ಸಹಕಾರ ಕ್ಷೇತ್ರದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ತಮ್ಮ ಅಸ್ತಿತ್ವ ಕಳೆದುಕೊಳ್ಳಬಾರದು. ಈ ಕ್ಷೇತ್ರದಲ್ಲಿ ಪಕ್ಷದ ಕಾರ್ಯಕರ್ತರು ಬಲವಾಗಿ ನೆಲೆಯೂರಲು ಸಂಘಟಿತವಾಗಿ ಕೆಲಸ ಮಾಡಬೇಕು. ಸಹಕಾರ ಸಂಘಗಳ ಸಭೆಗಳಲ್ಲಿ ಕನಿಷ್ಠ ಹಾಜರಾತಿ, ವಹಿವಾಟು ಕಡ್ಡಾಯ ಮಾಡಬೇಕೆಂದು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರಿಗೆ ಸಹಕಾರ ಸಚಿವ ಲಕ್ಷ್ಮಣ ಸವದಿ ಕರೆ ನೀಡಿದರು.
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಿದ ಸಚಿವ ಲಕ್ಷ್ಮಣ ಸವದಿ ಅವರನ್ನು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ ನೇತೃತ್ವದಲ್ಲಿ ಪಕ್ಷದ ಕಾರ್ಯಕರ್ತರು ಆತ್ಮೀಯವಾಗಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಪಕ್ಷದ ವತಿಯಿಂದ ಸಚಿವರನ್ನು ಸನ್ಮಾನಿಸಲಾಯಿತು.
ಈ ಸಂದರ್ಭ ಮಾತನಾಡಿದ ಸಚಿವ ಲಕ್ಷ್ಮಣ ಸವದಿ “ಈ ಹಿಂದೆ ಸಹಕಾರ ಸಚಿವನಾಗಿದ್ದಾಗ ಕೈಗೊಂಡ ಉತ್ತಮ ಕೆಲಸಗಳನ್ನು ಮುಂದುವರಿಸುವ ಉದ್ದೇಶದಿಂದ ಮುಖ್ಯಮಂತ್ರಿ ಅವರು ಮತ್ತೊಮ್ಮೆ ತಮ್ಮ ಸಂಪುಟದಲ್ಲಿ ಸಹಕಾರ ಇಲಾಖೆಯ ಜವಾಬ್ದಾರಿ ನೀಡಿದ್ದಾರೆ. ಮುಖ್ಯಮಂತ್ರಿಗಳ ನಿರೀಕ್ಷೆ ಹಾಗೂ ಪಕ್ಷ ನನ್ನ ಮೇಲಿಟ್ಟಿರುವ ಭರವಸೆಗೆ ತಕ್ಕಂತೆ ಕೆಲಸ ಮಾಡುತ್ತಿದ್ದೇನೆ” ಎಂದರು.
“ಗ್ರಾಮೀಣ ಪ್ರದೇಶದಿಂದಲೇ ಸಹಕಾರ ಕ್ಷೇತ್ರವನ್ನು ಬಲಪಡಿಸುವ ಕಾರ್ಯ ನಡೆಯುತ್ತಿದೆ. ಈ ಕ್ಷೇತ್ರದ ಅಭಿವೃದ್ಧಿಗೆ ಕಾಂಗ್ರೆಸ್ ಸಹಕಾರ ವಿಭಾಗದ ಮುಖಂಡರು ಮತ್ತು ಕಾರ್ಯಕರ್ತರ ಸಲಹೆಗಳನ್ನು ಬಯಸುತ್ತೇನೆ. ಸಹಕಾರ ಸಂಘಗಳ ಸದಸ್ಯರು ಸಭೆಗಳಲ್ಲಿ ಕನಿಷ್ಠ ಹಾಜರಾತಿ ಹೊಂದಿರುವುದರ ಜತೆಗೆ ನಿಯಮದಂತೆ ಕನಿಷ್ಠ ವಹಿವಾಟನ್ನೂ ನಡೆಸಬೇಕು. ಕಾರ್ಯಕರ್ತರು ಈ ನಿಯಮಗಳನ್ನು ಗಂಭೀರವಾಗಿ ಪರಿಗಣಿಸಬೇಕು” ಎಂದು ಸಲಹೆ ನೀಡಿದರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪದ್ಮರಾಜ್ ಪೂಜಾರಿ, ಮಾಜಿ ಸಚಿವ ಬಿ. ರಮಾನಾಥ ರೈ, ಮೆಸ್ಕಾಂ ಅಧ್ಯಕ್ಷರ ಹರೀಶ್ ಕುಮಾರ್, ಮೂಡ ಅಧ್ಯಕ್ಸರ ಸಂತೋಷ್ ಶೆಟ್ಟಿ, ಮಾಜಿ ಮೇಯರ್ ಶಶಿಧರ್ ಹೆಗ್ಡೆ, ಗ್ಯಾರಂಟಿ ಅನುಷ್ಠಾನ ಯೋಜನೆ ಜಿಲ್ಲಾಧ್ಯಕ್ಷ ಭರತ್ ಮುಂಡೋಡಿ, ಜಿಲ್ಲಾ ಕಾಂಗ್ರೆಸ್ ಸಹಕಾರ ಸಮಿತಿ ಅಧ್ಯಕ್ಷ ಸುದರ್ಶನ್ ಜೈನ್, ಜಿಲ್ಲಾ ಕಾಂಗ್ರೆಸ್ ನಾಯಕರಾದ ಶಾಲೆಟ್ ಪಿಂಟೋ, ವಿಶ್ವಶ್ ಕುಮಾರ್ ದಾಸ್, ಎಸ್ ಅಪ್ಪಿ ಹಾಗೂ ಇತರೆ ಕಾಂಗ್ರೆಸ್ ನಾಯಕರು ಇದ್ದರು.




