ಶಹಾಪೂರ ತಾಲೂಕು ವ್ಯಾಪ್ತಿಯ ಸಮಾಜ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರ ಬಾಲಕರ ವಸತಿ ನಿಲಯದಲ್ಲಿ ಸ್ವಚ್ಛತೆ ಬಗ್ಗೆ ನಿರ್ಲಕ್ಷ್ಯವಹಿಸಿದ ಸಮಾಜ ಕಲ್ಯಾಣ ಇಲಾಖೆ ತಾಲೂಕಾಧಿಕಾರಿಯನ್ನು ಅಮಾನತುಗೊಳಿಸುವಂತೆ ಆಗ್ರಹಿಸಿ ವಿದ್ಯಾರ್ಥಿಗಳು ದಿಢೀರ ಪ್ರತಿಭಟನೆ ನಡೆಸಿದರು.
ವಸತಿ ನಿಲಯದ ಎದುರುಗಡೆ ಜಮಾಯಿಸಿದ ವಿದ್ಯಾರ್ಥಿಗಳು ಕೆಲ ಕಾಲ ಪ್ರತಿಭಟನೆ ನಡೆಸಿದರು. ಬಳಿಕ ಸ್ಥಳಕ್ಕೆ ಆಗಮಿಸಿದ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದರು.
ʼವಸತಿ ನಿಲಯದಲ್ಲಿ ಅಡುಗೆ ಕೋಣೆ, ಶೌಚಾಲಯ, ಸ್ನಾನದ ಕೋಣೆಗಳು ಸ್ವಚ್ಚಗೊಳಿಸಲು ಹಲವು ಬಾರಿ ಮನವಿ ಮಾಡಿದರೂ ನಿರ್ಲಕ್ಷ ತೋರುತ್ತಿದ್ದಾರೆ. ಹಾಸ್ಟೆಲ್ ಅವ್ಯವಸ್ಥೆಯಿಂದ ಸೊಳ್ಳೆಗಳ ಕಾಟ ಹೆಚ್ಚಾಗಿದೆ. ಇದರಿಂದ ವಿದ್ಯಾರ್ಥಿಗಳು ತೊಂದರೆ ಅನುಭವಿಸುತ್ತಿದ್ದಾರೆ. ಸುಮಾರು ತಿಂಗಳಿಂದ ಸಮಸ್ಯೆ ಉದ್ಭವಿಸಿದರೂ ಕ್ಯಾರೇ ಎನ್ನುತ್ತಿಲ್ಲʼ ಎಂದು ದೂರಿದರು.
ಸರ್.ಎಂ.ವಿಶ್ವೇಶ್ವರಯ್ಯ ಕಟ್ಟಡ ಕಾರ್ಮಿಕ ಸಂಘದ ಅಧ್ಯಕ್ಷ ಪ್ರದೀಪ ಅಣಬಿ ಮಾತನಾಡಿ, ʼತಾಲೂಕು ಸಮಾಜ ಕಲ್ಯಾಣಾಧಿಕಾರಿ ರಾವುತಪ್ಪ ಅವರು ವಿದ್ಯಾರ್ಥಿಗಳ ಮನವಿಗೆ ಸ್ಪಂದಿಸುತ್ತಿಲ್ಲ. ಈಗಾಗಲೇ ಇವರ ಮೇಲೆ ಭ್ರಷ್ಟಾಚಾರ ಆರೋಪವೂ ಕೇಳಿ ಬಂದಿದ್ದು, ಕೂಡಲೇ ಅವರನ್ನು ಅಮಾನತ್ತು ಮಾಡಬೇಕುʼ ಎಂದು ಆಗ್ರಹಿಸಿದರು.
ಜಿಲ್ಲಾ ಸಮಾಜ ಕಲ್ಯಾಣ ಅಧಿಕಾರಿಗಳು ಮನವಿ ಸ್ವೀಕರಿಸಿ ಮಾತನಾಡಿ, ʼವಿದ್ಯಾರ್ಥಿಗಳ ಬೇಡಿಕೆಗಳನ್ನು ಈಡೇರಿಸಲಾಗುತ್ತದೆ ಎಂದು ಭರವಸೆ ನೀಡಿದರು. ತಪ್ಪಿಸ್ಥ ಅಧಿಕಾರಿಗಳ ಮೇಲೆ ಶಿಸ್ತು ಕಾನೂನು ಕ್ರಮ ಕೈಗೊಳ್ಳಲಾಗುವುದುʼ ಎಂದು ಭರವಸೆ ನೀಡಿದರು.
ಈ ಸುದ್ದಿ ಓದಿದ್ದೀರಾ? ಬೀದರ್ | ಶಿಥಿಲಗೊಂಡ ಶಾಲಾ ಕಟ್ಟಡ : ಮರದ ಕೆಳಗೆ ಪಾಠ ಕೇಳುತ್ತಿರುವ ವಿದ್ಯಾರ್ಥಿಗಳು!
ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಾದ ಮಹೇಂದ್ರ ಪ್ರಸಾದ, ರಾಮು, ಆಕಾಶ, ಭೀಮರಾಯ, ರೋಹಿತ, ಸುನೀಲ್, ಆನಂದ ಪರಶುರಾಮ ಹುಲಗಪ್ಪ ಮಂಜುನಾಥ ದೇವರಾಜ ಸೇರಿ ನಿಲಯದ ವಿದ್ಯಾರ್ಥಿಗಳು ಇದ್ದರು.