ಸಾಮರಸ್ಯ, ಉದ್ಯೋಗ, ಘನತೆಯ ಬದುಕಿಗಾಗಿ ಎಂಬ ಘೋಷಣೆಯೊಂದಿಗೆ ಫೆಬ್ರವರಿ 25, 26, 27ರಂದು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಉಳ್ಳಾಲದ ಕಲ್ಲಾಪು ಬಳಿ ಇರುವ ಯುನಿಟಿ ಸಭಾಂಗಣದಲ್ಲಿ ಡಿವೈಎಫ್ಐನ 12ನೇ ರಾಜ್ಯ ಸಮ್ಮೇಳನ ನಡೆಯಲಿದೆ.
ಡಿವೈಎಫ್ಐ ರಾಜ್ಯಾಧ್ಯಕ್ಷ ಮುನೀರ್ ಕಾಟಿಪಳ್ಳ ಮಂಗಳೂರಿನಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿ, “ಮೂರು ದಿನಗಳ ಕಾಲ ನಡೆಯುವ ಈ ಸಮ್ಮೇಳನ ಮೊದಲ ಎರಡು ದಿನ ಪ್ರತಿನಿಧಿ ಅಧಿವೇಶನ ನಡೆಯಲಿದ್ದು, ರಾಜ್ಯದ ಪ್ರತಿ ಜಿಲ್ಲೆಗಳಿಂದಲೂ ಸದಸ್ಯತ್ವದ ಆಧಾರದ ಮೇಲೆ ಮುನ್ನೂರು ಪ್ರತಿನಿಧಿಗಳು ಭಾಗವಹಿಸಲಿದ್ದಾರೆ” ಎಂದು ತಿಳಿಸಿದರು.
“ಸಮ್ಮೇಳನದ ಉದ್ಘಾಟನೆ ರಾಜ್ಯ ಸಮ್ಮೇಳನದ ಉದ್ಘಾಟನಾ ಸಮಾರಂಭವು 25ರಂದು ಬೆಳಿಗ್ಗೆ 10ಕ್ಕೆ ಯುನಿಟಿ ಹಾಲ್‌ನ ಪ್ರೊಫೆಸರ್ ಅಮೃತ ಸೋಮೇಶ್ವರ ವೇದಿಕೆ, ಡಾ ವಿಠಲ್ ಭಂಡಾರಿ ಸಭಾಂಗಣದಲ್ಲಿ ನಾಗೇಶ್ ಕುಮಾರ್ ನಗರದಲ್ಲಿ ನಡೆಯಲಿದ್ದು, ಕರ್ನಾಟಕದ ಉಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿಗಳಾದ ನಾಗಮೋಹನ್ ದಾಸ್ ರವರು ಉದ್ಘಾಟಿಸಲಿದ್ದಾರೆ” ಎಂದು ತಿಳಿಸಿದರು.
“ಮುಖ್ಯ ಅತಿಥಿಗಳಾಗಿ ಡಿವೈಎಫ್ಐ ಅಖಿಲ ಭಾರತ ಅಧ್ಯಕ್ಷರು ಹಾಗೂ ರಾಜ್ಯಸಭಾ ಸದಸ್ಯ ಎ ಎ ರಹೀಮ್ ಅವರು ಭಾಗವಹಿಸಲಿದ್ದಾರೆ. ಡಿವೈಎಫ್ಐ ಕರ್ನಾಟಕ ರಾಜ್ಯ ಅಧ್ಯಕ್ಷ ಮುನೀರ್ ಕಾಟಿಪಳ್ಳ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದು, ಕಾರ್ಯದರ್ಶಿ ಬಸವರಾಜ್ ಪೂಜಾರ್, ಕಾಸರಗೋಡು ಜಿಲ್ಲಾ ಕಾರ್ಯದರ್ಶಿ ರಾಜೇಶ್ ವೆಲ್ಲಾಟ್, ಕರ್ನಾಟಕ ರಾಜ್ಯ ಸಮಿತಿ ಸದಸ್ಯರುಗಳಾದ ರೇಣುಕಾ ಕಹರ್ ಭಾಗವಹಿಸಲಿದ್ದಾರೆ” ಎಂದರು.
ಯೂಥ್ ಮಾರ್ಚ್ : “ಸಮ್ಮೇಳನದ ಸಮಾರೋಪವು 27ರಂದು ನಡೆಯಲಿದ್ದು, ಆ ದಿನ ಸಂಜೆ 3ಕ್ಕೆ ಕುತ್ತಾರ್ ಜಂಕ್ಷನ್‌ನಿಂದ ಕಲ್ಲಾಪು ಯುನಿಟಿ ಹಾಲ್ ಮೈದಾನದವರೆಗೆ ಯುವಜನರ ವರ್ಣರಂಜಿತ ಮೆರವಣಿಗೆ ನಡೆಯಲಿದೆ” ಎಂದರು.
ಸಮ್ಮೇಳನದ ಬಹಿರಂಗ ಸಭೆ : “ರಾಜ್ಯ ಸಮ್ಮೇಳನದ ಬಹಿರಂಗ ಸಭೆಯು ತೊಕ್ಕೊಟ್ಟು ಯುನಿಟಿ ಮೈದಾನದ ಭಾಸ್ಕರ ಕುಂಬಳೆ ವೇದಿಕೆ, ಶ್ರೀನಿವಾಸ್ ಬಜಾಲ್ ನಗರದಲ್ಲಿ ನಡೆಯಲಿದ್ದು, ಇದರ ಪ್ರಧಾನ ಭಾಷಣಕಾರರಾಗಿ ಸಿಪಿಐಎಂ ಕೇಂದ್ರ ಸಮಿತಿಯ ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ, ಬಹು ಭಾಷಾ ಚಲನಚಿತ್ರ ನಟ ಪ್ರಕಾಶ್ ರೈ, ರಾಜ್ಯಸಭಾ ಸದಸ್ಯರು ಹಾಗೂ ಡಿವೈಎಫ್ಐನ ಅಖಿಲ ಭಾರತ ಅಧ್ಯಕ್ಷ ಎ ಎ ರಹೀಂ ಅವರು ಪ್ರಧಾನ ಭಾಷಣಕಾರರಾಗಿ ಭಾಗವಹಿಸಲಿದ್ದಾರೆ” ಎಂದು ಹೇಳಿದರು.
ಈ ಸುದ್ದಿ ಓದಿದ್ದೀರಾ? ತುಮಕೂರು | ಸ್ಲಂ ನಿವಾಸಿಗಳ ಬೇಡಿಕೆ ಈಡೇರಿಕೆಗೆ ಕೊಳಗೇರಿ ನಿವಾಸಿಗಳ ಹಿತರಕ್ಷಣಾ ಸಮಿತಿ ಆಗ್ರಹ
“ಫೆಬ್ರವರಿ 26ರಂದು ಬೆಳಿಗ್ಗೆ 10:30ಕ್ಕೆ ದೆಹಲಿ ಜೆಎನ್‌ಯು ವಿವಿಯ ವಿಶ್ರಾಂತ ಪ್ರಾಧ್ಯಾಪಕ ಡಾ. ಪುರುಷೋತ್ತಮ ಬಿಳಿಮಲೆಯವರಿಂದ “ಕರಾವಳಿ ಕಟ್ಟಿದ ಬಗೆ” ಎಂಬ ವಿಷಯದ ಮೇಲೆ ವಿಶೇಷ ಉಪನ್ಯಾಸ ನಡೆಯಲಿದೆ” ಎಂದು ತಿಳಿಸಿದರು.
ಸುದ್ದಿಗೋಷ್ಟಿಯಲ್ಲಿ ಸಮ್ಮೇಳನ ಸಮಿತಿಯ ಕಾರ್ಯಧ್ಯಕ್ಷ ಡಾ. ಕೃಷ್ಣಪ್ಪ ಕೊಂಚಾಡಿ, ಡಿವೈಎಫ್‌ಐ ಮುಖಂಡರುಗಳಾದ ಸಂತೋಷ್ ಬಜಾಲ್, ಸುನಿಲ್ ಕುಮಾರ್ ಬಜಾಲ್, ಬಿ ಕೆ ಇಮ್ತಿಯಾಜ್,
ನವೀನ್ ಕೊಂಚಾಡಿ, ಮನೋಜ್ ವಾಮಂಜೂರು, ರಿಜ್ವಾನ್ ಹರೇಕಳ ಇದ್ದರು.