ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರತದ ಚುನಾವಣಾ ಆಯೋಗದ ನಿರ್ದೇಶನದಂತೆ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆ ಜೂನ್ 30ರಿಂದ ಆರಂಭವಾಗಲಿದ್ದು, ಜುಲೈ 29ರವರೆಗೆ ಮತಗಟ್ಟೆ ಮಟ್ಟದ ಅಧಿಕಾರಿಗಳು (ಬಿಎಲ್ಒಗಳು) ಮನೆ ಮನೆಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಲಿದ್ದಾರೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ದರ್ಶನ್ ಎಚ್.ವಿ. ತಿಳಿಸಿದ್ದಾರೆ.
ಪಡೀಲ್ನ ಪ್ರಜಾ ಸೌಧದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜೂನ್ 1ನ್ನು ಅರ್ಹತಾ ದಿನಾಂಕವಾಗಿ ಪರಿಗಣಿಸಿ ರಾಜ್ಯಾದ್ಯಂತ ಎಸ್ಐಆರ್ ಪ್ರಕ್ರಿಯೆ ಆರಂಭಗೊಂಡಿದೆ ಎಂದರು. ಜಿಲ್ಲೆಯಲ್ಲಿ ಅಧಿಕಾರಿಗಳ ಸಿದ್ಧತೆ, ತರಬೇತಿ ಹಾಗೂ ಅಗತ್ಯ ದಾಖಲೆಗಳ ಮುದ್ರಣ ಕಾರ್ಯ ಜೂನ್ 20ರಿಂದ 29ರವರೆಗೆ ನಡೆಯಲಿದ್ದು, ಬಳಿಕ ಬಿಎಲ್ಒಗಳು ಒಂದು ತಿಂಗಳ ಕಾಲ ಮನೆ ಭೇಟಿಯ ಕಾರ್ಯ ನಡೆಸಲಿದ್ದಾರೆ. ಇದೇ ಅವಧಿಯಲ್ಲಿ ಮತಗಟ್ಟೆಗಳ ತಾರ್ಕಿಕ ಮರುಹೊಂದಾಣಿಕೆ ಕಾರ್ಯವೂ ಪೂರ್ಣಗೊಳ್ಳಲಿದೆ ಎಂದು ತಿಳಿಸಿದರು.
ಈ ಪ್ರಕ್ರಿಯೆಯಲ್ಲಿ ಅಪರ ಜಿಲ್ಲಾಧಿಕಾರಿ ಹೆಚ್ಚುವರಿ ಜಿಲ್ಲಾ ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸಲಿದ್ದಾರೆ. ಜಿಲ್ಲೆಯ ಎಂಟು ವಿಧಾನಸಭಾ ಕ್ಷೇತ್ರಗಳಿಗೆ 8 ಮತದಾರರ ನೋಂದಣಾಧಿಕಾರಿಗಳು (ಇಆರ್ಒ), 10 ಸಹಾಯಕ ಮತದಾರರ ನೋಂದಣಾಧಿಕಾರಿಗಳು (ಎಇಆರ್ಒ), 206 ಮತಗಟ್ಟೆ ಮಟ್ಟದ ಅಧಿಕಾರಿಗಳ ಮೇಲ್ವಿಚಾರಕರು ಹಾಗೂ 1,876 ಮತಗಟ್ಟೆ ಮಟ್ಟದ ಅಧಿಕಾರಿಗಳು ಭಾಗವಹಿಸಲಿದ್ದಾರೆ.
ಇದೇ ವೇಳೆ, ಈಗಾಗಲೇ ನಡೆದಿರುವ ಮತದಾರರ ಮ್ಯಾಪಿಂಗ್ ಪ್ರಕ್ರಿಯೆಯಲ್ಲಿ ಜಿಲ್ಲೆಯ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಂಖ್ಯೆಯ ಮತದಾರರು ಒಳಪಡುವುದಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ. ಬೆಳ್ತಂಗಡಿ ಕ್ಷೇತ್ರದಲ್ಲಿ 9,637, ಮೂಡಬಿದಿರೆ 20,128, ಮಂಗಳೂರು ಉತ್ತರ 50,558, ಮಂಗಳೂರು ದಕ್ಷಿಣ 63,853, ಮಂಗಳೂರು 25,042, ಬಂಟ್ವಾಳ 14,430, ಪುತ್ತೂರು 15,802 ಹಾಗೂ ಸುಳ್ಯ ಕ್ಷೇತ್ರದಲ್ಲಿ 7,016 ಮಂದಿ ಮತದಾರರು ಮ್ಯಾಪಿಂಗ್ ವ್ಯಾಪ್ತಿಯಿಂದ ಹೊರಗುಳಿದಿದ್ದಾರೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.






