ವಿಜಯನಗರ ಜಿಲ್ಲೆ ಹೊಸಪೇಟೆ ನಗರಸಭೆಯ ಕಾರಿಗನೂರಿನ ವಾರ್ಡ್‌ನಲ್ಲಿ ಕಲುಷಿತ ನೀರು ಸೇವಿಸಿ 35 ಮಂದಿ ಅಸ್ವಸ್ಥಗೊಂಡು ಸೀತಮ್ಮ ಎಂಬುವವರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರಸಭೆ ಆಯುಕ್ತರು ಸೇರಿದಂತೆ ಮೂವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ.
ಹೊಸಪೇಟೆ ನಗರಸಭೆ ಆಯುಕ್ತ ಬಂಡಿ ವಡ್ಡರ್, ಸಹಾಯಕ ಕಾರ್ಯಪಾಲಕ ಅಭಿಯಂತರ ಸತೀಶ್ ಹಾಗೂ ಕಿರಿಯ ಅಭಿಯಂತರ ಖಾಜಿ ಅವರನ್ನು ಅಮಾನತುಗೊಳಿಸಲು ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹಮದ್ ಖಾನ್ ಸೂಚನೆ ನೀಡಿದ್ದಾರೆ.
ಮೂವರು ಅಧಿಕಾರಿಗಳನ್ನು ಕೂಡಲೇ ಅಮಾನತು ಮಾಡಿ ಇಲಾಖಾ ವಿಚಾರಣೆ ನಡೆಸಲು ನಿರ್ದೇಶನ ನೀಡಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ದಿವಾಕರ್ ಅವರ ಜತೆ ನಿರಂತರ ಸಂಪರ್ಕದಲ್ಲಿದ್ದು ಮಾಹಿತಿ ಪಡೆದು ಪ್ರಕರಣ ಮರು ಕಳಿಸದಂತೆ ಎಲ್ಲ ರೀತಿಯ ಮುನ್ನಚ್ಚರಿಕೆ ವಹಿಸುವಂತೆ ಸಚಿವರು ಸೂಚನೆ ನೀಡಿದ್ದಾರೆ.
ಕುಡಿಯುವ ನೀರು ಪೂರೈಕೆ ಹಾಗೂ ಒಳಚರಂಡಿ ವ್ಯವಸ್ಥೆ, ಸ್ವಚ್ಛತೆ ಬಗ್ಗೆ ನಿಗಾ ವಹಿಸುವಂತೆಯೂ ನಿರ್ದೇಶನ ನೀಡಿದ್ದಾರೆ.