ದಾಂಡೇಲಿ: ನಗರದ ಸ್ವಚ್ಛತೆ ಮತ್ತು ಸಾರ್ವಜನಿಕ ಆರೋಗ್ಯ ಕಾಪಾಡುವಲ್ಲಿ ನಿರಂತರವಾಗಿ ಶ್ರಮಿಸುತ್ತಿರುವ ಪೌರ ಕಾರ್ಮಿಕರ ಸುರಕ್ಷತೆ ಹಾಗೂ ಆರೋಗ್ಯ ರಕ್ಷಣೆಗೆ ಆದ್ಯತೆ ನೀಡಿರುವ ನಗರಸಭೆಯು ಅವರಿಗೆ ಸಮವಸ್ತ್ರ ಹಾಗೂ ಅಗತ್ಯ ಸುರಕ್ಷತಾ ಪರಿಕರಗಳನ್ನು ವಿತರಿಸಿದೆ.
ನಗರಸಭೆ ಪೌರಾಯುಕ್ತ ವಿವೇಕ ಬನ್ನೆ ಅವರ ನೇತೃತ್ವದಲ್ಲಿ ಆರೋಗ್ಯ ನಿರೀಕ್ಷಕ ವಿಲಾಸ ಕುಮಾರ ಅವರು ಪೌರ ಕಾರ್ಮಿಕರಿಗೆ ಸಮವಸ್ತ್ರ, ಕೈಗವಸು, ಮುಖಗವಸು, ಸುರಕ್ಷತಾ ಬೂಟು ಸೇರಿದಂತೆ ವಿವಿಧ ಸುರಕ್ಷತಾ ಸಾಮಗ್ರಿಗಳನ್ನು ವಿತರಿಸಿದರು. ಪ್ರತಿದಿನ ನಗರದ ವಿವಿಧ ಪ್ರದೇಶಗಳಲ್ಲಿ ಸ್ವಚ್ಛತಾ ಕಾರ್ಯದಲ್ಲಿ ತೊಡಗಿರುವ ಪೌರ ಕಾರ್ಮಿಕರು ಧೂಳು, ತ್ಯಾಜ್ಯ ಹಾಗೂ ಆರೋಗ್ಯಕ್ಕೆ ಹಾನಿಕಾರಕ ಪರಿಸರದಲ್ಲಿ ಕೆಲಸ ನಿರ್ವಹಿಸಬೇಕಾಗಿರುವುದರಿಂದ, ಅವರ ಆರೋಗ್ಯದ ದೃಷ್ಟಿಯಿಂದ ಸುರಕ್ಷತಾ ಪರಿಕರಗಳ ಬಳಕೆ ಅತ್ಯಗತ್ಯವಾಗಿದೆ ಎಂದು ಅಧಿಕಾರಿಗಳು ತಿಳಿಸಿದರು.
ಈ ಸುದ್ದಿ ಓದಿದ್ದೀರಾ? ಸಚಿವರ ಹೆಜ್ಜೆ ಗುರುತು ಕಾಣದ ಉತ್ತರ ಕನ್ನಡ: ಆಡಳಿತದ ಅಂತರವೇ ಅಭಿವೃದ್ಧಿಗೆ ಅಡ್ಡಿ
ನಗರಸಭೆಯ ನಿರ್ದೇಶನದಂತೆ, ಇನ್ನು ಮುಂದೆ ಎಲ್ಲಾ ಪೌರ ಕಾರ್ಮಿಕರು ಸಮವಸ್ತ್ರ ಹಾಗೂ ಸುರಕ್ಷತಾ ಉಪಕರಣಗಳನ್ನು ಕಡ್ಡಾಯವಾಗಿ ಧರಿಸಿಕೊಂಡೇ ಕರ್ತವ್ಯ ನಿರ್ವಹಿಸಬೇಕು. ನಿಯಮ ಪಾಲಿಸದೆ ಕೆಲಸಕ್ಕೆ ಹಾಜರಾಗುವ ಸಿಬ್ಬಂದಿ ವಿರುದ್ಧ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.
ಪೌರ ಕಾರ್ಮಿಕರ ಆರೋಗ್ಯ ಮತ್ತು ಸುರಕ್ಷತೆಯ ವಿಚಾರದಲ್ಲಿ ಯಾವುದೇ ರೀತಿಯ ನಿರ್ಲಕ್ಷ್ಯಕ್ಕೆ ಅವಕಾಶ ನೀಡುವುದಿಲ್ಲ. ಸುರಕ್ಷತಾ ಸಾಧನಗಳನ್ನು ಬಳಸದೆ ಕರ್ತವ್ಯಕ್ಕೆ ಬರುವ ಸಿಬ್ಬಂದಿಯನ್ನು ವಾಪಸ್ ಕಳುಹಿಸುವ ಕ್ರಮವನ್ನೂ ಅನುಸರಿಸಲಾಗುವುದು ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದರು.
ನಗರಸಭೆಯ ಈ ಕ್ರಮವು ಪೌರ ಕಾರ್ಮಿಕರ ಆರೋಗ್ಯ ರಕ್ಷಣೆಗೆ ನೆರವಾಗುವುದರ ಜೊತೆಗೆ, ಸ್ವಚ್ಛತಾ ಕಾರ್ಯದಲ್ಲಿ ಶಿಸ್ತು, ವೃತ್ತಿಪರತೆ ಹಾಗೂ ಕಾರ್ಯಕ್ಷಮತೆಯನ್ನು ಹೆಚ್ಚಿಸಲು ಸಹಕಾರಿಯಾಗಲಿದೆ ಎಂಬ ಅಭಿಪ್ರಾಯ ವ್ಯಕ್ತವಾಗಿದೆ. ಪೌರ ಕಾರ್ಮಿಕರ ಕಲ್ಯಾಣಕ್ಕೆ ಆದ್ಯತೆ ನೀಡಿರುವ ನಗರಸಭೆಯ ಕ್ರಮಕ್ಕೆ ಸಾರ್ವಜನಿಕ ವಲಯದಿಂದ ಮೆಚ್ಚುಗೆ ವ್ಯಕ್ತವಾಗಿದೆ.




