ದಾವಣಗೆರೆ ಜಿಲ್ಲೆಯಲ್ಲಿ ದಲಿತರ ಮೇಲಾಗುವ ಯಾವುದೇ ರೀತಿಯ ದೌರ್ಜನ್ಯ ಪ್ರಕರಣಗಳು ವರದಿಯಾದ ಕೂಡಲೇ ಅಧಿಕಾರಿಗಳು ಎಚ್ಚೆತ್ತುಕೊಂಡು, ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಬೇಕು. ಆರೋಪಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ದಾವಣಗೆರೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ದಾವಣಗೆರೆ ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ನಡೆದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕುಂದುಕೊರತೆ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ದೌರ್ಜನ್ಯ ಪ್ರಕರಣಗಳು ಸಂಭವಿಸಿದ ಕೂಡಲೇ ಇದನ್ನು ಗಂಭೀರವಾಗಿ ಪರಿಗಣಿಸಿ ಆ ಪ್ರಕರಣಗಳ ಚಾರ್ಜ್‌ಶೀಟ್ ಹಾಕಬೇಕು. ಮುಂದೆ ಇಂತಹ ಪ್ರಕರಣಗಳು ನಡೆಯದಂತೆ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಹೇಳಿದರು.
ಸಭೆಯಲ್ಲಿ ಭಾಗವಹಿಸಿದ ಡಿ.ಎಸ್.ಎಸ್ ಪ್ರತಿನಿಧಿಗಳು ಮಾತನಾಡಿ, ತಾಲೂಕು ಮಟ್ಟದಲ್ಲಿ ಪ್ರತಿ ಮೂರು ತಿಂಗಳಿಗೊಮ್ಮೆ ಎಸ್.ಸಿ, ಎಸ್.ಟಿ ಕುಂದುಕೊರತೆ ಸಭೆ ನಡೆಸಬೇಕು, ಸಮಾಜ ಕಲ್ಯಾಣ ಅಧಿಕಾರಿಗಳು ಸಹ ಶೋಷಣೆ, ದೌರ್ಜನ್ಯಕ್ಕೆ ಒಳಗಾದವರ ಮನೆಗೆ ಭೇಟಿ ನೀಡಿ ತ್ವರಿತಗತಿಯಲ್ಲಿ ನ್ಯಾಯ ಒದಗಿಸಬೇಕು ಎಂದರು.
ಸಭೆಯಲ್ಲಿ ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಜಯಕುಮಾರ್ ಸಂತೋಷ್, ಪಾಲಿಕೆ ಆಯುಕ್ತೆ ರೇಣುಕಾ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೆಶಕ ಕೆ. ನಾಗರಾಜ, ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ಪಿ. ರಮೇಶ್ ಉಪಸ್ಥಿತರಿದ್ದರು.