ಯುವತಿಯೊಬ್ಬರಿಗೆ ಅಶ್ಲೀಲ ಸಂದೇಶ ಕಳುಹಿಸಿದ ಆರೋಪಕ್ಕೆ ಗುರಿಯಾಗಿರುವ ದಾಂಡೇಲಿ ನಗರ ಪೊಲೀಸ್ ಠಾಣೆಯ ಕಾನ್ಸ್ಟೇಬಲ್ ಮಾಂತೇಶ್ ಅವರನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಅಮಾನತುಗೊಳಿಸಿದ ಬೆನ್ನಲ್ಲೇ, ಪ್ರಕರಣದ ತನಿಖೆ ವೇಗ ಪಡೆದುಕೊಂಡಿದೆ.
ಈ ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ, ಕಾರವಾರದ ಹಿರಿಯ ಪೊಲೀಸ್ ಅಧಿಕಾರಿಗಳ ತಂಡವು ಶನಿವಾರ ದಾಂಡೇಲಿಗೆ ಭೇಟಿ ನೀಡಿತು. ದೂರುದಾರ ಯುವತಿಯ ಸಮ್ಮುಖದಲ್ಲಿಯೇ ಘಟನಾ ಸ್ಥಳದ ಮಹಜರು ನಡೆಸಿದ ಅಧಿಕಾರಿಗಳು, ಪ್ರಕರಣಕ್ಕೆ ಸಂಬಂಧಿಸಿದ ಅಗತ್ಯ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿದರು.
ಈ ಸುದ್ದಿ ಓದಿದ್ದೀರಾ? ಹಳಿಯಾಳ | ಸಿದ್ದಿ ಸಮುದಾಯದ ಯುವತಿಯರ ರಾಷ್ಟ್ರೀಯ ಸಾಧನೆ; ಶಾಲಿನಾಗೆ ಬೆಳ್ಳಿ, ಪ್ರಿನ್ಸಿಟಾಗೆ ಕಂಚು
ಘಟನೆಯ ಪ್ರತಿಯೊಂದು ಮಗ್ಗುಲನ್ನೂ ಪರಿಶೀಲಿಸುತ್ತಿರುವ ತನಿಖಾ ತಂಡ, ಈವರೆಗೆ ದೊರೆತ ದಾಖಲೆಗಳನ್ನು ವಶಕ್ಕೆ ಪಡೆದುಕೊಂಡಿದೆ. ಅಲ್ಲದೆ, ಇದೇ ಪ್ರಕರಣದ ವಿಚಾರವಾಗಿ ಮತ್ತೊಬ್ಬ ಕಾನ್ಸ್ಟೇಬಲ್ ಇಮ್ರಾನ್ ಅವರ ಪಾತ್ರದ ಬಗ್ಗೆಯೂ ಅಧಿಕಾರಿಗಳು ಸೂಕ್ಷ್ಮವಾಗಿ ತನಿಖೆಯನ್ನು ಮುಂದುವರಿಸಿದ್ದಾರೆ.
ಇಮ್ರಾನ್ ಅವರ ವಿರುದ್ಧ ಕೇಳಿಬಂದಿರುವ ಆರೋಪಗಳ ಕುರಿತು ಮಾಹಿತಿ ಹಾಗೂ ಸಾಕ್ಷ್ಯಗಳನ್ನು ಕಲೆಹಾಕಲಾಗುತ್ತಿದ್ದು, ತನಿಖಾ ವರದಿಯ ಆಧಾರದ ಮೇಲೆ ಮುಂದಿನ ಕಾನೂನು ಕ್ರಮ ಕೈಗೊಳ್ಳಲು ಸಿದ್ಧತೆ ನಡೆಸಲಾಗಿದೆ. ಈ ಘಟನೆಯು ಸ್ಥಳೀಯವಾಗಿ ಮತ್ತು ಪೊಲೀಸ್ ಇಲಾಖೆಯಲ್ಲಿ ಸಾಕಷ್ಟು ಚರ್ಚೆಗೆ ಕಾರಣವಾಗಿದೆ. ನಿಷ್ಪಕ್ಷಪಾತ ತನಿಖೆಯಾಗಬೇಕು ಮತ್ತು ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು ಎಂಬ ಒತ್ತಾಯ ಸಾರ್ವಜನಿಕರಿಂದ ವ್ಯಕ್ತವಾಗಿದೆ.
ಇತ್ತೀಚಿನ ಮಾಹಿತಿ ಪ್ರಕಾರ, ದೂರುದಾರ ಯುವತಿಯ ಮೇಲೆ ದೂರು ಹಿಂಪಡೆಯುವಂತೆ ಒತ್ತಡ ಹೇರಲಾಗುತ್ತಿದೆ ಎಂಬ ಗಂಭೀರ ಆರೋಪವೂ ಕೇಳಿಬಂದಿದೆ. ತನಿಖೆ ಪ್ರಗತಿಯಲ್ಲಿದ್ದು, ಮುಂಬರುವ ದಿನಗಳಲ್ಲಿ ಇನ್ನಷ್ಟು ಸಂಗತಿಗಳು ಹೊರಬರುವ ಸಾಧ್ಯತೆಯಿದೆ.




