರಿಯೆಯಲ್ಲಿ ಸಾಮಾನ್ಯವಾಗಿ ವಿಧಾನಸಭೆ, ಲೋಕಸಭೆ ಸದಸ್ಯರಿಗೆ ಪಾಲ್ಗೊಳ್ಳಲು ಅವಕಾಶವಿರುತ್ತದೆ. ಈ ಹಿನ್ನೆಲೆಯಲ್ಲಿ ಶಾಸಕ ಸಿ ಎಸ್ ನಾಡಗೌಡ ಚುನಾವಣಾ ಪ್ರಕ್ರಿಯೆಯಲ್ಲಿ ಭಾಗಿಯಾದರು.
ಅಧ್ಯಕ್ಷ ಸ್ಥಾನಕ್ಕೆ ಎಸ್ ಬಿ ಗಂಗನಗೌಡರ ಸೂಚಕರಾಗಿ ಸಹಿ ಮಾಡಿದರೆ, ಉಪಾಧ್ಯಕ್ಷ ಸ್ಥಾನಕ್ಕೆ ಸಂಗಣ್ಣ ಬಾರಡ್ಡಿ ಸೂಚಕರಾಗಿ ಸಹಿ ಮಾಡಿದರು.
ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಈರಣ್ಣ ಕೊಣ್ಣೂರು ಸಹಾಯಕ ಚುನಾವಣಾ ಅಧಿಕಾರಿಯಾಗಿ ಕಾರ್ಯ ನಿರ್ವಹಿಸಿದರು.
ವಿಜಯೋತ್ಸವ ಸಂದರ್ಭದಲ್ಲಿ ಶಾಸಕರಾದ ಸಿ ಎಸ್ ನಾಡಗೌಡ ಮಾತನಾಡಿ, ನಾಲತವಾಡ ಪಟ್ಟಣದ ವ್ಯಾಪ್ತಿಯಲ್ಲಿ ಬರುವ ಸರ್ಕಾರದ ಯೋಜನೆಗಳನ್ನು ಸಮರ್ಪಕವಾಗಿ ಬಡವರಿಗೆ ತಲುಪಿಸುವ ಕೆಲಸ ಮಾಡಬೇಕು ಎಂದು ಹೊಸದಾಗಿ ಆಯ್ಕೆಯಾಗಿರುವ ಅಧ್ಯಕ್ಷ ಉಪಾಧ್ಯಕ್ಷರಿಗೆ ಕಿವಿಮಾತು ಹೇಳಿದರು.
