ಧರ್ಮಸ್ಥಳದಲ್ಲಿ ನಡೆದ ಕಾಲೇಜು ವಿದ್ಯಾರ್ಥಿನಿ ಸೌಜನ್ಯ ಕೊಲೆ ಪ್ರಕರಣದ ಮರುತನಿಖೆಯನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ) ಚುರುಕುಗೊಳಿಸಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಸೌಜನ್ಯ ಅವರ ತಾಯಿ ಕುಸುಮಾವತಿ ಅವರ ರಕ್ತದ ಮಾದರಿಯನ್ನು ಸಂಗ್ರಹಿಸಲಾಗಿದೆ.
ಮಂಗಳೂರು ಎಸ್‌ಐಟಿ ಕಚೇರಿಯಿಂದ ಪ್ರಕರಣದ ತನಿಖಾಧಿಕಾರಿ ಲೋಕೇಶ್ ಪಿ. ಜಗಲಾಸರ್ ಹಾಗೂ ಎಸಿಪಿ ಮನೋಜ್ ಕುಮಾರ್ ನಾಯಕ್ ನೇತೃತ್ವದ ತಂಡ ಅಕ್ಟೋಬರ್ 23ರಂದು ಸಂಜೆ 4.30ಕ್ಕೆ ಪ್ರಿಂಟರ್ ಮತ್ತು ಲ್ಯಾಪ್‌ಟಾಪ್ ಸಹಿತ ಬೆಳ್ತಂಗಡಿ ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಆಗಮಿಸಿತು.
ಬಳಿಕ ಇಬ್ಬರು ಸರಕಾರಿ ಪಂಚರ ಸಮಕ್ಷಮದಲ್ಲಿ ನ್ಯಾಯಾಧೀಶ ಶಶಾಂಕ್ ನಾಗೇಂದ್ರ ಭಟ್ ಅವರ ಮುಂದೆ ಸೌಜನ್ಯ ಅವರ ತಾಯಿ ಕುಸುಮಾವತಿ ಅವರ ರಕ್ತದ ಮಾದರಿಯನ್ನು ಸಂಗ್ರಹಿಸುವ ಪ್ರಕ್ರಿಯೆ ನಡೆಯಿತು.
ಬೆಳ್ತಂಗಡಿ ತಾಲೂಕು ಸರಕಾರಿ ಆಸ್ಪತ್ರೆಯ ವೈದ್ಯೆ ಆಶಾ ಲತಾ ಅವರ ನೇತೃತ್ವದಲ್ಲಿ ರಕ್ತದ ಮಾದರಿ ಸಂಗ್ರಹ ಕಾರ್ಯ ನಡೆಸಲಾಯಿತು. ಪ್ರಕರಣದ ಮರುತನಿಖೆಯ ಭಾಗವಾಗಿ ಈ ಪ್ರಕ್ರಿಯೆ ಕೈಗೊಳ್ಳಲಾಗಿದೆ.
ಸುಪ್ರೀಂ ಕೋರ್ಟ್‌ನ ಮರುತನಿಖೆ ಆದೇಶದ ಹಿನ್ನೆಲೆಯಲ್ಲಿ ಎಸ್‌ಐಟಿ ಅಧಿಕಾರಿಗಳು ತನಿಖಾ ಪ್ರಕ್ರಿಯೆಯನ್ನು ಚುರುಕುಗೊಳಿಸಿದ್ದು, ಪ್ರಕರಣಕ್ಕೆ ಸಂಬಂಧಿಸಿದ ಮುಂದಿನ ತನಿಖೆಯ ಮೇಲೆ ಗಮನ ನೆಟ್ಟಿದೆ.






