ಸೂಕ್ಷ್ಮ ಮತ್ತು ಸಣ್ಣ ಉದ್ಯಮಗಳ ಸಮಸ್ಯೆಗಳನ್ನು ಪರಿಹರಿಸಿದಾಗ ಮಾತ್ರ ಕೈಗಾರಿಕಾ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿ ಸಾಧ್ಯ ಎಂದು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ.ಜಯಪ್ರಕಾಶ್ ಹೆಗ್ಡೆ ಹೇಳಿದರು.
ದಕ್ಷಿಣ ಕನ್ನಡ ಜಿಲ್ಲೆಯ ಬೈಕಂಪಾಡಿಯ ಕೆನರಾ ಇಂಡಸ್ಟ್ರೀಸ್ ಅಸೋಸಿಯೇಷನ್ ಸಭಾಂಗಣದಲ್ಲಿ ಶನಿವಾರ ನಡೆದ ಸೂಕ್ಷ್ಮ ಮತ್ತು ಸಣ್ಣ ಕೈಗಾರಿಕೆಗಳ ಆರ್ಥಿಕ ಸಾಕ್ಷರತೆ ಕುರಿತ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
“ಸೂಕ್ಷ್ಮ ಮತ್ತು ಸಣ್ಣ ಕೈಗಾರಿಕೆಗಳಿಗೆ ಆರ್ಥಿಕ ನೆರವು ನೀಡಿದಾಗ ಮತ್ತು ಅವರ ಸಮಸ್ಯೆಗಳನ್ನು ಪರಿಹರಿಸಿದಾಗ ಬೆಳೆಯಲು ಸಾಧ್ಯವಾಗುತ್ತದೆ. ಸಣ್ಣ ಕೈಗಾರಿಕೆಗಳ ಸಮಸ್ಯೆಗಳ ಬಗ್ಗೆ ಚರ್ಚಿಸಲು ಕೈಗಾರಿಕಾ ಸಚಿವರೊಂದಿಗೆ ಸಭೆ ನಡೆಸುತ್ತೇನೆ” ಎಂದು ಭರವಸೆ ನೀಡಿದರು.
“ಯುವಜನರು ಉದ್ಯೋಗ ಪಡೆಯುವತ್ತ ಮಾತ್ರ ಗಮನ ಹರಿಸದೆ ಕೈಗಾರಿಕೆಗಳನ್ನು ಸ್ಥಾಪಿಸುವತ್ತಲೂ ಹೆಜ್ಜೆ ಇಡಬೇಕು. ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘವನ್ನು (ಕಾಸಿಯಾ) ಶ್ಲಾಘಿಸಿದ ಹೆಗ್ಡೆ, ಸಂಘವು ಆಯೋಜಿಸಿರುವ ಕಾರ್ಯಕ್ರಮವು ಜಾಗೃತಿ ಮೂಡಿಸುವುದಲ್ಲದೆ, ಕೈಗಾರಿಕೆಗಳಿಗೆ ಬ್ಯಾಂಕುಗಳಿಂದ ಆರ್ಥಿಕ ನೆರವು ಪಡೆಯಲು ಸಹಾಯ ಮಾಡುತ್ತದೆ” ಎಂದು ಹೇಳಿದರು.
ಈ ಸುದ್ದಿ ಓದಿದ್ದೀರಾ? ದಕ್ಷಿಣ ಕನ್ನಡ | ಸಾಮಾಜಿಕ ಭದ್ರತಾ ಯೋಜನೆಗಳನ್ನು ತ್ವರಿತಗೊಳಿಸಬೇಕು; ಬ್ಯಾಂಕ್ಗಳಿಗೆ ಜಿಪಂ ಸಿಇಒ ಸೂಚನೆ
ಕಾಸಿಯಾ ಅಧ್ಯಕ್ಷ ಶಶಿಧರ್ ಶೆಟ್ಟಿ ಮಾತನಾಡಿ, “ಎಂಎಸ್ಎಂಇಗಳ ಉತ್ತೇಜನಕ್ಕಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಘೋಷಿಸಿದ ವಿವಿಧ ಯೋಜನೆಗಳು, ಸಬ್ಸಿಡಿಗಳ ಬಗ್ಗೆ ಅರಿವಿನ ಕೊರತೆಯಿದೆ. ಮಾರ್ಗದರ್ಶನ ಮತ್ತು ಅರಿವಿನ ಕೊರತೆಯಿಂದಾಗಿ ಹೆಚ್ಚಿನ ಯೋಜನೆಗಳು, ಸಬ್ಸಿಡಿಗಳು ಫಲಾನುಭವಿಗಳಿಗೆ ತಲುಪುತ್ತಿಲ್ಲ. ಎಂಎಸ್ಎಂಇಗಳ ಅಭಿವೃದ್ಧಿಗೆ ನಾವು ಈಗಾಗಲೇ 11 ಜಿಲ್ಲೆಗಳಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ನಡೆಸಿದ್ದೇವೆ” ಎಂದು ಹೇಳಿದರು.