ಸಂವಿಧಾನವೇ ನಮ್ಮ ರಾಷ್ಟ್ರದ ಸರ್ವೋಚ್ಚ ಕಾನೂನು, ಅದಕ್ಕೆ ಎಲ್ಲರೂ ಗೌರವಿಸಬೇಕು ಮತ್ತು ಅದರ ನಿಯಮಗಳನ್ನು ಪ್ರತಿಯೊಬ್ಬರೂ ಪಾಲಿಸಬೇಕು ಎಂದು ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವ ಎಸ್ ಎಸ್ ಮಲ್ಲಿಕಾರ್ಜುನ್ ಹೇಳಿದರು.
ದಾವಣಗೆರೆ ಜಿಲ್ಲಾಡಳಿತದ ವತಿಯಿಂದ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ 76ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, “ಬುದ್ಧ, ಬಸವ, ಅಂಬೇಡ್ಕರ್ ಅವರ ಸದಾಶಯದಂತೆ ಸರ್ವರಿಗೂ ಸಮಪಾಲು, ಸರ್ವರಿಗೂ ಸಮಬಾಳು ಎಂಬ ತತ್ವದಡಿ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸರ್ಕಾರದ ಸೌಲಭ್ಯಗಳನ್ನು ದೊರಕಿಸುವ ನಿಟ್ಟಿನಲ್ಲಿ ಸರ್ಕಾರ ಕಾರ್ಯನಿರ್ವಹಿಸುತ್ತಿದೆ. ಜಿಲ್ಲೆಯಲ್ಲಿ ಈ ಬಾರಿ ಮುಂಗಾರು ಮತ್ತು ಹಿಂಗಾರು ಹಂಗಾಮಿನಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗಿದೆ. ಜಿಲ್ಲೆಯ ಜೀವನಾಡಿ ಭದ್ರಾ ಜಲಾಶಯ ತುಂಬಿರುವುದರಿಂದ ರೈತಾಪಿ ವರ್ಗದಲ್ಲಿ ಹರ್ಷ ಮನೆಮಾಡಿದೆ. ರೈತರು ಬೇಸಿಗೆ ಬೆಳೆಯ ಸಿದ್ಧತೆಯಲ್ಲಿ ತೊಡಗಿದ್ದಾರೆ. ಇದು ಅತ್ಯಂತ ಸಂತೋಷದ ವಿಷಯವಾಗಿದೆ” ಎಂದು ಹರ್ಷ ವ್ಯಕ್ತಪಡಿಸಿದರು.

“ಜನಸಾಮಾನ್ಯರ ಬದುಕಿಗೆ ಆರ್ಥಿಕ ಸಬಲತೆಯೊಂದಿಗೆ ಸಾಮಾಜಿಕ ಗೌರವ ತಂದುಕೊಡುವ ದೃಷ್ಟಿಯಿಂದ ಜಾರಿಗೆ ತಂದ ಸರ್ಕಾರದ ಗ್ಯಾರಂಟಿ ಯೋಜನೆಗಳು ರಾಜ್ಯದಲ್ಲಿನ ಜನರ ಜೀವನ ಮಟ್ಟವನ್ನು ಸುಧಾರಿಸಿವೆ. ಈ ಯೋಜನೆಗಳು ರಾಜ್ಯದ ಆರ್ಥಿಕ ಬೆಳವಣಿಗೆಗೆ ಉತ್ತೇಜಕವಾಗಿದೆ. ಸರ್ಕಾರದ ಸೌಲಭ್ಯಗಳನ್ನು ಜನಸಾಮಾನ್ಯರಿಗೆ ದೊರಕಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ನುಡಿದಂತೆ ನಡೆದಿದೆ” ಎಂದರು.
“ಜಿಲ್ಲೆಗೆ ಪ್ರಧಾನಮಂತ್ರಿ ಗ್ರಾಮೀಣ ಆವಾಸ್ ಯೋಜನೆಯಡಿ 8,510 ಮನೆಗಳನ್ನು ಮಂಜೂರು ಮಾಡಲಾಗಿದೆ. ಎನ್‌ಆರ್‌ಎಲ್‌ಎಂ ಸಂಜೀವಿನಿ ಯೋಜನೆಯಡಿ 2 ಅಕ್ಕ ಕೆಫೆ ಮಂಜೂರಾಗಿದ್ದು, ಈಗಾಗಲೇ ದಾವಣಗೆರೆ ನಗರದಲ್ಲಿ ಆರಂಭಿಸಲಾಗಿದೆ. ಮಹಿಳಾ ಸ್ವ ಸಹಾಯ ಸಂಘದವರೇ ಇದರ ನಿರ್ವಹಣೆ ಮಾಡುತ್ತಿದ್ದಾರೆ. ದಾವಣಗೆರೆ ಮಹಾನಗರಪಾಲಿಕೆಗೆ ಮಹಾತ್ಮ ಗಾಂಧಿ ನಗರ ವಿಕಾಸ ಯೋಜನೆಯಡಿ ಮಂಜೂರಾದ ₹200 ಕೋಟಿ ಅನುದಾನಕ್ಕೆ ಸರ್ಕಾರ ಅನುಮೋದನೆ ನೀಡಿದ್ದು, ಶೀಘ್ರದಲ್ಲೇ ಕಾಮಗಾರಿ ಪ್ರಾರಂಭವಾಗಲಿದೆ. ಜಿಲ್ಲೆ ತೋಟಗಾರಿಕೆಯಲ್ಲಿ ಮುಂಚೂಣಿಯಲ್ಲಿದೆ. ಜಿಲ್ಲೆಯ ರೈತರ ಬದುಕನ್ನು ಇನ್ನಷ್ಟು ಹಸನುಗೊಳಿಸಲು ಕೆರೆ ತುಂಬಿಸುವ ಯೋಜನೆ, ನಾಲೆಗಳ ದುರಸ್ಥಿ ಕೈಗೊಳ್ಳುವ ಮೂಲಕ ಕೊನೆ ಭಾಗದ ರೈತರಿಗೂ ನೀರು ಸಿಗುವಂತೆ ಮಾಡುವುದು ನಮ್ಮ ಉದ್ದೇಶವಾಗಿದೆ” ಎಂದರು.

ಸಾಂಸ್ಕಂತಿಕ ಕಾರ್ಯಕ್ರಮದಲ್ಲಿ ಅಲ್ ಇಕ್ರಾ ಶಾಲೆ, ಡಿ ಆರ್ ಆರ್ ಶಾಲೆ, ಸೆಂಟ್ ಜಾನ್ಸ್ ಪ್ರೌಢಶಾಲೆಯ ಮಕ್ಕಳು ದೇಶಪ್ರೇಮ, ತ್ಯಾಗ, ಬಲಿದಾನದ ಸಾರವನ್ನು ಹೊಂದಿದಂತಹ ನೃತ್ಯರೂಪಕಗಳನ್ನು ಪ್ರದರ್ಶಿಸಿದ್ದು ನೋಡುಗರ ಕಣ್ಮನ ಸೆಳೆಯುವಂತಿತ್ತು.
ನಗರದ ವಿಶ್ವೇಶ್ವರಯ್ಯ ಉದ್ಯಾವನದಲ್ಲಿ ಹಾಗೂ ಜಿಲ್ಲಾಡಳಿತ ಭವನದ ಮುಂಭಾಗದಲ್ಲಿ ಸಂವಿಧಾನ ಪೀಠಿಕೆಯನ್ನು ಸ್ಥಾಪಿಸಲಾಗಿದ್ದು ಗಣಿ ಭೂವಿಜ್ಞಾನ, ತೋಟಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ಉದ್ಘಾಟಿಸಿದರು.
ಈ ಸುದ್ದಿ ಓದಿದ್ದೀರಾ?: ದಾವಣಗೆರೆ | ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ; ಆರೋಪಿಗೆ ₹30,000 ದಂಡ, 21 ವರ್ಷ ಜೈಲು ಶಿಕ್ಷೆ
ಕಾರ್ಯಕ್ರಮದಲ್ಲಿ ಸಂಸದ ಡಾ. ಪ್ರಭಾ ಮಲ್ಲಿಕಾರ್ಜುನ್, ಮೇಯರ್ ಚಮನ್‍ಸಾಬ್ ಕೆ, ದೂಡಾ ಅಧ್ಯಕ್ಷ ದಿನೇಶ್ ಕೆ ಶೆಟ್ಟಿ, ಉಪಮೇಯರ್ ಸೋಗಿ ಶಾಂತಕುಮಾರ್, ಪೂರ್ವ ವಲಯ ಪೊಲೀಸ್ ಮಹಾನಿರೀಕ್ಷಕ ರವಿಕಾಂತೇಗೌಡ, ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಜಿ ಎಂ, ಎಸ್‌ಪಿ ಉಮಾ ಪ್ರಶಾಂತ್, ಜಿ ಪಂ ಸಿಇಒ ಸುರೇಶ್ ಬಿ ಇಟ್ನಾಳ್, ಅಪರ ಜಿಲ್ಲಾಧಿಕಾರಿ ಪಿ ಎನ್ ಲೋಕೇಶ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಸಾವಿರಾರು ವಿದ್ಯಾರ್ಥಿಗಳು, ಸಾರ್ವಜನಿಕರು ಭಾಗವಹಿಸಿದ್ದರು.

