ಜನಾಂಗೀಯ ಸಂಘರ್ಷ ಮತ್ತು ಹಿಂಸಾಚಾರದಿಂದ ನಲುಗಿ ಹೋಗಿರುವ ಮಣಿಪುರದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವಲ್ಲಿ ಮುಖ್ಯಮಂತ್ರಿ ಬೀರೇನ್ ಸಿಂಗ್ ಸರ್ಕಾರ ವಿಫಲವಾಗಿದೆ. ಆ ಸರ್ಕಾರವನ್ನು ವಜಾಗೊಳಿಸಿ, ರಾಷ್ಟ್ರಪತಿ ಆಡಳಿತ ಜಾರಿ ಮಾಡಬೇಕು. ಮಣಿಪುರದಲ್ಲಿ ಕಾನೂನು-ಸುವ್ಯವಸ್ಥೆ ಕಾಪಾಡಬೇಕು ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ಆಗ್ರಹಿಸಿದೆ.
ದಾವಣಗೆರೆಯಲ್ಲಿ ಪ್ರತಿಭಟನೆ ನಡೆಸಿದ ಸಂಘಟನೆ ಮುಖಂಡರು ಮತ್ತು ಕಾರ್ಯಕರ್ತರು ಜಿಲ್ಲಾಧಿಕಾರಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದ್ದಾರೆ.
ಪ್ರತಿಭಟನೆಯಲ್ಲಿ ಮಾತನಾಡಿದ ದಸಂಸ ಜಿಲ್ಲಾ ಸಂಚಾಲಕ ಕುಂದುವಾಡ ಮಂಜುನಾಥ್, “ಮಣಿಪುರದಲ್ಲಿ ಮೇ 4ರಂದು ಕುಕಿ ಜೋ ಬುಡಕಟ್ಟು ಸಮುದಯದ ಇಬ್ಬರು ಮಹಿಳೆಯರನ್ನು ಬೆತ್ತಲೆಗೊಳಿಸಿ ಸಾರ್ವಜನಿಕವಾಗಿ ಮೆರವಣಿಗೆ ಮಾಡಿ, ಸಾಮೂಹಿಕ ಆತ್ಯಾಚಾರ ಎಸಗಿರುವ ದುಷ್ಕರ್ಮಿಗಳನ್ನು ಬಂಧಿಸಿ, ತಕ್ಷಣವೇ ಗಲ್ಲು ಶಿಕ್ಷೆ ವಿಧಿಸಬೇಕು. ಮೂರು ತಿಂಗಳಿಂದ ನಡೆಯುತ್ತಿರುವ ಹಿಂಸಾಚಾರವನ್ನು ತಡೆಯುವಲ್ಲಿ ಪಿಫಲವಾಗಿರುವ ಬಿಜೆಪಿ ಸರ್ಕಾರವನ್ನು ವಜಾಗೊಳಿಸಬೇಕು. ಮಣಿಪುರದಲ್ಲಿ ರಾಷ್ಟ್ರಪತಿ ಆಡಳಿತ ಜಾರಿಗೆ ತರಬೇಕು” ಎಂದು ಒತ್ತಾಯಿಸಿದ್ದಾರೆ.
“ಮಣಿಪುರ ಗಲಭೆ ತಡೆಯಲಾದ ಕೇಂದ್ರ ಗೃಹಮಂತ್ರಿ ಅಮಿತ್ ಶಾ ಮತ್ತು ಪ್ರಧಾನಿ ನರೇಂದ್ರ ಮೋದಿ – ನೈತಿಕ ಹೊಣೆ ಹೊತ್ತು ತಮ್ಮ ಸ್ಥಾನಗಳಿಗೆ ರಾಜೀನಾಮೆ ಸಲ್ಲಿಸಬೇಕು” ಎಂದು ಆಗ್ರಹಿಸಿದ್ದಾರೆ.
ಪ್ರತಿಭಟನೆಯಲ್ಲಿ ವಿಜಯಲಕ್ಷ್ಮಿ, ಹನುಮಂತಪ್ಪ ಅಣಜಿ, ಪ್ರದೀಪ್, ಮಹಾಂತೇಶ್, ಹಾಲುವರ್ತಿ, ಮಂಜುನಾಥ್ ಹನುಮಂತಪ, ಖಾಲಿದ್ ಅಲಿ,ಮಹಾಂತೇಶ್ ಬೇತೂರು, ನಾಗರಾಜ್ ಬಿ. ಚಿತ್ತಾನಹಳ್ಳಿ, ಬೇತೂರು ಹನುಮಂತ, ಮಂಜುನಾಥ್ ನೀರ್ಥಡಿ ಉಪಸ್ಥಿತರಿದ್ದರು.