ಬಡ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ನೀಡದೆ ಶಿಕ್ಷಣದಿಂದ ವಂಚಿತರಾಗುವಂತೆ ಮಾಡುತ್ತಿರುವ ರಾಜ್ಯ ಸರ್ಕಾರದ ನಡೆಯನ್ನು ಖಂಡಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನೇತೃತ್ವದಲ್ಲಿ ವಿದ್ಯಾರ್ಥಿಗಳು ದಾವಣಗೆರೆಯಲ್ಲಿ ಪ್ರತಿಭಟನೆ ನಡೆಸಿದರು.
ನಗರದ ಜಯದೇವ ವೃತ್ತದಿಂದ ಪ್ರತಿಭಟನಾ ಮೆರವಣಿಗೆ ನಡೆಸಿದ ಪ್ರತಿಭಟನಾಕಾರರು “ದೇಶದಲ್ಲಿಯೇ ಕರ್ನಾಟಕವು ಉತ್ತಮ ಶಿಕ್ಷಣ ವ್ಯವಸ್ಥೆ ಹಾಗೂ ಉತ್ಕೃಷ್ಟ ಮಟ್ಟದ ವಿಶ್ವವಿದ್ಯಾಲಯಗಳಿಂದ ಹೆಸರು ವಾಸಿಯಾಗಿದೆ. ಹೊರರಾಜ್ಯದ ಸಾವಿರಾರು ವಿದ್ಯಾರ್ಥಿಗಳು ರಾಜ್ಯಕ್ಕೆ ಶಿಕ್ಷಣ ಹರಸಿ ಬರುತ್ತಿರುವುದು ನಮ್ಮ ರಾಜ್ಯದ ಹೆಮ್ಮೆ” ಎಂದು ಹೇಳಿದರು.
“ಉನ್ನತ ಶಿಕ್ಷಣದ ಆಸೆ ಇಟ್ಟುಕೊಂಡ ರಾಜ್ಯದ ಅದೆಷ್ಟೋ ಬಡ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳ ನೆರವಿಗೆ ಧಾವಿಸಿ, ಸರ್ಕಾರ ವಿದ್ಯಾರ್ಥಿ ವೇತನದ ರೂಪದಲ್ಲಿ ಆರ್ಥಿಕ ಬೆಂಬಲ ನೀಡುತ್ತದೆ. ಕಾಲೇಜುಗಳಿಗೆ ದಾಖಲಾಗಬಹುದು ಅಂದುಕೊಂಡಿದ್ದರು. ಆದರೆ ರಾಜ್ಯ ಸರ್ಕಾರ ಶಿಕ್ಷಣಕ್ಕೆ ಪ್ರಾಮುಖ್ಯತೆ ನೀಡದೇ, ವಿದ್ಯಾರ್ಥಿ ವೇತನದಲ್ಲೂ ರಾಜಕೀಯ ಮುಂದುವರಿಸಿದೆ. ಇದರಿಂದ ಈ ರಾಜ್ಯದ ವಿದ್ಯಾರ್ಥಿಗಳ ಶೋಚನೀಯ ಸ್ಥಿತಿಗೆ ಕಾರಣವಾಗಿದೆ” ಎಂದು ಕಿಡಿಕಾರಿದರು.
“ಎಸ್‌ಎಸ್‌ಪಿ ತಂತ್ರಾಂಶದ ಮೂಲಕ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಕೃಷಿ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಆಯುಷ್ ಇಲಾಖೆ, ತಾಂತ್ರಿಕ ಶಿಕ್ಷಣ ಇಲಾಖೆ ಹಾಗೂ ಇತರ ಇಲಾಖೆಗಳ ಅಡಿಯಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ತಮ್ಮ ಪದವಿ ಮತ್ತು ಸ್ನಾತ್ತಕೋತ್ತರ ಶಿಕ್ಷಣಕ್ಕಾಗಿ ವಿದ್ಯಾರ್ಥಿವೇತನಕ್ಕೆ ಅರ್ಜಿಯನ್ನು ಸಲ್ಲಿಸುತ್ತಾರೆ. ಆದರೆ ರಾಜ್ಯ ಸರಿಯಾದ ಸಮಯಕ್ಕೆ ವಿದ್ಯಾರ್ಥಿವೇತನ ನೀಡದೆ ಲಕ್ಷಾಂತರ ವಿದ್ಯಾರ್ಥಿಗಳ ಶಿಕ್ಷಣವನ್ನು ಅತಂತ್ರ ಸ್ಥಿತಿಗೆ ತರುವ ಕೆಲಸವನ್ನು ಮಾಡಿದೆ” ಎಂದು ಆರೋಪಿಸಿದರು.
“ರಾಜ್ಯದ ರೈತರ ಮಕ್ಕಳ ಶಿಕ್ಷಣಕ್ಕಾಗಿ ಹಿಂದಿನ ಸರ್ಕಾರ ರೈತ ವಿದ್ಯಾನಿಧಿ ವಿದ್ಯಾರ್ಥಿವೇತನ ಪ್ರಾರಂಭಿಸಿತ್ತು. ಈ ವಿದ್ಯಾರ್ಥಿ ವೇತನವನ್ನು ಈಗಿನ ರಾಜ್ಯ ಸರ್ಕಾರ ತಡೆಹಿಡಿಯುವ ಕೆಲಸವನ್ನು ಮಾಡಿ ರೈತರ ಮಕ್ಕಳ ಶಿಕ್ಷಣವನ್ನು ಕಸಿದುಕೊಳ್ಳುವ ಕೆಲಸವನ್ನು ಮಾಡುತ್ತಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.
ಈ ಸುದ್ದಿ ಓದಿದ್ದೀರಾ? ಉಡುಪಿ | ಮಹಿಳೆಯರ ಮೇಲೆ ಪೊಲೀಸ್ ದೌರ್ಜನ್ಯ?; ಆರೋಪ ತಳ್ಳಿ ಹಾಕಿದ ಪೊಲೀಸರು
ರಾಜ್ಯದಲ್ಲಿ 4 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಇಂದು ರಾಜ್ಯ ಸರ್ಕಾರ 2022-23ನೇ ಸಾಲಿನ ವಿದ್ಯಾರ್ಥಿ ವೇತನವನ್ನು ತಡೆ ಹಿಡಿದಿದೆ. ಎಸ್‌ಎಸ್‌ಪಿ ವಿದ್ಯಾರ್ಥಿವೇತನ ತಂತ್ರಾಂಶದಲ್ಲಿ ಮಂಜೂರಾಗಿರುವುದಾಗಿ ತೋರಿಸಿದ್ದರು. ಆದರೆ ವಿದ್ಯಾರ್ಥಿಗಳ ಖಾತೆಗೆ ಹಣ ಜಮಾ ಆಗಿರುವುದಿಲ್ಲ. ಹಣ ಜಮಾ ಆಗುವ ಮೊದಲೇ ಮುಂದಿನ ಶೈಕ್ಷಣಿಕ ಸಾಲಿನ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನಿಸಿರುವುದು ವಿದ್ಯಾರ್ಥಿಗಳಿಗೆ ಗೊಂದಲ ಉಂಟುಮಾಡಿದೆ. ಹಾಗಾಗಿ ರಾಜ್ಯ ಸರ್ಕಾರ ಕೂಡಲೇ ವಿದ್ಯಾರ್ಥಿ ವೇತನ ನೀಡಿ ಬಡ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗಿವುದನ್ನು ತಪ್ಪಿಸಬೇಕು” ಎಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಎಬಿವಿಪಿ ಮುಖಂಡರು, ಹಲವು ಕಾಲೇಜುಗಳ ವಿದ್ಯಾರ್ಥಿಗಳು ಇದ್ದರು.