ಮಾಣಿ ಸಮೀಪ ಸೋಮವಾರ ಸಂಭವಿಸಿದ ರಸ್ತೆ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರರೊಬ್ಬರು ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ಪುತ್ತೂರಿನ ಕಲ್ಲರ್ಪೆ ನಿವಾಸಿ ಕಲಂದರ್ ಶಾ ಎಂದು ಗುರುತಿಸಲಾಗಿದೆ.
ಕಲ್ಲಡ್ಕದಿಂದ ಪುತ್ತೂರಿನತ್ತ ತೆರಳುತ್ತಿದ್ದ ದ್ವಿಚಕ್ರ ವಾಹನವು ಲಾರಿಯ ಹಿಂಭಾಗಕ್ಕೆ ಢಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಕಲಂದರ್ ಶಾ ಅವರನ್ನು ತಕ್ಷಣ ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಮಾರ್ಗ ಮಧ್ಯೆಯೇ ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಮೂಲತಃ ಸುಳ್ಯ ನಿವಾಸಿಯಾಗಿದ್ದ ಅವರು, ಪ್ರಸ್ತುತ ಪುತ್ತೂರಿನ ಕಲ್ಲರ್ಪೆಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದು, ಮಂಗಳೂರು ಧಕ್ಕೆಯಲ್ಲಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ಮೃತರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.





