ಪೂರಕ ಪೌಷ್ಟಿಕ ಆಹಾರ ಕಾರ್ಯಕ್ರಮ ಯೋಜನೆ ಅನುಷ್ಠಾನದ ಪ್ರಗತಿ ಬೇರೆ ಜಿಲ್ಲೆಗಳಿಗೆ ಹೋಲಿಸಿದರೆ ದಕ್ಷಿಣ ಕನ್ನಡ ಜಿಲ್ಲೆಯ ಪ್ರಗತಿ ತೀರಾ ಕಡಿಮೆ ಇದೆ. ಶೀಘ್ರವಾಗಿ ಪೌಷ್ಟಿಕ ಆಹಾರ ಪೂರೈಸುವ ಕಾರ್ಯಕ್ರಮದಲ್ಲಿ ಪ್ರಗತಿ ಸಾಧಿಸುವ ಕಡೆಗೆ ಹೆಚ್ಚು ಗಮನ ಕೊಡಬೇಕು ಹಾಗೂ ದಕ್ಷಿಣ ಕನ್ನಡವನ್ನು ಅಪೌಷ್ಟಿಕತೆ ಮುಕ್ತ ಜಿಲ್ಲೆಯನ್ನಾಗಿ ಮಾಡಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ. ಕೆ ಆನಂದ್ ಸೂಚಿಸಿದರು.
ಜಿಲ್ಲಾ ಪಂಚಾಯತ್ ಮಿನಿ ಸಭಾಂಗಣದಲ್ಲಿ ನಡೆದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, “ಜಿಲ್ಲೆಯಲ್ಲಿ ಒಟ್ಟು 20 ತೀವ್ರ ಅಪೌಷ್ಟಿಕತೆ ಹೊಂದಿರುವ ಮಕ್ಕಳಿದ್ದು, ಅವರ ಉತ್ತಮ ಆರೈಕೆಗಾಗಿ ಪೌಷ್ಟಿಕಾಂಶ ಪುನರ್ವಸತಿ ಕೇಂದ್ರ (ಎನ್.ಆರ್.ಸಿ)ಕ್ಕೆ ದಾಖಲಿಸಬೇಕು. ಮಕ್ಕಳಿಗೆ ಸೂಕ್ತವಾದ ಪೌಷ್ಟಿಕ ಆಹಾರ ನೀಡಿ ಆರೈಕೆ ಮಾಡುವುದರ ಜತೆಗೆ ಕೇಂದ್ರವನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು” ಎಂದು ಸೂಚಿಸಿದರು.
“3 ರಿಂದ 5 ವರ್ಷದ ಮಕ್ಕಳಿಗೆ ಪೂರ್ವ ಪ್ರಾಥಮಿಕ ಶಿಕ್ಷಣ ನೀಡಬೇಕು. ಶಾಲೆಗೆ ಹೋಗದಿರುವ ಮಕ್ಕಳಿಗೆ ಪೂರ್ವ ಪ್ರಾಥಮಿಕ ಶಿಕ್ಷಣ ದೊರಕಿಸುವ ಬಗ್ಗೆ ಮಹಿಳಾ ಸಭೆ, ಗ್ರಾಮ ಸಭೆಗಳಲ್ಲಿ ಚರ್ಚಿಸಬೇಕು. ಅಂಗನವಾಡಿ ಕಟ್ಟಡಗಳ ನಿರ್ವಹಣೆ ಯೋಜನೆ ಅಡಿಯಲ್ಲಿ ಅಂಗನವಾಡಿ ಕೇಂದ್ರಗಳ ದುರಸ್ತಿಯನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು” ಎಂದು ಕರ್ನಾಟಕ ರಾಜ್ಯ ಹ್ಯಾಬಿಟೇಟ್ ಕೇಂದ್ರದ ಅಧಿಕಾರಿಗಳಿಗೆ ಸೂಚಿಸಿದರು.
ಇದನ್ನೂ ಓದಿ: ಮಂಗಳೂರು | ಶಾಲಾ ಕಾಲೇಜುಗಳಲ್ಲಿ ಮಾದಕ ವ್ಯಸನದ ಜಾಗೃತಿ ಮೂಡಿಸಲು ಡಿಸಿ ಸೂಚನೆ
“ಅಂಗನವಾಡಿ ಕಟ್ಟಡ ಕಾಮಗಾರಿಯನ್ನು ಆಗಾಗ ಪರಿಶೀಲಿಸುತ್ತಿರಬೇಕು ಎಂದು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಿಗೆ ಸೂಚಿಸಿದ ಅವರು, ಜಿಲ್ಲೆಯಲ್ಲಿ ಒಟ್ಟು 2024 ರ ಜುಲೈನಿಂದ ಡಿಸೆಂಬರ್‌ವರೆಗೆ 2 ಬಾಲ್ಯ ವಿವಾಹ ಪ್ರಕರಣಗಳು ದಾಖಲಾಗಿದ್ದು, ಅವರ ವಿರುದ್ಧ ಕೇಸು ದಾಖಲಿಸಲಾಗಿದೆ. ಜಿಲ್ಲೆಯಲ್ಲಿ ಕಂಡುಬರುವ ಬಾಲ್ಯ ವಿವಾಹ, ಬಾಲ ಗರ್ಭಿಣಿಯರ ಪ್ರಕರಣಕ್ಕೆ ಸಂಬಂಧಿಸಿದಂತೆ ಅಗತ್ಯ ಕ್ರಮ ವಹಿಸಲು ಅವರು ಸೂಚಿಸಿದರು. ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕಡ್ಡಾಯವಾಗಿ ಕಾವಲು ಸಮಿತಿ ಸಭೆ ನಡೆಸಿ ಬಾಲ್ಯ ವಿವಾಹ ಮತ್ತು ಹದಿಹರೆಯದ ಗರ್ಭಧಾರಣೆ ಬಗ್ಗೆ ಚರ್ಚಿಸಿ ಅವುಗಳನ್ನು ತಡೆಯಲು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳು ಹೇಳಿದರು. ಬಾಲ್ಯ ವಿವಾಹ ಕಂಡು ಬಂದರೆ 1098 ಸಹಾಯವಾಣಿಗೆ ದೂರು ನೀಡಬೇಕು. ಬಾಲ್ಯ ವಿವಾಹ, ಹದಿಹರೆಯದ ಗರ್ಭಧಾರಣೆ ತಡೆಯಲು ಅರಿವು ಕಾರ್ಯಗಾರವನ್ನು ಮಾಡಬೇಕು” ಎಂದು ತಿಳಿಸಿದರು.
ಜಿಲ್ಲೆಯಲ್ಲಿ ಒಟ್ಟು 13 ವರದಕ್ಷಿಣೆ ಪ್ರಕರಣಗಳು ದಾಖಲಾಗಿದ್ದು, ಒಟ್ಟು 11 ಪ್ರಕರಣಗಳು ತನಿಖೆ ಹಂತದಲ್ಲಿದೆ. ತಾಯಂದಿರ ಸಭೆ, ಸ್ತ್ರೀ ಶಕ್ತಿ ಸಭೆ ಹಾಗೂ ಮಕ್ಕಳ ರಕ್ಷಣಾ ಸಮಿತಿ ಸಭೆಗಳಲ್ಲಿ ವರದಕ್ಷಿಣೆ ನಿಷೇಧ ಕಾಯ್ದೆಯ ಬಗ್ಗೆ ಸಾರ್ವಜನಿಕರಿಗೆ ಅರಿವು ಕಾರ್ಯಕ್ರಮ ಹಮ್ಮಿಕೊಳ್ಳಬೇಕು ಎಂದರು. ದಕ್ಷಿಣ ಕನ್ನಡ ಜಿಲ್ಲಾ ಬಾಲ ಭವನ ಕಟ್ಟಡದ ದುರಸ್ತಿ ಕಾರ್ಯವನ್ನು ಕೈಗೊಳ್ಳುವಂತೆ ಸೂಚಿಸಿದರು.
ಇದನ್ನೂ ಓದಿ: ಮಂಗಳೂರು | ರೈತರ ಹೆಸರಿನಲ್ಲಿ ಅಧಿಕಾರ ಪಡೆದವರು ಈಗ ಕಾರ್ಪೊರೇಟಿಗರ ಗುಲಾಮರು: ಯಾದವ ಶೆಟ್ಟಿ
ಸಭೆಯಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶೆ ಜೈಬುನ್ನಿಸಾ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಉಸ್ಮಾನ್, ಪ್ರಜ್ಞಾ ಕೌನ್ಸಿಲಿಂಗ್ ಸೆಂಟರ್‌ನ ಹಿಲ್ಡಾ ರಾಯಪ್ಪನ್, ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಸಂಧ್ಯಾ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಜ್ಯೋತಿ ಕೆ ಉಳೆಪಾಡಿ, ತಾಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಉಪಸ್ಥಿತರಿದ್ದರು.