ಸಾರ್ವಜನಿಕರು ರಸ್ತೆಯಲ್ಲಿ ಸಂಚರಿಸುವಾಗ ಸಂಚಾರ ನಿಯಮ, ಸುರಕ್ಷಿತ ನಿಯಮಗಳನ್ನು ಚಾಚು ತಪ್ಪದೇ ಪಾಲಿಸಿದರೆ ಅಪಘಾತದಿಂದ ದೂರವಿರಲು ಸಾಧ್ಯ ಎಂಬುದ ಪ್ರತಿಯೊಬ್ಬರ ಗಮನದಲ್ಲಿರಬೇಕು ಎಂದು ದಾವಣಗೆರೆ ಜಿಲ್ಲಾಧಿಕಾರಿ ಡಾ. ವೆಂಕಟೇಶ್ ಎಂ ವಿ ಹೇಳಿದರು.
ದಾವಣಗೆರೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
“ಜಿಲ್ಲೆಯಲ್ಲಿ 28 ಮಾರಣಾಂತಿಕ ಅಪಘಾತ ಸ್ಥಳಗಳನ್ನು ಗುರುತಿಸಿದ್ದು, ಇಲ್ಲಿ ಸಂಭವಿಸುವ ಅಪಘಾತಗಳ ಪ್ರಮಾಣವನ್ನು ಕಡಿಮೆ ಮಾಡಲು ಪೊಲೀಸ್ ಇಲಾಖೆ ಮತ್ತು ಲೋಕೋಪಯೋಗಿ ಹಾಗೂ ಇತರೆ ಇಲಾಖೆಗಳು ಕ್ರಮವಹಿಸಬೇಕು” ಎಂದು ಸೂಚನೆ ನೀಡಿದರು.
ಈ ಸುದ್ದಿ ಓದಿದ್ದೀರಾ? ಬೀದರ್ | ₹1.18 ಕೋಟಿ ಮೌಲ್ಯದ ಗಾಂಜಾ ಜಪ್ತಿ
“ಜಿಲ್ಲೆಗೆ ಆಗಮಿಸುವ ಜನರಿಗೆ ಯಾವುದೇ ರೀತಿಯ ಗೊಂದಲ ಉಂಟಾಗದಂತೆ ರಸ್ತೆ ಮಾರ್ಗಗಳಲ್ಲಿ ಹಾಗೂ ರಾಷ್ಟ್ರೀಯ ಹೆದ್ದಾರಿ ಮತ್ತು ರಾಜ್ಯ ಹೆದ್ದಾರಿಗಳಲ್ಲಿ ಸೂಚನಾ ಫಲಕಗಳನ್ನು ಕೂಡಲೇ ಅಳವಡಿಸಬೇಕು. ಇದರಿಂದ ಸಂಭವಿಸಬಹುದಾದ ಅಪಘಾತಗಳನ್ನು ತಪ್ಪಿಸಲು ಸಾಧ್ಯವಾಗುತ್ತದೆ. ಜಿಲ್ಲೆಯಲ್ಲಿರುವ ಕೆರೆ ಪಕ್ಕದ ರಸ್ತೆಗಳು ಅವ್ಯವಸ್ಥೆಯಿಂದ ಕೂಡಿದ್ದಲ್ಲಿ ಅಂತಹ ರಸ್ತೆಗಳನ್ನು ಕೂಡಲೇ ದುರಸ್ತಿಗೊಳಿಸಬೇಕು” ಎಂದರು.
ಅಪರ ಜಿಲ್ಲಾಧಿಕಾರಿ ಪಿ ಎನ್ ಲೋಕೇಶ್, ದೂಡಾ ಆಯುಕ್ತ ಬಸವನಗೌಡ ಕೊಟೂರು, ಪಾಲಿಕೆ ಆಯುಕ್ತ ರೇಣುಕಾ, ಜಿಲ್ಲಾ ಲಾರಿ, ಖಾಸಗಿ ಬಸ್, ಆಟೋ ಚಾಲಕರ ಸಂಘದ ಅಧ್ಯಕ್ಷರುಗಳು ಇದ್ದರು.