ನೇಣು ಬಿಗಿದುಕೊಂಡು ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯವಿದ್ರಾವಕ ಘಟನೆ ಕೋಲಾರ ತಾಲೂಕಿನ ವೇಮಗಲ್ ಹೋಬಳಿಯ ಮಂಜಲಿ ಗ್ರಾಮದಲ್ಲಿ ಗುರುವಾರ ನಡೆದಿದೆ.
ಮಂಜಲಿ ಗ್ರಾಮದ ಮಾಲಾಶ್ರೀ (35) ಹಾಗೂ ಲಕ್ಷ್ಮಣ್ (38) ಆತ್ಮಹತ್ಯೆಗೆ ಶರಣಾದ ದಂಪತಿ.
ಮಾಲಾಶ್ರೀ ಮಂಜಲಿ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಅಕ್ಷರ ದಾಸೋಹದ ಅಡುಗೆ ಸಹಾಯಕಿಯಾಗಿ ಕೆಲಸ ಮಾಡುತ್ತಿದ್ದರು. ಪತಿ ಲಕ್ಷ್ಮಣ್ ಆಟೋ ಚಾಲಕರಾಗಿದ್ದರು. ದಂಪತಿಗೆ ಒಂದು ಗಂಡು, ಒಂದು ಹೆಣ್ಣು ಮಗುವಿದೆ.
ಗ್ರಾಮದ ಹೊರವಲಯದ ಮರಕ್ಕೆ ನೇಣು ಬಿಗಿದುಕೊಂಡು ಇಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸ್ಥಳಕ್ಕೆ ವೇಮಗಲ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಇಬ್ಬರ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.

ಕಳೆದ ಹತ್ತು ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದ ದಂಪತಿ ಕ್ಷುಲ್ಲಕ ಕಾರಣಕ್ಕೆ ಆಗಾಗ ಇಬ್ಬರ ನಡುವೆ ಗಲಾಟೆಯಾಗುತ್ತಿತ್ತು ಎನ್ನಲಾಗುತ್ತಿದೆ. ಆದರೆ, ಸಾವಿಗೆ ನಿಖರ ಕಾರಣ ಇನ್ನೂ ತಿಳಿದು ಬಂದಿಲ್ಲ.
ಈ ಕುರಿತು ವೇಮಗಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.