ಮಂಗಳೂರು ವಿಮಾನ ನಿಲ್ದಾಣದಲ್ಲಿ ಟ್ಯಾಕ್ಸಿ ಮತ್ತು ಮ್ಯಾಕ್ಸಿ ಕ್ಯಾಬ್ ಗಳಿಂದ ಅತೀ ಹೆಚ್ಚಿನ ಶುಲ್ಕ ಪಡೆಯಲಾಗುತ್ತಿದ್ದು, ಅದನ್ನು ತಕ್ಷಣ ನಿಲ್ಲಿಸಬೇಕೆಂದು ಆಗ್ರಹಿಸಿ ದಕ್ಷಿಣ ಕನ್ನಡ ಜಿಲ್ಲಾ ಹಾಗೂ ಉಡುಪಿ ಜಿಲ್ಲಾ ಟ್ಯಾಕ್ಸಿ ಮೆನ್ಸ್ ಮತ್ತು ಮ್ಯಾಕ್ಸಿ ಕ್ಯಾಬ್ ಅಸೋಸಿಯೇಷನ್ ವತಿಯಿಂದ ಕೆಂಜಾರು ವಿಮಾನ ನಿಲ್ದಾಣದ ಗೇಟ್ ಬಳಿ ನಿರ್ಧಿಷ್ಠಾವಧಿ ಧರಣಿ ಸತ್ಯಾಗ್ರಹ ನಡೆಸಿದರು.
ಧರಣಿಯಲ್ಲಿ ಭಾಗವಹಿಸಿ ಮಾತನಾಡಿದ ಉಡುಪಿ ಜಿಲ್ಲಾ ಟ್ಯಾಕ್ಸಿ ಮೆನ್ಸ್ ಮತ್ತು ಮ್ಯಾಕ್ಸಿ ಕ್ಯಾಬ್ ಅಸೋಸಿಯೇಷನ್ ಅಧ್ಯಕ್ಷ ಮಾಜಿ ಶಾಸಕ ರಘುಪತಿ ಭಟ್, “ಮಂಗಳೂರು ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಅದಾನಿ ಸಂಸ್ಥೆ ಗುತ್ತಿಗೆಗೆ ಪಡೆದುಕೊಂಡ ಬಳಿಕ ಬಡ ಟ್ಯಾಕ್ಸಿ ಮತ್ತು ಮ್ಯಾಕ್ಸಿ ಕ್ಯಾಬ್ ಚಾಲಕರು ಮತ್ತು ಮಾಲಕರು ಸೇರಿದಂತೆ ಸಾರ್ವಜನಿಕರನ್ನೂ ಲೂಟಿಮಾಡಲು ಆರಂಭಿಸಿದೆ. ಸಂಸದರು ಶಾಸಕರು ಅದಾನಿ ಕಂಪೆನಿ ಜೊತೆ ಮಾತುಕತೆ ನಡೆಸಿದರೂ ಅವರ ಮಾತಿಗೂ ಬೆಲೆಕೊಡದೆ ನಮಗೆ ಅನ್ಯಾಯ ಮಾಡುತ್ತಿದ್ದಾರೆ” ಎಂದು ಆರೋಪಿಸಿದರು.
ಆಟೊ ರಿಕ್ಷಾ, ಮ್ಯಾಕ್ಸಿಕ್ಯಾಬ್, ಟ್ಯಾಕ್ಸಿಗಳಿಂದ ಅಧಿಕ ಶುಲ್ಕ ವಸೂಲಿ ಮಾಡುತ್ತಿರುವ ಅದಾನಿಯವರಿಗೆ ಬಡವರ ದುಡಿಮೆಯ ಹಣಬೇಕಾ ಎಂದು ಪ್ರಶ್ನೆ ಮಾಡಿದ ರಘುಪತಿಭಟ್, “ಬಡವರಿಗೆ ಸಹಾಯ ಮಾಡುವ ಬದಲು ಅವರನ್ನು ಶುಲ್ಕದ ಹೆಸರಿನಲ್ಲಿ ಸುಲಿಗೆ ಮಾಡುತ್ತಿದ್ದಾರೆ. ಈ ರೀತಿ ಸುಲಿಗೆ ಮಾಡುವ ಬದಲು ಅದಾನಿ ಭಿಕ್ಷೆ ಬೇಡಬಹುದು. ಇಲ್ಲಿನ ಟ್ಯಾಕ್ಸಿ, ಮ್ಯಾಕ್ಸಿಕ್ಯಾಬ್ ಮತ್ತು ಸಾರ್ವಜನಿಕರ ವಾಹನಗಳಿಗೆ ಕನಿಷ್ಠ 10 ನಿಮಿಷಗಳ ಕಾಲಾವಕಾಶ ನೀಡಬೇಕು. 10 ನಿಮಿಷಗಳ ಬಳಿಕ 100ರೂ. ವಸೂಲು ಮಾಡಬೇಕು” ಎಂದು ಆಗ್ರಹಿಸಿದರು.
ಧರಣಿಯಲ್ಲಿ ದ.ಕ. ಜಿಲ್ಲಾ ಟ್ಯಾಕ್ಸಿ ಮೆನ್ಸ್ ಮತ್ತು ಮ್ಯಾಕ್ಸಿ ಕ್ಯಾಬ್ ಅಸೋಸಿಯೇಷನ್ ಅಧ್ಯಕ್ಷ ಆನಂದ ಕೆ. ಅವರು, ದ.ಕ. ಜಿಲ್ಲಾ ಆನ್ ಲೈನ್ ಟ್ಯಾಕ್ಸಿ ಚಾಲಕ ಮಾಲಕರ ಸಂಘದ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಅಝೀಝ್, ಬಜ್ಪೆ ಪಟ್ಟಣ ಪಂಚಾಯತ್ ಅಧ್ಯಕ್ಷ ಲೋಕೇಶ್ ಪೂಜಾರಿ, ಮಾಜಿ ಶಾಸಕ ಮೊಯ್ದೀನ್ ಬಾವಾ ಸೇರಿದಂತೆ ದ.ಕ.- ಉಡುಪಿ ಜಿಲ್ಲೆಯ ವಿವಿಧ ಟ್ಯಾಕ್ಸಿ, ಮ್ಯಾಕ್ಸಿ ಕ್ಯಾಬ್ ಚಾಲಕ ಮಾಲಕರ ಸಂಘಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.




