ಬಂಟ್ವಾಳ ತಾಲೂಕಿನ ಬಿ.ಸಿ.ರೋಡ್ ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಬಳಿ ಗುರುವಾರ ಸಂಜೆ ನಡೆದ ಭೀಕರ ಘಟನೆಯಲ್ಲಿ ಯುವತಿಯೊಬ್ಬಳು ಮಾರಕಾಸ್ತ್ರದ ದಾಳಿಗೆ ಬಲಿಯಾಗಿದ್ದಾರೆ. ಕಕ್ಯಪದವು ನಿವಾಸಿ ಲಾವಣ್ಯ (21) ಮೃತ ಯುವತಿ ಎಂದು ಗುರುತಿಸಲಾಗಿದೆ.
ಮಾಹಿತಿಯ ಪ್ರಕಾರ, ಲಾವಣ್ಯ ಅವರು ಬಸ್ಗಾಗಿ ಕಾಯುತ್ತಿದ್ದ ವೇಳೆ ಯುವಕನೊಬ್ಬ ಏಕಾಏಕಿ ಬಂದು ಚಾಕುವಿನಿಂದ ದಾಳಿ ನಡೆಸಿದ್ದಾನೆ. ಗಂಭೀರವಾಗಿ ಗಾಯಗೊಂಡ ಯುವತಿಯನ್ನು ಸ್ಥಳದಲ್ಲಿದ್ದ ಸಾರ್ವಜನಿಕರು ತಕ್ಷಣ ಬಂಟ್ವಾಳ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದರೂ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಘಟನಾ ಸ್ಥಳಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕೆ. ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ಯುವತಿ ಬಸ್ಗಾಗಿ ಕಾಯುತ್ತಿದ್ದ ಸಂದರ್ಭದಲ್ಲಿ ಯುವಕನೊಬ್ಬ ಚಾಕುವಿನಿಂದ ಹಲ್ಲೆ ನಡೆಸಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಘಟನೆಗೆ ಸಂಬಂಧಿಸಿ ವಿಶೇಷ ತನಿಖಾ ತಂಡಗಳನ್ನು ರಚಿಸಲಾಗಿದ್ದು, ಆರೋಪಿಯನ್ನು ಶೀಘ್ರದಲ್ಲೇ ಬಂಧಿಸಲಾಗುವುದು,” ಎಂದು ತಿಳಿಸಿದ್ದಾರೆ.
ಪ್ರಾಥಮಿಕ ತನಿಖೆಯಲ್ಲಿ ಆರೋಪಿಯನ್ನು ಚೇತನ್ ಎಂದು ಗುರುತಿಸಲಾಗಿದ್ದು, ಆತ ಮೃತ ಯುವತಿಯ ದೂರದ ಸಂಬಂಧಿ ಎಂಬ ಮಾಹಿತಿ ಪೊಲೀಸ್ ಮೂಲಗಳಿಂದ ತಿಳಿದುಬಂದಿದೆ. ಆರೋಪಿಯು ಲಾವಣ್ಯ ಅವರನ್ನು ಏಕಮುಖವಾಗಿ ಪ್ರೀತಿಸುತ್ತಿದ್ದ ಎನ್ನಲಾಗಿದ್ದು, ಇದೇ ವಿಚಾರದಿಂದ ಕೃತ್ಯ ನಡೆದಿರುವ ಶಂಕೆ ವ್ಯಕ್ತವಾಗಿದೆ.
ಘಟನೆಯಿಂದ ಬಿ.ಸಿ.ರೋಡ್ ಪ್ರದೇಶದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಪೊಲೀಸರು ಸ್ಥಳದಲ್ಲಿ ಬಿಗಿ ಬಂದೋಬಸ್ತ್ ಕೈಗೊಂಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಯ ಬಂಧನಕ್ಕಾಗಿ ತೀವ್ರ ಶೋಧ ಕಾರ್ಯ ಮುಂದುವರಿಸಿದ್ದಾರೆ.





