ಉತ್ತರ ಕನ್ನಡ ಜಿಲ್ಲೆಯ ಪೊಲೀಸ್ ಇಲಾಖೆಗೆ ಹೆಮ್ಮೆಯ ಕ್ಷಣವಾಗಿದ್ದು, ಸಿದ್ದಾಪುರ ಪೊಲೀಸ್ ಠಾಣೆಯ ತನಿಖಾ ಪಿಎಸ್‌ಐ ನಾಗಪ್ಪ ಹಾಗೂ ಭಟ್ಕಳ ನಗರ ಪೊಲೀಸ್ ಠಾಣೆಯ ಹೆಡ್ ಕಾನ್ಸ್‌ಟೇಬಲ್ ದೀಪಕ್ ನಾಯ್ಕ ಅವರು 2025-26ನೇ ಸಾಲಿನ ಪ್ರತಿಷ್ಠಿತ ಡಿಜಿ ಮತ್ತು ಐಜಿಪಿ ಶ್ಲಾಘನಾ ಪದಕಕ್ಕೆ ಭಾಜನರಾಗಿದ್ದಾರೆ.
ಕರ್ತವ್ಯನಿಷ್ಠೆ, ಪ್ರಾಮಾಣಿಕತೆ, ದಕ್ಷತೆ ಹಾಗೂ ಜನಸ್ನೇಹಿ ಸೇವೆಯ ಮೂಲಕ ಪೊಲೀಸ್ ಇಲಾಖೆಯಲ್ಲಿ ವಿಶಿಷ್ಟ ಗುರುತನ್ನು ಮೂಡಿಸಿರುವ ಈ ಇಬ್ಬರು ಅಧಿಕಾರಿಗಳ ಸಾಧನೆಯನ್ನು ಪರಿಗಣಿಸಿ ರಾಜ್ಯ ಪೊಲೀಸ್ ಇಲಾಖೆಯು ಈ ಗೌರವವನ್ನು ನೀಡಿ ಸನ್ಮಾನಿಸಿದೆ.
ಸಿದ್ದಾಪುರ ಪೊಲೀಸ್ ಠಾಣೆಯ ತನಿಖಾ ಪಿಎಸ್‌ಐ ನಾಗಪ್ಪ ಅವರು ತಮ್ಮ ಸೇವಾ ಅವಧಿಯಲ್ಲಿ ಹಲವು ಸಂಕೀರ್ಣ ಹಾಗೂ ಸವಾಲಿನ ಪ್ರಕರಣಗಳನ್ನು ಯಶಸ್ವಿಯಾಗಿ ಇಲಾಖೆಯಲ್ಲಿ ದಕ್ಷ ಹಾಗೂ ಕರ್ತವ್ಯನಿಷ್ಠ ಅಧಿಕಾರಿಯಾಗಿ ಹೆಸರು ಗಳಿಸಿದ್ದಾರೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಸಲ್ಲಿಸಿದ ಅಮೂಲ್ಯ ಸೇವೆಯನ್ನು ಪರಿಗಣಿಸಿ ಅವರಿಗೆ ಡಿಜಿ ಮತ್ತು ಐಜಿಪಿ ಶ್ಲಾಘನಾ ಚಿನ್ನದ ಪದಕಕ್ಕೆ ಆಯ್ಕೆ ಮಾಡಲಾಗಿದೆ. ಈ ಹಿಂದೆ ಶಿರಸಿ ನಗರ ಪೊಲೀಸ್ ಠಾಣೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ವೇಳೆ ಅವರ ಅತ್ಯುತ್ತಮ ಕಾರ್ಯಕ್ಷಮತೆಯನ್ನು ಗುರುತಿಸಿ ರಾಜ್ಯ ಸರ್ಕಾರದಿಂದ ಮುಖ್ಯಮಂತ್ರಿಗಳ ಚಿನ್ನದ ಪದಕವೂ ಲಭಿಸಿತ್ತು. ಪೊಲೀಸ್ ಸೇವೆಯ ಜೊತೆಗೆ ಸಾಹಿತ್ಯ ಕ್ಷೇತ್ರದಲ್ಲಿಯೂ ತಮ್ಮದೇ ಛಾಪು ಮೂಡಿಸಿರುವ ಅವರು ಭರವಸೆಯ ಸಾಹಿತಿಯಾಗಿಯೂ ಗುರುತಿಸಿಕೊಂಡಿದ್ದಾರೆ.
ಈ ಸುದ್ದಿ ಓದಿದ್ದೀರಾ? ಉತ್ತರ ಕನ್ನಡ | ಮಳೆ ಕೊರತೆಯಿಂದ ಕೃಷಿ ಚಟುವಟಿಕೆ ಕುಂಠಿತ: ಆತಂಕದಲ್ಲಿ ರೈತರು
ಇನ್ನೊಂದೆಡೆ ಭಟ್ಕಳ ನಗರ ಪೊಲೀಸ್ ಠಾಣೆಯಲ್ಲಿ ಸೇವೆ ಸಲ್ಲಿಸುತ್ತಿರುವ ಹೆಡ್ ಕಾನ್ಸ್‌ಟೇಬಲ್ ದೀಪಕ್ ನಾಯ್ಕ ಅವರು ಹಲವು ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ಸಮರ್ಪಕ ಸೇವೆ ಸಲ್ಲಿಸುತ್ತಿದ್ದು, ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವಲ್ಲಿ ತೋರಿದ ಕಾರ್ಯಕ್ಷಮತೆ, ಸಾರ್ವಜನಿಕರೊಂದಿಗೆ ಹೊಂದಿರುವ ಉತ್ತಮ ಬಾಂಧವ್ಯ ಹಾಗೂ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಮನೋಭಾವದಿಂದ ವಿಶೇಷ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಅಪರಾಧ ಪ್ರಕರಣಗಳ ತನಿಖೆ, ಆರೋಪಿಗಳ ಪತ್ತೆ ಹಾಗೂ ಸಾರ್ವಜನಿಕರ ದೂರುಗಳ ತ್ವರಿತ ವಿಲೇವಾರಿಯಲ್ಲಿ ಅವರು ನೀಡಿರುವ ಕೊಡುಗೆ ಗಮನಾರ್ಹವಾಗಿದೆ.
ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ಮತ್ತು ಸಿದ್ದಾಪುರ ತಾಲ್ಲೂಕುಗಳ ಈ ಇಬ್ಬರು ಪೊಲೀಸ್ ಸಾಧಕರಿಗೆ ಲಭಿಸಿರುವ ಪ್ರತಿಷ್ಠಿತ ಗೌರವವು ಜಿಲ್ಲೆಯ ಪೊಲೀಸ್ ಇಲಾಖೆಯ ಕೀರ್ತಿಯನ್ನು ಮತ್ತಷ್ಟು ಹೆಚ್ಚಿಸಿದ್ದು, ಯುವ ಪೊಲೀಸ್ ಸಿಬ್ಬಂದಿಗೆ ಪ್ರೇರಣೆಯಾಗಿದೆ. ಇವರ ಸಾಧನೆಗೆ ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳು, ಸಹೋದ್ಯೋಗಿಗಳು ಹಾಗೂ ಸಾರ್ವಜನಿಕರು ಹರ್ಷ ವ್ಯಕ್ತಪಡಿಸಿ ಅಭಿನಂದನೆ ಸಲ್ಲಿಸಿದ್ದಾರೆ.




