ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಕ್ಕಳ ಕಾಣೆಯಾದ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ ಯಾವುದೇ ವಿಳಂಬವಿಲ್ಲದೆ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಅಧಿಕಾರಿಗಳಿಗೆ ಸೂಚಿಸಿದರು.
ಸೋಮವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಜಿಲ್ಲಾ ಮಕ್ಕಳ ಕಲ್ಯಾಣ ಹಾಗೂ ರಕ್ಷಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕಳೆದ ಒಂದು ವರ್ಷದಲ್ಲಿ ಜಿಲ್ಲೆಯಲ್ಲಿ 86 ಮಕ್ಕಳು ಕಾಣೆಯಾದ ಕುರಿತು ವಿವಿಧ ಪೊಲೀಸ್ ಠಾಣೆಗಳಲ್ಲಿ ಪ್ರಕರಣಗಳು ದಾಖಲಾಗಿದ್ದು, ಈ ಪೈಕಿ 79 ಮಕ್ಕಳು ಪತ್ತೆಯಾಗಿದ್ದಾರೆ. ಉಳಿದ ಮಕ್ಕಳನ್ನು ಶೀಘ್ರ ಪತ್ತೆಹಚ್ಚಲು ಹೆಚ್ಚಿನ ಒತ್ತು ನೀಡಬೇಕು ಎಂದು ತಿಳಿಸಿದರು.
ಜಿಲ್ಲೆಯಲ್ಲಿ ಬಾಲ ನ್ಯಾಯ ಕಾಯ್ದೆಯಡಿ ನೋಂದಣಿಯಾಗಿರುವ ಅನಾಥಾಲಯಗಳು, ವಿಶೇಷ ಮಕ್ಕಳ ಸಂಸ್ಥೆಗಳು ಹಾಗೂ ನಿರ್ಗತಿಕ ಮಕ್ಕಳ ಸಂಸ್ಥೆಗಳು ಸೇರಿ 69 ಮಕ್ಕಳ ಪಾಲನಾ ಸಂಸ್ಥೆಗಳಲ್ಲಿ 2,581 ಮಕ್ಕಳು ಶಿಕ್ಷಣ ಪಡೆಯುತ್ತಿದ್ದಾರೆ. ಈ ಸಂಸ್ಥೆಗಳಿಗೆ ಅಧಿಕಾರಿಗಳು ನಿಯಮಿತವಾಗಿ ಭೇಟಿ ನೀಡಿ, ಕಟ್ಟಡಗಳ ಸುರಕ್ಷತೆ, ಗಾಳಿ-ಬೆಳಕಿನ ವ್ಯವಸ್ಥೆ ಹಾಗೂ ಮಕ್ಕಳಿಗೆ ಒದಗಿಸಲಾಗುತ್ತಿರುವ ಆಹಾರದ ಗುಣಮಟ್ಟವನ್ನು ಪರಿಶೀಲಿಸಬೇಕು ಎಂದು ಸೂಚಿಸಿದರು.
ಸಂಕಷ್ಟದಲ್ಲಿರುವ ಮತ್ತು ತೊಂದರೆಗೀಡಾದ ಮಕ್ಕಳಿಗೆ 24 ಗಂಟೆಗಳ ಉಚಿತ ಹಾಗೂ ತುರ್ತು ಸೇವೆ ನೀಡುವ ಮಕ್ಕಳ ಸಹಾಯವಾಣಿ 1098 ಸಂಖ್ಯೆಯನ್ನು ಜಿಲ್ಲೆಯ ಎಲ್ಲ ಶಾಲೆಗಳಲ್ಲಿ ಪ್ರದರ್ಶಿಸಲು ಕ್ರಮ ಕೈಗೊಳ್ಳಬೇಕು. ಮಕ್ಕಳ ಸಹಾಯವಾಣಿಗೆ ಬಂದ ದೂರುಗಳನ್ನು ಗಂಭೀರವಾಗಿ ಪರಿಗಣಿಸಬೇಕು. ಕಳೆದ ಒಂದು ವರ್ಷದಲ್ಲಿ ಮಕ್ಕಳ ಸಹಾಯವಾಣಿಗೆ 763 ಪ್ರಕರಣಗಳು ದಾಖಲಾಗಿವೆ ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದರು.
ತಾಲೂಕು ಹಾಗೂ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಮಕ್ಕಳ ರಕ್ಷಣಾ ಸಮಿತಿಗಳ ಸಭೆಗಳನ್ನು ನಿರಂತರವಾಗಿ ನಡೆಸಿ, ಮಕ್ಕಳ ಸುರಕ್ಷತೆ ಕುರಿತ ಜಾಗೃತಿ ಮೂಡಿಸುವ ಕಾರ್ಯಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಅವರು ಹೇಳಿದರು.





