ವೈದ್ಯಕೀಯ ವಿದ್ಯಾರ್ಥಿನಿ ಅತ್ಯಾಚಾರ, ಕೊಲೆ ಖಂಡಿಸಿ ಭಾರತೀಯ ವೈದ್ಯಕೀಯ ಸಂಘ(ಐಎಂಎ) ಕರೆ ನೀಡಿದ್ದ 24 ಗಂಟೆಗಳ ರಾಷ್ಟ್ರವ್ಯಾಪಿ ವೈದ್ಯರ ಮುಷ್ಕರಕ್ಕೆ ದಾವಣಗೆರೆ ಜಿಲ್ಲೆಯ ಎಲ್ಲ ವೈದ್ಯರು ಬೆಂಬಲ ನೀಡಿ ಪ್ರತಿಭಟನೆ ನಡೆಸಿದರು.
ಕೋಲ್ಕತ್ತಾದ ಆರ್ ಜಿ ಕರ್ ಆಸ್ಪತ್ರೆಯಲ್ಲಿ ವೈದ್ಯಕೀಯ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ಎಸಗಿ ಕೊಲೆ ನಡೆಸಿರುವುದನ್ನು ಖಂಡಿಸಿ ಭಾನುವಾರ ಬೆಳಿಗ್ಗೆ 6 ಗಂಟೆಯಿಂದಲೇ ವೈದ್ಯರು ಮುಷ್ಕರಕ್ಕೆ ಮುಂದಾದರು. ಈ ಹಿನ್ನೆಲೆಯಲ್ಲಿ ಆಸ್ಪತ್ರೆಗಳಲ್ಲಿ ತುರ್ತು ಸೇವೆಗಳನ್ನು ಹೊರತುಪಡಿಸಿದರೆ ಯಾವುದೇ ಸೇವೆ ಲಭ್ಯವಿರಲಿಲ್ಲ. ಎಲ್ಲ ವೈದ್ಯರು ಆಸ್ಪತ್ರೆಯ ಹೊರರೋಗಿಗಳ ಸೇವೆ ಸ್ಥಗಿತಗೊಳಿಸಿ ಬಂದ್‌ಗೆ ಬೆಂಬಲ ನೀಡಿದರು.
ದಾವಣಗೆರೆ ನಗರದ ಜಿಲ್ಲಾಸ್ಪತ್ರೆ, ಖಾಸಗಿ ಆಸ್ಪತ್ರೆಗಳಲ್ಲಿಯೂ ಕೂಡ ಬಂದ್‌ನ ಬ್ಯಾನರ್‌ಗಳು ಕಂಡುಬಂದಿದ್ದು, ರೋಗಿಗಳು ಚಿಕಿತ್ಸೆಗೆ ಪರದಾಟ ನೆಡೆಸಿದರು. ಭಾರತೀಯ ವೈದ್ಯಕೀಯ ಸಂಘದ ಮುಷ್ಕರಕ್ಕೆ ರಾಜ್ಯದ ಐಎಂಎ ಘಟಕವೂ ಬೆಂಬಲ ವ್ಯಕ್ತಪಡಿಸಿದ ಹಿನ್ನೆಯಲ್ಲಿ ದಾವಣಗೆರೆಯಲ್ಲಿ ಸರ್ಕಾರಿ ವೈದ್ಯರುಗಳೂ ಕೂಡಾ ಮುಷ್ಕರಕ್ಕೆ ಬೆಂಬಲ ನೀಡಿದ ಕಾರಣ ಜಿಲ್ಲೆಯ ಎಲ್ಲ ಸರ್ಕಾರಿ ಆಸ್ಪತ್ರೆಗಳ ವೈದ್ಯರು ಓಪಿಡಿ ಬಂದ್ ಮಾಡಿ ಮುಷ್ಕರ ನಡೆಸಿದರು. ಖಾಸಗಿ ಕ್ಲಿನಿಕ್‌ಗಳೂ ಸಹಕಾರ್ಯನಿರ್ವಹಿಸದೆ ಬಂದ್ ಮಾಡಿ ವೈದ್ಯರ ಮುಷ್ಕರಕ್ಕೆ ಬೆಂಬಲ ನೀಡಿದ್ದಾರೆ.
“ಪಶ್ಚಿಮ ಬಂಗಾಳದ ಕೋಲ್ಕತ್ತಾದ ಆರ್ ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ನಡೆದ ಕ್ರೂರ ಅಪರಾಧ ಮತ್ತು ಸ್ವಾತಂತ್ರ್ಯ ದಿನಾಚರಣೆಯ ಮುನ್ನಾದಿನದಂದು ಪ್ರತಿಭಟನಾ ನಿರತ ವಿದ್ಯಾರ್ಥಿಗಳ ಮೇಲೆ ಗೂಂಡಾಗಿರಿ ನಡೆಸಿದ ಕ್ರಮವನ್ನೂ ಭಾರತೀಯ ವೈದ್ಯಕೀಯ ಸಂಘ ತೀವ್ರವಾಗಿ ಖಂಡಿಸಿದೆ. ವೈದ್ಯಕೀಯ ವಿದ್ಯಾರ್ಥಿನಿಯ ಹತ್ಯೆ ಮತ್ತು ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಸೂಕ್ತ ಆರ್ಥಿಕ ಪರಿಹಾರ ನೀಡುವುದು ತನಿಖೆ ಮತ್ತು ವಿಚಾರಣೆಯ ತ್ವರಿತ ಟ್ರ್ಯಾಕಿಂಗ್ ಹಾಗೂ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ನೀಡುವ ಮೂಲಕ ನೊಂದ ಕುಟುಂಬಕ್ಕೆ ನ್ಯಾಯ ಒದಗಿಸಬೇಕು” ಎಂದು ಭಾರತೀಯ ವೈದ್ಯಕೀಯ ಸಂಘದ ಜಿಲ್ಲಾ ಅಧ್ಯಕ್ಷರು ಒತ್ತಾಯಿಸಿದ್ದಾರೆ.
ಈ ಸುದ್ದಿ ಓದಿದ್ದೀರಾ? ಗದಗ | ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಸ್‌ಎಫ್‌ಐ ಆಗ್ರಹ
“ವೈದ್ಯರ ಮೇಲಿನ ಹಿಂಸಾಚಾರ ನಿಲ್ಲಿಸುವಂತೆ, ಆಸ್ಪತ್ರೆ ಸುರಕ್ಷಿತ ವಲಯಗಳೆಂದು ಘೋಷಿಸುವುದು ಮತ್ತು ವೈದ್ಯಕೀಯ ವೃತ್ತಿಪರರಿಗೆ ಸಾಕಷ್ಟು ಭದ್ರತೆ ಒದಗಿಸುವ ಕುರಿತು ಕೇಂದ್ರ ಕಾನೂನನ್ನು ತಕ್ಷಣದ ಅನುಷ್ಠಾನ ಮಾಡಬೇಕು” ಎಂದು ಸಂಘ ಒತ್ತಾಯಿಸಿದೆ.
ಕಾರ್ಯಕ್ರಮಕ್ಕೂ ಮುನ್ನ ದಾವಣಗೆರೆ ನಗರದಲ್ಲಿ ಜಯದೇವ ವೃತ್ತದಿಂದ ನೂರಾರು ಕಿರಿಯ ವೈದ್ಯರು ಪಾದಯಾತ್ರೆ ಮೂಲಕ ಡಾ ಬಿ ಆರ್ ಅಂಬೇಡ್ಕರ್ ಪ್ರತಿಮೆವರೆಗೂ ಸಾಗಿ ವೈದ್ಯಕೀಯ ವಿದ್ಯಾರ್ಥಿನಿ ಮೇಲಿನ ಅತ್ಯಾಚಾರ, ಕೊಲೆ ಖಂಡಿಸಿ ಮೇಣದ ಬತ್ತಿ ಹೊತ್ತಿಸಿ ನ್ಯಾಯಕ್ಕಾಗಿ ಒತ್ತಾಯಿಸಿದರು.