ಬಾಲ್ಯದಿಂದಲೇ ಅನೇಕ ಸಮಸ್ಯೆಗಳನ್ನು ಎದುರಿಸುತ್ತಾ ಬಂದರೂ ಅವನ್ನು ಸವಾಲಾಗಿ ಸ್ವೀಕರಿಸಿ ಸಾಧನೆ ಮಾಡಿದ ಮಹಾನ್ ವ್ಯಕ್ತಿ ಡಾ. ಬಿ.ಆರ್. ಅಂಬೇಡ್ಕರ್ ಎಂದು ಲೋಕಸಭಾ ಸದಸ್ಯ ಕ್ಯಾ. ಬ್ರಿಜೇಶ್ ಚೌಟ ಹೇಳಿದರು.
ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಜಿಲ್ಲಾಡಳಿತ ವತಿಯಿಂದ ಆಯೋಜಿಸಿದ್ದ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ದೇಶದ ಆಡಳಿತ ವ್ಯವಸ್ಥೆಯಲ್ಲಿ ಮಹಿಳೆಯರು ಮತ್ತು ದುರ್ಬಲ ವರ್ಗದವರು ಸಮಾನವಾಗಿ ಭಾಗವಹಿಸಬೇಕೆಂಬುದು ಅಂಬೇಡ್ಕರ್ ಅವರ ಕನಸಾಗಿತ್ತು. ಈ ಕನಸನ್ನು ನನಸಾಗಿಸಲು ಕೇಂದ್ರ ಸರ್ಕಾರ ಬದ್ಧವಾಗಿದೆ ಎಂದು ಅವರು ಹೇಳಿದರು.
ವಿಧಾನಪರಿಷತ್ ಸದಸ್ಯ ಐವನ್ ಡಿಸೋಜಾ ಮಾತನಾಡಿ, ಸಂವಿಧಾನದ ಆಶಯಗಳಿಗೆ ಅನುಗುಣವಾಗಿ ಆಡಳಿತ ನಡೆಸುವುದು ಅತ್ಯಗತ್ಯವಾಗಿದೆ ಎಂದರು. ಅಂಬೇಡ್ಕರ್ ಅವರ ಚಿಂತನೆಗಳನ್ನು ಜನಸಾಮಾನ್ಯರಿಗೆ ತಲುಪಿಸಲು ಸರ್ಕಾರ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದೆ. ದೇಶದ ಪ್ರತಿಯೊಬ್ಬ ನಾಗರಿಕನಿಗೂ ಸಮಾನ ಮತದಾನದ ಹಕ್ಕು ನೀಡಿರುವುದು ಸಂವಿಧಾನದ ಮಹತ್ವದ ವೈಶಿಷ್ಟ್ಯ ಎಂದು ಹೇಳಿದರು.
ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ನಗರದಲ್ಲಿ ಅಂಬೇಡ್ಕರ್ ವೃತ್ತ ನಿರ್ಮಾಣ ಕಾರ್ಯವನ್ನು ಶೀಘ್ರ ಆರಂಭಿಸಬೇಕೆಂದು ಅವರು ಆಗ್ರಹಿಸಿದರು.
ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಅವರು ಸಂವಿಧಾನದ ಪೀಠಿಕೆಯನ್ನು ವಾಚಿಸಿದರು. ಮಂಗಳೂರು ವಿಶ್ವವಿದ್ಯಾಲಯದ ಉಪನ್ಯಾಸಕ ಮೋಹನ್ ಸಿಂಘೆ ಅವರು ಉಪನ್ಯಾಸ ನೀಡಿದರು.
ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ, ಮುಡಾ ಅಧ್ಯಕ್ಷ ಸದಾಶಿವ, ಪೊಲೀಸ್ ಆಯುಕ್ತ ಸುಧೀರ್ ರೆಡ್ಡಿ, ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್, ಉಪವಿಭಾಗಾಧಿಕಾರಿ ಮೀನಾಕ್ಷಿ ಆರ್ಯ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.
ಸಮಾಜ ಕಲ್ಯಾಣ ಇಲಾಖೆಯ ಪ್ರಭಾರ ಉಪನಿರ್ದೇಶಕ ಸುರೇಶ್ ಅಡಿಗ ಸ್ವಾಗತಿಸಿದರು. ಬಿಸಿಎಂ ಜಿಲ್ಲಾ ಅಧಿಕಾರಿ ಬಿಂದಿಯಾ ನಾಯಕ್ ವಂದಿಸಿದರು. ಪ್ರದೀಪ್ ಕಾರ್ಯಕ್ರಮ ನಿರೂಪಿಸಿದರು.





