ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನಕ್ಕೆ ಅವಕಾಶ ನೀಡುವ ಹಾಗೂ ಕಾನೂನುಬಾಹಿರವಾಗಿ ಸಿಗರೇಟ್, ತಂಬಾಕು ಉತ್ಪನ್ನಗಳ ಮಾರಾಟ ಮಾಡುವ ಅಂಗಡಿ, ಹೋಟೆಲ್, ಕೆಫೆ ಹಾಗೂ ಗೂಡಂಗಡಿಗಳ ವಿರುದ್ಧ ಜಂಟಿ ಕಾರ್ಯಾಚರಣೆ ಮತ್ತಷ್ಟು ತೀವ್ರಗೊಳಿಸುವಂತೆ ಅಪರ ಜಿಲ್ಲಾಧಿಕಾರಿ ಕೆ. ರಾಜು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, “ಜಿಲ್ಲೆಯಲ್ಲಿ ತಂಬಾಕು ನಿಯಂತ್ರಣ ಮಾಡಲು ನಿರಂತರವಾಗಿ ಕಾರ್ಯಾಚರಣೆ ನಡೆಸುತ್ತಿದ್ದರೂ ಸಹ, ಸಾರ್ವಜನಿಕ ಸ್ಥಳಗಳಲ್ಲಿ ಚಿಲ್ಲರೆಯಾಗಿ ಸಿಗರೇಟ್ ಮಾರಾಟ ಮಾಡುತ್ತಿರುವ ಹಾಗೂ ಹೋಟೆಲ್, ಕೆಫೆಗಳಲ್ಲಿ ಗ್ರಾಹಕರಿಗೆ ಧೂಮಪಾನ ಮಾಡಲು ಅವಕಾಶ ನೀಡುತ್ತಿರುವ ಕುರಿತು ಸಾರ್ವಜನಿಕರಿಂದ ವ್ಯಾಪಕ ದೂರುಗಳು ಬರುತ್ತಿವೆ. ಈ ನಿಟ್ಟಿನಲ್ಲಿ ಆರೋಗ್ಯ ಇಲಾಖೆ, ಪೊಲೀಸ್ ಇಲಾಖೆ ಹಾಗೂ ಸ್ಥಳೀಯ ಆಡಳಿತ ಸಂಸ್ಥೆಗಳು ಜಂಟಿಯಾಗಿ ದಿಢೀರ್ ದಾಳಿಗಳನ್ನು ನಡೆಸಬೇಕು” ಎಂದು ಸೂಚನೆ ನೀಡಿದರು.
“ಕೋಟ್ಪಾ (COTPA – ಸಿಗರೇಟ್ ಮತ್ತು ಇತರ ತಂಬಾಕು ಉತ್ಪನ್ನಗಳ ಕಾಯ್ದೆ) ನಿಯಮಗಳನ್ನು ಉಲ್ಲಂಘಿಸುವವರ ಲೈಸನ್ಸ್ ರದ್ದುಗೊಳಿಸುವುದು ಸೇರಿದಂತೆ ನಿರ್ದಾಕ್ಷಿಣ್ಯವಾಗಿ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು. ಸ್ಥಳೀಯ ಸಂಸ್ಥೆಗಳು ಇನ್ನು ಮುಂದೆ ಹೊಸದಾಗಿ ಅಂಗಡಿ ಮತ್ತು ಹೋಟೆಲ್‍ಗಳಿಗೆ ವ್ಯಾಪಾರ ಪರವಾನಗಿ ನೀಡುವಾಗ ಮತ್ತು ನವೀಕರಿಸುವಾಗ, ‘ಸಿಗರೇಟ್ ಹಾಗೂ ತಂಬಾಕು ಉತ್ಪನ್ನಗಳನ್ನು ಚಿಲ್ಲರೆಯಾಗಿ (ಬಿಡಿಬಿಡಿಯಾಗಿ) ಮಾರಾಟ ಮಾಡುವಂತಿಲ್ಲ’ ಎಂಬ ಶರತ್ತನ್ನು ವಿಧಿಸಿ ಪರವಾನಗಿ ನೀಡಬೇಕು” ಎಂದು ಅಪರ ಜಿಲ್ಲಾಧಿಕಾರಿಗಳು ನಿರ್ದೇಶನ ನೀಡಿದರು.
ಇದೇ ಸಂದರ್ಭದಲ್ಲಿ ತಂಬಾಕು ಮುಕ್ತ ಯುವ ಅಭಿಯಾನ 4.0 ಕ್ಕೆ ಅಪರ ಜಿಲ್ಲಾಧಿಕಾರಿಗಳು ಚಾಲನೆ ನೀಡಿದರು. ಈ ಅಭಿಯಾನ 60 ದಿನಗಳ ಕಾಲ ಜಿಲ್ಲೆಯ ಶಾಲೆ – ಕಾಲೇಜುಗಳಲ್ಲಿ ನಡೆಯಲಿದೆ.
ಸಭೆಯಲ್ಲಿ ಸಹಾಯಕ ಪೊಲೀಸ್ ಆಯುಕ್ತೆ ನಜ್ಮಾ ಫಾರೂಕಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಚ್.ಆರ್. ತಿಮ್ಮಯ್ಯ, ವೆನ್‍ಲಾಕ್ ಜಿಲ್ಲಾ ಆಸ್ಪತ್ರೆಯ ಅಧೀಕ್ಷಕ ಡಾ. ಶಿವಪ್ರಕಾಶ್, ಜಿಲ್ಲಾ ತಂಬಾಕು ನಿಯಂತ್ರಣ ಕಾರ್ಯಕ್ರಮ ಅಧಿಕಾರಿ ಡಾ. ನವೀನ್ ಚಂದ್ರ ಕುಲಾಲ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.




