ದಕ್ಷಿಣ ಕನ್ನಡ | ಪೋಕ್ಸೊ ಪ್ರಕರಣದಲ್ಲಿ ಕರ್ತವ್ಯ ಲೋಪ; ಮೂವರು ಅಧಿಕಾರಿಗಳಿಗೆ ₹5 ಲಕ್ಷ ದಂಡ

Date:

Advertisements

ಪೋಕ್ಸೊ ಪ್ರಕರಣದಲ್ಲಿ ಆರೋಪಿಗಳನ್ನು ರಕ್ಷಿಸಿ, ನಿರಪರಾಧಿಗಳ ಮೇಲೆ ಪ್ರಕರಣ ದಾಖಲಿಸಿದ್ದ ಪೊಲೀಸ್ ಅಧಿಕಾರಿಗಳಿಗೆ ಭಾರೀ ದಂಡ ವಿಧಿಸಿರುವ ಮಂಗಳೂರು ಜಿಲ್ಲಾ ಹೆಚ್ಚುವರಿ ಮತ್ತು ಪೋಕ್ಸೊ ವಿಶೇಷ ನ್ಯಾಯಾಲಯವು ಪೊಲೀಸರು ಮತ್ತು ಸಮಾಜಕ್ಕೆ ದಿಟ್ಟ ಸಂದೇಶ ರವಾನಿಸಿದೆ.

ಪೋಕ್ಸೊ ಪ್ರಕರಣದ ಸಾಕ್ಷಿಗಳ ವಿಚಾರಣೆ ಮಾಡಿ ಸಂಬಂಧಪಟ್ಟ ದಾಖಲೆಗಳನ್ನು ಪರಿಶೀಲಿಸಿ ಪ್ರಕರಣದ ತನಿಖೆ ಮಾಡುವಲ್ಲಿ ಮಂಗಳೂರಿನ ಮೂವರು ಹಿರಿಯ ಪೊಲೀಸ್ ಅಧಿಕಾರಿಗಳು ವಿಫಲರಾಗಿದ್ದರು.

ನ್ಯಾಯಾಲಯಕ್ಕೂ ತಪ್ಪು ಮಾಹಿತಿ ನೀಡಿದ ಹಾಗೂ ದಾಖಲೆಗಳನ್ನು ನೀಡುವಲ್ಲೂ ಕರ್ತವ್ಯ ಲೋಪ ಎಸಗಿರುವ ಸರ್ಕಲ್ ಇನ್ಸ್‌ಪೆಕ್ಟರ್ ಲೋಕೇಶ್ ಎ ಸಿ, ಸಬ್ ಇನ್ಸ್‌ಪೆಕ್ಟರ್ ಶ್ರೀಕಲಾ ಹಾಗೂ ಮತ್ತೋರ್ವ ಸಬ್ ಇನ್ಸ್‌ಪೆಕ್ಟರ್ ಪುಷ್ಪಾರಾಣಿ ವಿರುದ್ಧ ನ್ಯಾಯಾಲಯ ಕೆಂಡಾಮಂಡಲವಾಗಿದೆ.

Advertisements

“ನೈಜ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸದೆ, ನಿರಪರಾಧಿಗಳಾದ ಚಂದ್ರಪ್ಪ ಮತ್ತು ಪ್ರಸಾದ್ ಎಂಬ ಕೂಲಿ ಕಾರ್ಮಿಕರ ಮೇಲೆ ಯಾವುದೇ ಸಾಕ್ಷ್ಯಾಧಾರ ಇಲ್ಲದಿದ್ದರೂ ಪ್ರಕರಣ ದಾಖಲಿಸಿದ್ದ ಮೂವರು ಪೊಲೀಸ್ ಅಧಿಕಾರಿಗಳಿಗೆ ಒಟ್ಟು ಐದು ಲಕ್ಷ ರೂ. ದಂಡ ವಿಧಿಸಿದೆ. ಈ ಪೈಕಿ ನಿರ್ದೋಷಿ ಎಂದು ಸಾಬೀತಾದ ಚಂದ್ರಪ್ಪ ಎಂಬುವವರಿಗೆ ₹4 ಲಕ್ಷ ಹಾಗೂ ಪ್ರಸಾದ್ ಅವರಿಗೆ ₹1 ಲಕ್ಷ ವನ್ನು 40 ದಿನಗಳ ಒಳಗಾಗಿ ಪಾವತಿಸಬೇಕು. ಈ ದಂಡವನ್ನು ನ್ಯಾಯಾಲಯದಲ್ಲಿಯೇ ಪಾವತಿಸಬೇಕು” ಎಂದು ಪೋಕ್ಸೊ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಕೆ ಎಂ ರಾಧಾಕೃಷ್ಣ ಅವರು ಆದೇಶ ಹೊರಡಿಸಿದ್ದಾರೆ.

ಗಂಭೀರ ಅಪರಾಧ ಪ್ರಕರಣವಾದ ಈ ಪ್ರಕರಣದ ತೀರ್ಪಿನ ಮಾಹಿತಿಯನ್ನು ಸರ್ಕಾರದ ಮುಖ್ಯ ಕಾರ್ಯದರ್ಶಿಯವರಿಗೆ ಮತ್ತು ಮಂಗಳೂರು ಪೊಲೀಸ್ ಕಮಿಷನರ್ ಅವರಿಗೆ ಕಳುಹಿಸಿ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ನಿರ್ದೇಶಿಸಿದೆ.

ಪ್ರಕರಣದಲ್ಲಿ ಆರೋಪಿಯ ಪರವಾಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಮುಖ್ಯ ಕಾನೂನು ಅಭಿರಕ್ಷಕ(ಚೀಫ್ ಲೀಗಲ್ ಏಡ್ ಡಿಫೆನ್ಸ್ ಕೌನ್ಸಿಲ್) ನ್ಯಾಯವಾದಿ ಜಿ ವಾಸುದೇವ ಗೌಡ ಅವರು ವಾದಿಸಿದ್ದರು.

ಪ್ರಕರಣದ ಹಿನ್ನೆಲೆ

ಮೂಡಬಿದಿರೆ ತಾಲೂಕು ಶಿರ್ತಾಡಿ ಗ್ರಾಮದ ವಿದ್ಯಾನಗರ ಮಕ್ಕಿ ಎಂಬಲ್ಲಿ ಪ್ರಕರಣದ ಸಂತ್ರಸ್ತೆ ತನ್ನ ತಂದೆ, ತಾಯಿ ಹಾಗೂ ಒಬ್ಬ ಸಹೋದರನ ಜೊತೆ ವಾಸವಾಗಿದ್ದರು. ತಂದೆ-ತಾಯಿ ಕೂಲಿ ಕಾರ್ಮಿಕರಾಗಿದ್ದು, 2022ರ ಜುಲೈ 15ರಂದು ಸಂತ್ರಸ್ತೆಯು ಮಂಗಳೂರು ಮಹಿಳಾ ಪೊಲೀಸ್ ಠಾಣೆಯಲ್ಲಿ, ತನ್ನ ಮೇಲೆ ಅದೇ ಊರಿನ ಪ್ರಸಾದ್ ಎಂಬಾತ ಬಲಾತ್ಕಾರವಾಗಿ ಅತ್ಯಾಚಾರ ಮಾಡಿ ತಾನು ನಾಲ್ಕು ತಿಂಗಳ ಗರ್ಭಿಣಿಯಾಗಲು ಕಾರಣನಾಗಿದ್ದಾನೆಂದು ಪ್ರಸಾದ್ ವಿರುದ್ಧ ಅತ್ಯಾಚಾರ ಪ್ರಕರಣದ ದೂರು ದಾಖಲಿಸಿದ್ದರು.

ಮಂಗಳೂರು ಸರ್ಕಾರಿ ಲೇಡಿಗೋಷನ್ ಆಸ್ಪತ್ರೆಯಲ್ಲಿ ವೈದ್ಯರು ಸದರಿ ಸಂತ್ರಸ್ತೆಯನ್ನು ದಾಖಲಿಸಿ ಆರೈಕೆ ನೀಡಿದರು. ಬಳಿಕ, ಮಂಗಳೂರು ಜೆಎಂಎಫ್‌ಸಿ ನ್ಯಾಯಾಧೀಶರ ಮುಂದೆ ಸಂತ್ರಸ್ತೆ ಹೇಳಿಕೆ ಕೊಡುವಾಗಲೂ ತನ್ನ ದೂರಿನ ಅಂಶಗಳನ್ನೇ ಪುನರುಚ್ಚರಿಸಿದ್ದಳು. ಅದರಂತೆ ಮಂಗಳೂರು ಮಹಿಳಾ ಪೊಲೀಸರು ಪ್ರಸಾದ್ ಎಂಬಾತನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು.

ಮಹಿಳಾ ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಶ್ರೀಕಲಾ ಅವರು ಸಂತ್ರಸ್ತೆಯ ಮರು ಹೇಳಿಕೆಯನ್ನೂ ಪಡೆದುಕೊಂಡಿದ್ದರು. ಈ ಹೇಳಿಕೆಯಲ್ಲಿ ಸಂತ್ರಸ್ತೆ ತನ್ನ ಮೇಲೆ ಅತ್ಯಾಚಾರ ಎಸಗಿದ್ದು ಪ್ರಸಾದ್ ಅಲ್ಲ, ತನ್ನ ಮಾಲೀಕ ಸಂದೇಶ ಎಂದು ಸ್ಪಷ್ಟವಾಗಿ ಹೇಳಿದ್ದಳು. ಜೆಎಂಎಫ್‌ಸಿ ನ್ಯಾಯಾಲಯದಲ್ಲೂ ಸಾಕ್ಷ್ಯ ಹೇಳಿಕೆ ನೀಡುವಾಗ ಸಂದೇಶನಿಗೆ ಹೆದರಿ ಪ್ರಸಾದ್ ಹೆಸರನ್ನು ಹೇಳಿದ್ದಳು.

ಈ ಸುದ್ದಿ ಓದಿದ್ದೀರಾ? ರಾಮನಗರ | ಸಮವಸ್ತ್ರ ಧರಿಸಿ ಪೊಲೀಸರು ಹೆದ್ದಾರಿಯಲ್ಲಿ ಕಾಣಿಸಿಕೊಳ್ಳಬೇಕು: ಎಡಿಜಿಪಿ

2022ರ ಅಕ್ಟೋಬರ್‌ 10ರಂದು ಸಬ್ ಇನ್ಸ್‌ಪೆಕ್ಟರ್ ಶ್ರೀಕಲಾ‌ ಅವರು ಸಂತ್ರಸ್ತೆಯನ್ನು ಪುನಃ ವಿಚಾರಣೆಗೆ ಒಳಪಡಿಸಿದಾಗ, ಸಂತ್ರಸ್ತೆಯು ಹೇಳಿಕೆ ನೀಡಿ, ತನ್ನ ಮೇಲೆ ಅತ್ಯಾಚಾರ ಎಸಗಿದ್ದು ತನ್ನ ತಂದೆ ಚಂದ್ರಪ್ಪನೇ ಎಂದು ಹೇಳಿಕೆ ಬದಲಾಯಿಸಿದ್ದಾಳೆ. ಈ ಹೇಳಿಕೆಯ ಆಧಾರದಲ್ಲಿ ಅಕ್ಟೋಬರ್ 17ರಂದು ಆಕೆಯ ತಂದೆ ಚಂದ್ರಪ್ಪ ಅವರನ್ನು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು.

ಈ ಪ್ರಕರಣದ ವಿಚಾರಣಾಧಿಕಾರಿ ಆಗಿದ್ದ ಮಹಿಳಾ ಪೊಲೀಸ್ ಠಾಣೆಯ ಆಗಿನ ಸರ್ಕಲ್ ಇನ್ಸ್‌ಪೆಕ್ಟರ್ ಲೋಕೇಶ್ ಎ‌ ಸಿ ಅವರು ಆರೋಪಿ ಸಂದೇಶನ ಮೇಲೆ ಪ್ರಕರಣ ದಾಖಲಿಸದೇ ನಿರ್ಲಕ್ಷ್ಯ ತೋರಿದ್ದರು. ಯಾವುದೇ ದೂರುಗಳಿಲ್ಲದ ರತ್ನಪ್ಪ ಮತ್ತು ಸದರಿ ಆರೋಪಿಗಳಾದ ಚಂದ್ರಪ್ಪರ ರಕ್ತದ ಮಾದರಿಯನ್ನು ಡಿಎನ್ಎ ಪರೀಕ್ಷೆಗೆ ಒಳಪಡಿಸಲು ಬೆಂಗಳೂರಿನ ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಿದ್ದರು. ಆದರೆ, ಸಂದೇಶನ ರಕ್ತದ ಮಾದರಿಯನ್ನು ಡಿಎನ್ಎ ಪರೀಕ್ಷೆಗೆ ಒಳಪಡಿಸಿರಲಿಲ್ಲ ಎಂದು ಆರೋಪಿಸಲಾಗಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

Download Eedina App Android / iOS

X